ಬೆಂಗಳೂರು,ಮೇ.23
ಲೈಂಗಿಕ ಕಿರುಕುಳ ಆರೋಪದ ಪೆನ್‌ಡ್ರೈವ್ ಪ್ರಕರಣದ ಕೇಂದ್ರಬಿಂದು ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ರದ್ದುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿಯವರಿಗೆ ಎರಡನೇ ಬಾರಿ ಪತ್ರ ಬರೆದಿದ್ದಾರೆ.
ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಂಡರೆ ಅವರು ಭಾರತಕ್ಕೆ ಮರಳಬೇಕಾಗುತ್ತದೆ. ಅವರನ್ನು ವಶಕ್ಕೆ ಪಡೆದು ಕ್ರಮ ಕೈಗೊಳ್ಳಲು ಅನುಕೂಲವಾಗಲಿದೆ ಎಂದು ವಿವರಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡನೇ ಬಾರಿ ಪತ್ರ ಮುಖೇನ ಮನವಿ ಮಾಡಿರುವ ಬೆನ್ನಲ್ಲೇ ವಿದೇಶಾಂಗ ಸಚಿವಾಲಯ (ಎಂಇಎ)ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದತಿಗೆ ಮುಂದಾಗಿದೆ.
ರಾಜ್ಯ ಸರ್ಕಾರದ ಪತ್ರ ಆಧರಿಸಿ ಕೆಲಸಕ್ಕೆ ಆರಂಬಿಸಿರುವ ಕೇಂದ್ರ ವಿದೇಶಾಂಗ ಇಲಾಖೆ, ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಮಾಡುವ ಪ್ರಕ್ರಿಯೆ ಆರಂಭಿಸಿದೆ
ಮುಖ್ಯಮಂತ್ರಿ ತಮ್ಮ ಪತ್ರದಲ್ಲಿ ಗಂಭೀರ ಸ್ವರೂಪದ ಸರಣಿ ಕೃತ್ಯಗಳಲ್ಲಿ ಪ್ರಜ್ವಲ್ ರೇವಣ್ಣ ಭಾಗಿಯಾಗಿರುವುದು ಜನರಿಗೆ ಘಾಸಿಯುಂಟು ಮಾಡಿರುವುದಷ್ಟೇ ಅಲ್ಲ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಕಳವಳಕ್ಕೆ ಕಾರಣವಾಗಿದೆ. ಪ್ರಜ್ವಲ್ ರೇವಣ್ಣ ಹಾಲಿ ಸಂಸದ ಹಾಗೂ ಮಾಜಿ ಪ್ರಧಾನಿಗಳ ಕುಟುಂಬದ ಸದಸ್ಯನಾಗಿದ್ದು, ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಪ್ರಯಾಣ ಮಾಡಿದ್ದಾರೆ.
ಎಫ್ ಐಆರ್ ದಾಖಲಾಗುವ ಕೆಲ ಗಂಟೆಗಳಿಗೆ ಮುನ್ನ ಸಂಸದ ಪ್ರಜ್ವಲ್ ದೇಶ ತೊರೆದಿದ್ದಾರೆ. ಅವರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಒತ್ತಾಯ ಪೂರ್ವಕವಾಗಿ ವಿಡಿಯೋ ಮಾಡಿರುವ ಆರೋಪಗಳಿವೆ. ಇಂತಹ ಆರೋಪಿ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಕಾನೂನು ಕ್ರಮಗಳಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಆರೋಪಿ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡಿ. ಈ ವಿಚಾರವನ್ನು ಅತ್ಯಂತ ಗಂಭೀರ ಎಂದು ಪರಿಗಣಿಸಿ. ಸಾರ್ವಜನಿಕ ಹಿತಾಸಕ್ತಿ ಕಾರಣಕ್ಕಾಗಿ ಪಾಸ್‌ಪೋರ್ಟ್ ರದ್ದುಗೊಳಿಸಿ ಭಾರತಕ್ಕೆ ಬರುವಂತೆ ಮಾಡಿ ಎಂದು ಪತ್ರದಲ್ಲಿ ಮನವಿ ವಿವರಿಸಿದ್ದಾರೆ.
ಭಾರತೀಯ ವಿದೇಶಾಂಗ ಇಲಾಖೆಗೆ ಎಸ್‌ಐಟಿ ಅಧಿಕಾರಿಗಳು ರಾಜ್ಯ ಗೃಹ ಇಲಾಖೆ ಮುಖಾಂತರ ಪತ್ರ ರವಾನಿಸಿದ್ದಾರೆ. ಈ ಹಿಂದೆ ಮುಖ್ಯಮಂತ್ರಿ ಪತ್ರ ಬರೆದಿದ್ದ ವೇಳೆ ನ್ಯಾಯಾಲಯದ ಆದೇಶ ಬೇಕು ಎಂದು ಕೇಂದ್ರ ಗೃಹ ಇಲಾಖೆ ಹೇಳಿತ್ತು. ಹಾಗಾಗಿ ನ್ಯಾಯಾಲಯದಿಂದ ಬಂಧನ ವಾರಂಟ್ ಪಡೆದು ಎಸ್‌ಐಟಿ ಅಧಿಕಾರಿಗಳು ಪುನಃ ಪತ್ರ ಬರೆದಿದ್ದಾರೆ. ಹೀಗಾಗಿ ಭಾರತೀಯ ವಿದೇಶಾಂಗ ಇಲಾಖೆಯು ಪಾಸ್‌ಪೋರ್ಟ್ ರದ್ದು ಪ್ರಕ್ರಿಯೆಯನ್ನು ಆರಂಭಿಸಿದೆ.
ಪಾಸ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಭಾರತೀಯ ವಿದೇಶಾಂಗ ಇಲಾಖೆ ಅಡಿಯಲ್ಲಿ ಬರುತ್ತದೆ. ಎಸ್‌ಐಟಿಯಿಂದ ಬಂದಿರುವ ಪತ್ರವನ್ನು ದೃಢೀಕರಣಕ್ಕಾಗಿ ಕೇಂದ್ರ ಗೃಹ ಇಲಾಖೆಗೆ ರವಾನೆ ಮಾಡುತ್ತದೆ. ಕೇಂದ್ರ ಗೃಹ ಇಲಾಖೆ ಪರಿಶೀಲನೆ ನಡೆಸಿ ಸಮ್ಮತಿ ಸೂಚಿಸಿದರೆ ಭಾರತೀಯ ವಿದೇಶಾಂಗ ಇಲಾಖೆಯು ಪಾಸ್‌ಪೋರ್ಟ್ ಅನ್ನು ರದ್ದು ಮಾಡುತ್ತದೆ.
ಪ್ರಜ್ವಲ್ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದತಿಗೆ ಪ್ರಕ್ರಿಯೆ.
Previous Articleಭವಾನಿ ರೇವಣ್ಣ ಕಾರು ಚಾಲಕ ನಾಪತ್ತೆ.
Next Article ರಾಜ್ಯದಲ್ಲಿ ಕಾಂಗ್ರೆಸ್ ಗೆ 20 ಸ್ಥಾನ ಗ್ಯಾರಂಟಿ.