ಬೆಂಗಳೂರು, ಮಾ.22:
ಬಾಟಲಿಗಳಲ್ಲಿ ತುಂಬಿ ಮಾರಾಟ ಮಾಡುವ ಖನಿಜಯುಕ್ತ ನೀರು ಬಳಕೆ ಮಾಡಿದ ನಂತರ ಪ್ಲಾಸ್ಟಿಕ್ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ.
ಈ ಬಾಟಲಿಗಳಲ್ಲಿನ ನೀರು ಕುಡಿದ ಬಳಿಕ ಪ್ಲಾಸ್ಟಿಕ್ ಬಾಟಲಿಗಳನ್ನು ಎಲ್ಲೆಂದರಲ್ಲಿ ಎಸೆಯಲಾಗುತ್ತಿದೆ. ಇದರಿಂದ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಸುಲಭವಾಗಿ ಕೊಳೆಯದ ಇದು ಮಣ್ಣು ಮತ್ತು ಅಂತರ್ಜಲದ ಮೇಲೆ ಸಾಕಷ್ಟು ದುಷ್ಪರಿಣಾಮ ಬೀರುತ್ತಿದೆ.
ಇದಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಅರಣ್ಯ ಮತ್ತು ಪರಿಸರ ಮಂತ್ರಿ ಈಶ್ವರ ಖಂಡ್ರೆ, ನೀರಿನ ಬಾಟಲಿ ಮಾರುವ ಮಳಿಗೆಗಳು ಕಡ್ಡಾಯವಾಗಿ ಖಾಲಿ ನೀರಿನ ಬಾಟಲಿಗೆ ಕನಿಷ್ಠ ಬೆಲೆ ನೀಡಿ ಮರು ಖರೀದಿಸುವಂತೆ ನಿಯಮ ರೂಪಿಸಲು ಮುಂದಾಗಿದ್ದಾರೆ.
ಈ ಸಂಬಂಧ ನಿಯಮ ರೂಪಿಸುವಂತೆ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿರುವ ಅವರು, ಬಾಟಲಿಗಳ ಮೂಲಕ ಕುಡಿಯುವ ನೀರನ್ನು ಮಾರಾಟ ಮಾಡುವ ಕಂಪನಿಗಳಿಗೆ ಆ ಪ್ಲಾಸ್ಟಿಕ್ ಬಾಟಲಿಯ ವೈಜ್ಞಾನಿಕ ವಿಲೇವಾರಿಯ ಜವಾಬ್ದಾರಿಯೂ ಇರುತ್ತದೆ ಎಂಬುದನ್ನು ಮನದಟ್ಟು ಮಾಡಲು ತಿಳಿಸಿದ್ದಾರೆ
ಈ ಹಿನ್ನೆಲೆಯಲ್ಲಿ ಖಾಲಿ ಬಾಟಲಿಗಳನ್ನು ಕನಿಷ್ಠ ದರ ನೀಡಿ ಮರಳಿ ಖರೀದಿಸುವಂತೆ ನಿಯಮ ರೂಪಿಸಬೇಕು ಹೀಗೆ ಮಾಡಿದರೆ ಪ್ಲಾಸ್ಟಿಕ್ ಬಾಟಲಿಗಳ ವಿಲೇವಾರಿ ಸುಲಭವಾಗಲಿದ್ದು ಅವುಗಳಿಂದ ಪರಿಸರದ ಮೇಲಾಗುತ್ತಿರುವ
ಹಾನಿ ತಡೆಯಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಮಣ್ಣಲ್ಲಿ ಮಣ್ಣಾಗದ, ನೀರಿನಲ್ಲಿ ಕರಗದ, ಸುಟ್ಟರೆ ಪ್ರಾಣವಾಯುವಿಗೆ ವಿಷಕಾರಿ ಅಂಶಗಳನ್ನು ಸೇರ್ಪಡೆ ಮಾಡುವ ಪ್ಲಾಸ್ಟಿಕ್ ಪ್ರಕೃತಿ ಪರಿಸರಕ್ಕೆ ಅಷ್ಟೇ ಅಲ್ಲದೆ ಜನ, ಜಾನುವಾರಗಳ ಆರೋಗ್ಯಕ್ಕೂ ಮಾರಕವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಿರ್ದಿಷ್ಟ ಏಕ ಬಳಕೆ ಪ್ಲಾಸ್ಟಿಕ್ ತಯಾರಿಕೆ, ದಾಸ್ತಾನು, ಮಾರಾಟ, ಬಳಕೆಯನ್ನು ನಿಷೇಧಿಸಿದ್ದು, ರಾಜ್ಯ ಸರ್ಕಾರ ಕೂಡ ಈ ಸಂಬಂಧ ನಿಯಮಗಳನ್ನು ರೂಪಿಸಿದೆ. ಆದಾಗ್ಯೂ ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿದ್ದು, ಪರಿಸರಕ್ಕೆ ಹಾನಿ ಆಗುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಮೊದಲಿಗೆ ರಸ್ತೆಯ ಬದಿಯಲ್ಲಿ ಎಲ್ಲೆಂದರಲ್ಲಿ ಬಿದ್ದು ಪರಿಸರ ಹಾಳು ಮಾಡುತ್ತಿರುವ, ಖನಿಜಯುಕ್ತ ನೀರಿನ ಬಾಟಲಿ ಗೆ ಕಡಿವಾಣ ಹಾಕಬೇಕಾಗಿದೆ ಎಂದು ಹೇಳಿದ್ದಾರೆ
ಹೊಸ ನೀರಿನ ಬಾಟಲಿ ಖರೀದಿಸಲು ಬರುವ ಗ್ರಾಹಕರಿಂದ ಬಾಟಲಿ ನೀರು ಮಾರುವ ಚಿಲ್ಲರೆ ಮಳಿಗೆಗಳು ಯಾವುದೇ ಕಂಪನಿಯ ನೀರಿನ ಬಾಟಲಿ ನೀಡಿದರೂ ಅದಕ್ಕೆ ಕನಿಷ್ಠ ಬೆಲೆ ನೀಡಿ ಇಲ್ಲವೇ ಅಷ್ಟು ದರ ಕಡಿತ ಮಾಡಿ ಹೊಸ ಬಾಟಲಿ ಮಾರಾಟ ಮಾಡುವಂತೆ ಮತ್ತು ಈ ರೀತಿ ಸಂಗ್ರಹಿಸಲಾದ ಖಾಲಿ ಬಾಟಲಿಗಳನ್ನು ನೀರು ಮಾರಾಟ ಮಾಡುವ ಕಂಪನಿಗಳೇ ಹಿಂಪಡೆದು, ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದನ್ನು ಕಡ್ಡಾಯಗೊಳಿಸಲು ಸೂಚಿಸಿದ್ದಾರೆ.
ಉತ್ಪಾದಕರ ವಿಸ್ತರಿತ ಜವಾಬ್ದಾರಿ ಯಂತೆ ಯಾವುದೇ ಉತ್ಪನ್ನವನ್ನು ತಯಾರಿಸುವವರು, ತಮ್ಮ ಉತ್ಪನ್ನಗಳಿಂದ ಪರಿಸರ ಮೇಲಾಗುವ ಪರಿಣಾಮಗಳನ್ನು ಉತ್ಪನ್ನವು ಗ್ರಾಹಕರ ಕೈಸೇರಿದ ನಂತರವೂ ನಿರ್ವಹಿಸುವ ಜವಾಬ್ದಾರಿ ಹೊಂದಿರುತ್ತಾರೆ. ಈ ಹಿನ್ನೆಲೆಯಲ್ಲಿ ಖಾಲಿ ಬಾಟಲಿಗಳನ್ನು ನೀರು ಮಾರಾಟ ಮಾಡುವ ಕಂಪನಿಗಳೇ ಮರು ಖರೀದಿ ಮಾಡಿ ವಿಲೇವಾರಿ ಮಾಡಿದಲ್ಲಿ ಬೃಹತ್ ಪ್ರಮಾಣದಲ್ಲಿ ಸಂಗ್ರಹವಾಗುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಿಸಬಹುದು ಎಂಬುದು ಈಶ್ವರ ಖಂಡ್ರೆ ಅವರ ಅಭಿಮತವಾಗಿದೆ.