ಬೆಂಗಳೂರು,ಜು.7:
ಅಧಿಕಾರ ಹಸ್ತಾಂತರ, ಸೆಪ್ಟೆಂಬರ್ ಕ್ರಾಂತಿ ಸೇರಿದಂತೆ ರಾಜ್ಯ ಕಾಂಗ್ರೆಸ್ಸಿನಲ್ಲಿ ಬಿರುಸಿನ ವಿದ್ಯಮಾನಗಳು ನಡೆಯುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತ್ಯೇಕವಾಗಿ ದೆಹಲಿ ಯಾತ್ರೆ ಕೈಗೊಳ್ಳುತ್ತಿದ್ದಾರೆ.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಾಳೆ ಸಂಜೆ ದೆಹಲಿಕೆ ತೆರಳುತ್ತಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಬೆಳಗ್ಗೆ ದೆಹಲಿಗೆ ತೆರಳುವ ಸಾಧ್ಯತೆ ಇದೆ
ಇಬ್ಬರು ನಾಯಕರ ಅಧಿಕೃತ ಭೇಟಿ ಕೇಂದ್ರದ ಸಚಿವರನ್ನು ಭೇಟಿ ಮಾಡುವುದಾದರೂ, ಇದೇ ಸಂದರ್ಭದಲ್ಲಿ ಹೈಕಮಾಂಡ್ ನಾಯಕರ ಜೊತೆಗೆ ಅವರು ಮಾತುಕತೆ ನಡೆಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಅದರಲ್ಲೂ ರಾಜ್ಯದಲ್ಲಿ ನಡೆಯುತ್ತಿರುವ ನಾಯಕತ್ವ ಬದಲಾವಣೆ ಚರ್ಚೆಯ ಹಿನ್ನೆಲೆಯಲ್ಲಿ ಈ ಭೇಟಿ ಸಹಜವಾಗಿ ಕುತೂಹಲಕ್ಕೆ ಕಾರಣವಾಗಿದೆ.
ಕೆಲವು ದಿನಗಳಿಂದ ವಿದೇಶ ಪ್ರವಾಸದಲ್ಲಿದ್ದ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ತಡರಾತ್ರಿ ದೆಹಲಿಗೆ ಆಗಮಿಸುತ್ತಿದ್ದಾರೆ ಈ ಹಿನ್ನೆಲೆಯಲ್ಲಿ ಅವರನ್ನು ಭೇಟಿಯಾಗಲು ಇಬ್ಬರು ನಾಯಕರು ತೆರಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳ ನಾಮಕರಣ, ನಿಗಮ ಮಂಡಳಿಗಳ ನೇಮಕಾತಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಸೇರಿದಂತೆ ಹಲವಾರು ಪ್ರಮುಖ ರಾಜಕೀಯ ವಿದ್ಯಮಾನಗಳ ಕುರಿತು ಉಭಯ ನಾಯಕರು ಅವರೊಂದಿಗೆ ಸಮಾಲೋಚನೆ ನಡೆಸುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಕಳೆದ ವಿಧಾನಸಭೆ ಚುನಾವಣೆಯ ಸಮಯದಲ್ಲಿ ಅಧಿಕಾರ ಹಂಚಿಕೆ ಕುರಿತಂತೆ ನಡೆದಿದೆ ಎನ್ನಲಾದ ಒಪ್ಪಂದ ಸೂತ್ರ ಜಾರಿಗೆ ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ಪ್ರಯತ್ನ ಆರಂಭಿಸಿದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸುಳಿವು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಮುಖ್ಯಮಂತ್ರಿ ಹುದ್ದೆ ತೊರೆಯುವ ಸಿದ್ದರಾಮಯ್ಯ ಅವರನ್ನು ಪಕ್ಷ ಸಂಘಟನೆಯಲ್ಲಿ ಬಳಸಲು ಹೈಕಮಾಂಡ್ ತೀರ್ಮಾನಿಸಿದೆ ಅದರಲ್ಲೂ ಸಿದ್ದರಾಮಯ್ಯ ಅವರಿಗೆ ಇರುವ ಹಿಂದುಳಿದ ವರ್ಗಗಳ ಪ್ರಭಾವಿ ನಾಯಕ ಎಂಬ ವಿಶೇಷಣವನ್ನೇ ಪ್ರಮುಖವಾಗಿ ಬಳಸಲು ತೀರ್ಮಾನಿಸಿದೆ ಇದಕ್ಕಾಗಿಯೇ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಸಂಘಟನೆಯನ್ನು ಪ್ರಬಲವಾಗಿ ಕಟ್ಟುವ ದೃಷ್ಟಿಯಿಂದ ಸಲಹಾ ಸಮಿತಿ ರಚಿಸಲಾಗಿದ್ದು ಅದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಮುಖ ಜವಾಬ್ದಾರಿ ನೀಡಲಾಗುತ್ತಿದೆ.
ಈ ಎಲ್ಲ ವಿಚಾರಗಳ ಕುರಿತಂತೆ ರಾಹುಲ್ ಗಾಂಧಿ ಅವರ ಜೊತೆಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಪ್ರತ್ಯೇಕವಾಗಿ ಚರ್ಚೆ ನಡೆಸುವ ಸಾಧ್ಯತೆ ಇದೆ ಇದಕ್ಕಾಗಿ ಅವರು ದೆಹಲಿಗೆ ತೆರಳುತ್ತಿದ್ದಾರೆ ಆದರೆ ಮುಖ್ಯಮಂತ್ರಿಗಳ ಕಚೇರಿ ರಾಜಕೀಯ ಉದ್ದೇಶಕ್ಕಾಗಿ ದೆಹಲಿ ಯಾತ್ರೆ ಕೈಗೊಳ್ಳುತ್ತಿಲ್ಲ ಎಂದು ಹೇಳಿದೆ.
ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವದ ವೇಳೆ ಏರ್ ಶೋ ಆಯೋಜಿಸಲಾಗುತ್ತಿದೆ ಈ ಬಗ್ಗೆ ಕೇಂದ್ರ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಅವರೊಂದಿಗೆ ಚರ್ಚಿಸಲು ಸಿದ್ದರಾಮಯ್ಯ ದೆಹಲಿಗೆ ಹೋಗುತ್ತಿದ್ದಾರೆ ಎಂದು ಅವರ ಕಚೇರಿಯ ಪ್ರಕಟಣೆ ತಿಳಿಸಿದೆ.
ಇನ್ನು ಸುದ್ದಿಗಾರರೊಂದಿಗೆ ಮಾತನಾಡಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಾಜ್ಯದ ಮತ್ತು ಬೆಂಗಳೂರಿನ ಕೇಂದ್ರ ಪುರಸ್ಕೃತ ಯೋಜನೆಗಳ ಬಗ್ಗೆ ಕೇಂದ್ರ ಮಂತ್ರಿಗಳೊಂದಿಗೆ ಚರ್ಚಿಸಲು ತಾವು ದೆಹಲಿಗೆ ತೆರಳುತ್ತಿರುವುದಾಗಿ ಹೇಳಿದ್ದಾರೆ.
Previous Articleಹೃದಯಾಘಾತಕ್ಕೆ ಕಾರಣ ಪತ್ತೆ ಹಚ್ಚಿದ ತಜ್ಞರು
Next Article ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?