ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ಹಳೆಯ ಪದ್ದತಿ ಇಲ್ಲವೇ ಹೊಸದಾಗಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಿ ಚುನಾವಣೆ ನಡೆಸಲು ಅವಕಾಶ ಕಲ್ಪಿಸುವಂತೆ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಜಿಲ್ಲಾ ಹಾಗು ತಾಲ್ಲೂಕು ಪಂಚಾಯ್ತಿ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡದೆ ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂಬ ನಮ್ಮ ನಿಲುವಾಗಿದೆ ಎಂದು ಹೇಳಿದರು.
ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವ ಕುರಿತು ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ. ಇದರಂತೆ ನಮ್ಮ ವಕೀಲರು ಅರ್ಜಿಯನ್ನು ಸಲ್ಲಿಕೆ ಮಾಡಲಿದ್ದಾರೆ ಎಂದು ತಿಳಿಸಿದರು.
ಸರ್ಕಾರದ ನಿಲುವನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಲಿದ್ದೇವೆ. ಹಾಲಿ ಇರುವ ಹಳೇ ಮೀಸಲಾತಿಯಲ್ಲಾಗಲಿ ಇಲ್ಲವೇ ಹೊಸದಾಗಿ ಮೀಸಲಾತಿ ಕಲ್ಪಿಸಲು ಅವಕಾಶ ನೀಡಬೇಕೆಂದು ನ್ಯಾಯಾಲಯಕ್ಕೆ ಮನವರಿಕೆ ಮಾಡುತ್ತೇವೆ. ಖಂಡಿತವಾಗಿಯೂ ನಮಗೆ ನ್ಯಾಯಾಲಯ ನಮ್ಮ ಮನವಿಯನ್ನು ಪರಿಗಣಿಸಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
ಓಬಿಸಿಗಳಿಗೆ ಮೀಸಲಾತಿ ಕೊಡದೆ ಚುನಾವಣೆ ನಡೆಸಲು ಸಾಧ್ಯವೇ ಇಲ್ಲ. ಇದು ನಮ್ಮ ಪಕ್ಷ ಮತ್ತು ಸರ್ಕಾರದ ನಿಲುವು ಕೂಡ. ವಿರೋಧ ಪಕ್ಷದವರೂ ಕೂಡ ಕೆಲವು ಸಲಹೆಗಳನ್ನು ನೀಡಿದ್ದಾರೆ. ಅದೆಲ್ಲವನ್ನೂ ಪರಿಗಣಿಸಿಯೇ ನಾವು ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದರು.
ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕೊಡುವ ಸಂಬಂಧ ಆಯೋಗಗಳು ಮತ್ತು ಸಮಿತಿ ನೀಡಿರುವ ಶಿಫಾರಸ್ಸನ್ನು ನ್ಯಾಯಾಲಯಕ್ಕೆ ತಿಳಿಸಲಿದ್ದೇವೆ. ಮಧ್ಯಪ್ರದೇಶ ಪ್ರಕರಣದಲ್ಲಿ ನೀಡಿರುವ ತೀರ್ಪಿಗೆ ಕನಿಷ್ಟ ಮೂರು ತಿಂಗಳಾದರೂ ಕಾಲಾವಕಾಶ ಕೊಡುವಂತೆ ಮನವಿ ಮಾಡುವುದಾಗಿ ಹೇಳಿದರು.