ಬೆಂಗಳೂರು,ಅ.1:
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಇದೀಗ ಜಾಗತಿಕ ಮನ್ನಣೆಗೆಟ್ಟಿಸಿಕೊಂಡಿದೆ.
ಸೇವೆ ಮತ್ತು ವಿಶ್ವಾಸಾರ್ಹತೆ ಸೇರಿದಂತೆ ಹಲವಾರು ಕಾರಣಗಳಿಂದ ದೇಶದ ಗಮನ ಸೆಳೆದಿರುವ ಈ ಯೋಜನೆಗೆ ಅನೇಕ ಪ್ರಶಸ್ತಿಗಳು ಲಭಿಸಿದೆ ಇದೀಗ ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದ್ದು,ಇಂಟರ್ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಹಾಗೂ ವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್ ಅವಾರ್ಡ್ ಗಿಟ್ಟಿಸಿಕೊಂಡಿದೆ.
ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ನೀಡಿದ್ದ ಗ್ಯಾರಂಟಿ ಭರವಸೆಗಳ ಪೈಕಿ ಶಕ್ತಿ ಯೋಜನೆಯನ್ನು ಮೊಟ್ಟ ಮೊದಲ ಬಾರಿಗೆ ಜಾರಿಗೊಳಿಸಲಾಗಿತ್ತು.
2023ರ ಜೂನ್ 11ರಂದು ಜಾರಿಗೊಂಡಿರುವ ಈ ಯೋಜನೆ ಅನ್ವಯ ಇಲ್ಲಿಯವರೆಗೆ
ಕೆಎಸ್‌ಆರ್‌ಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ, ಬಿಎಂಟಿಸಿ ಹಾಗೂ ಕೆಕೆಆರ್‌ಟಿಸಿಯಲ್ಲಿ ಇಲ್ಲಿಯವರೆಗೂ 504 ಕೋಟಿ 90 ಲಕ್ಷ ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಬಸ್‌ನಲ್ಲಿ ಸಂಚಾರ ಮಾಡುವ ಮೂಲಕ ಹೊಸ ದಾಖಲೆ ಸೃಷ್ಟಿಯಾಗಿದೆ ಇದನ್ನು ಪರಿಗಣಿಸಿ,ಇಂಟರ್ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಹಾಗೂ ವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್ ಅವಾರ್ಡ್ ಘೋಷಿಸಲಾಗಿದೆ ಮಹಿಳಾ ಸಬಲೀಕರಣಕ್ಕೆ ನೀಡಿರುವ ಕೊಡುಗೆಯನ್ನು ಗಮನಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಹೇಳಿದೆ.
ಪ್ರಶಸ್ತಿ ಲಭಿಸಿರುವುದಕ್ಕೆ ಅತೀವ ಸಂತಸ ವ್ಯಕ್ತಪಡಿಸಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ,ಶಕ್ತಿ ಯೋಜನೆಯು ಮಹಿಳೆಯರನ್ನು ಆರ್ಥಿಕ, ಸಾಮಾಜಿಕ, ಔದ್ಯೋಗಿಕವಾಗಿ ಸಬಲರನ್ನಾಗಿಸಿದೆ. ಶಕ್ತಿ ಯೋಜನೆಯನ್ನು ಕಂಡ ದೇಶದ ವಿವಿಧ ರಾಜ್ಯಗಳು ಈ ಯೋಜನೆ ಜಾರಿ ತರಲು ಚಿಂತಿಸಿವೆ. ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆಯಾಗಿರುವುದು ಹೆಮ್ಮೆಯ ವಿಷಯ. ಈ ಹಿನ್ನೆಲೆ ನಾಲ್ಕು ನಿಗಮಗಳ ಅಧಿಕಾರಿ, ಸಿಬ್ಬಂದಿ, ಕಾರ್ಮಿಕ ಮುಖಂಡರಿಗೆ ಮಹಿಳಾ ಪ್ರಯಾಣಿಕರಿಗೂ ಧನ್ಯವಾದ ಎಂದು ಹೇಳಿದ್ದಾರೆ

