ಬೆಂಗಳೂರು, ಮೇ 23:
ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಆಡಳಿತ ಯಂತ್ರಕ್ಕೆ ಚುರುಕು ನೀಡಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಕೃಷಿ ಚಟುವಟಿಕೆ ಆರಂಭವಾಗಿದೆ. ಬೀತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ತಾಕೀತು ಮಾಡಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಇತರೆ ಸಚಿವರೊಂದಿಗೆ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ಜೊತೆಯಲ್ಲಿ ಎಲ್ಲಾ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಣಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು.
ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಕೃಷಿ ಯಂತ್ರೋಪಕರಣಗಳ ಹೆಸರಿನಲ್ಲಿ ರೈತರಿಂದ ಅಧಿಕ ಹಣ ವಸೂಲಿ ಮಾಡುವವರ ಮೇಲೆ ನಿಗಾವಹಿಸಬೇಕು. ಬಿತ್ತನೆ ಸಮಯದಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ಮಾದರಿ, ಮಣ್ಣಿನ ಫಲವತ್ತತೆ, ಮಾರುಕಟ್ಟೆ ನಿರೀಕ್ಷೆ, ರೋಗ ನಿಯಂತ್ರಣ ಕುರಿತು ರೈತರಿಗೆ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಕಾಲದಲ್ಲಿ ರೈತರಿಗೆ ಸಾಲ ಸಿಗುವುದನ್ನು ಖಾತರಿಪಡಿಸಬೇಕು. ಈ ವರ್ಷದ ಸಾಲ ಯೋಜನೆ ಈಗಾಗಲೇ ಜಿಲ್ಲಾಡಳಿತಗಳಿಗೆ ಕಳುಹಿಸಲಾಗಿದೆ. ಜಿಲ್ಲಾ ಬ್ಯಾಂಕರುಗಳೊಂದಿಗೆ ಸಮನ್ವಯ ವಹಿಸಿ, ಕ್ರಮ ಕೈಗೊಳ್ಳಲು ಸೂಚಿಸಿದರು.
ನೀರು, ಮಣ್ಣಿನ ಫಲವತ್ತತೆ ರಕ್ಷಣೆಯ ಜೊತೆಗೆ, ಕಡಿಮೆ ಭೂಮಿಯಲ್ಲಿ ಹೆಚ್ಚು ಇಳುವರಿ ಪಡೆಯುವ ತಳಿಗಳ ಬಗ್ಗೆ ತಿಳಿವಳಿಕೆ ನೀಡಬೇಕು. ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ಮೀನುಗಾರಿಕೆ, ರೇಷ್ಮೆ, ಸಹಕಾರ, ಕಂದಾಯ, ಗ್ರಾಮೀಣಾಭಿವೃದ್ಧಿ ಇಲಾಖೆಗಳು ಪರಸ್ಪರ ಸಹಕಾರದಿಂದ ಕೆಲಸ ಮಾಡುವಂತೆ ಸಲಹೆ ಮಾಡಿದರು.
ಬರ ಪರಿಹಾರ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕರುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.ಬೆಳೆ ವಿಮೆ ಕ್ಲೇಮ್ ಮಾಡುವ ಸಂದರ್ಭದಲ್ಲಿ ಕಂಪೆನಿಗಳ ಸ್ಯಾಂಪಲ್ ಪರಿಶೀಲನೆಯ ಕುರಿತು ರೈತರು ಹಲವು ಸಂದೇಹಗಳನ್ನು ಹೊಂದಿದ್ದಾರೆ. ಕಂಪನಿಗಳು ಆಡುವ ಆಟದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುವ ಅಪಾಯವಿದೆ.ಈ ಕುರಿತು ಮುಂಚಿತವಾಗಿಯೇ ವಿಮಾ ಕಂಪೆನಿಗಳೊಂದಿಗೆ ಚರ್ಚಿಸಿ, ರೈತರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.
ಚುನಾವಣಾ ಆಯೋಗ ನೀತಿ ಸಂಹಿತೆ ಸಡಿಲಗೊಳಿಸಿದ್ದು, ಅಧಿಕಾರಿಗಳು ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸಿ, ವರ್ಷದ ಕೆಲಸವನ್ನು 10 ತಿಂಗಳಿನಲ್ಲಿ ಪೂರ್ಣಗೊಳಿಸಲು ಕಟಿಬದ್ಧರಾಗಿ ಕೆಲಸ ಮಾಡಬೇಕು, ಬಜೆಟ್ ಘೋಷಣೆಗಳಿಗೆ ಜೂನ್ ಕೊನೆಯ ವೇಳೆಗೆ ಆದೇಶ ಹೊರಡಿಸುವಂತೆ ನಿರ್ದೇಶನ ನೀಡಿದರು.
Previous Article60 ಕೋಟಿ ರೂಪಾಯಿ ಮೌಲ್ಯ ದ ಅರಣ್ಯ ಭೂಮಿ ವಶ.
Next Article ಪಾರ್ಟಿಯಲ್ಲಿ ಡ್ರಗ್ಸ್ ಸೇವಿಸಿದ ತೆಲುಗು ನಟಿಯರು.