ಬೆಂಗಳೂರು,ಮೇ.17-ಜೀವನ ಯೋಗ್ಯ ವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಇಂದು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ನೂರಾರು ಆಶಾ ಕಾರ್ಯಕರ್ತೆಯರು ಫ್ರೀಡಂಪಾರ್ಕ್ನಲ್ಲಿ ಸೇರಿ ಪ್ರತಿಭಟನೆ ನಡೆಸಿ ಕಾರ್ಯಕರ್ತರ ಬೇಡಿಕೆಗಳನ್ನು ಈಡೇರಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕಳೆದ15 ವರ್ಷಗಳಿಂದ ರಾಜ್ಯದೆಲ್ಲೆಡೆ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ಕೊರೊನಾ ಸಂದರ್ಭದಲ್ಲಿ ದಿನದ 24 ಗಂಟೆ ಸೇವೆ ಸಲ್ಲಿಸಿದ್ದು ಕೆಲಸಕ್ಕೆ ತಕ್ಕ ವೇತನ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ 3 ಸಾವಿರ, ರಾಜ್ಯ ಸರ್ಕಾರ 5 ಸಾವಿರ ಎನ್ನುತ್ತಿದೆ. ಕೇಂದ್ರ ಸರ್ಕಾರದಿಂದ ಕೇವಲ 650 ರೂ. ಮಾತ್ರ ಕೈಗೆ ಸಿಗುತ್ತಿದೆ. ಪ್ರೋತ್ಸಾಹ ಧನ, ಗೌರವಧನ ಒಗ್ಗೂಡಿಸಿ ಮಾಸಿಕ ವೇತನ ನೀಡಬೇಕು ಎಂದು ಒತ್ತಾಯಿಸಿದರು.
ಆರ್ಸಿಹೆಚ್ ಪೋರ್ಟಲ್ ಡೇಟಾ ಎಂಟ್ರಿ ಸಮಸ್ಯೆ ಬಗೆಹರಿಸಬೇಕು. ಆಶಾ ಕಾರ್ಯಕರ್ತೆಯರಿಗೆ ಆಗುತ್ತಿರುವ ನಷ್ಟ ತುಂಬಿಕೊಡಬೇಕು. ಆರೋಗ್ಯ ಮತ್ತು ನಿವೃತ್ತ ಪರಿಹಾರ ಸೇರಿದಂತೆ ಹಲವು ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿದರು.
ಕಳೆದ ಬಾರಿಯೂ ಐವತ್ತು ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ನಗರದಲ್ಲಿ ಆಗಮಿಸಿ ಪ್ರತಿಭಟನೆ ನಡೆಸಿದ್ದು ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಮತ್ತೆ ಪ್ರತಿಭಟನ ನಡೆಸಲಾಗುತ್ತಿದೆ ಸರ್ಕಾರ ಆಶಾ ಕಾರ್ಯಕರ್ತೆಯರು ನ್ಯಾಯಯುತ ಬೇಡಿಕೆ ಈಡೇರಿಸದಿದ್ದರೆ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದರು.
ಪ್ರತಿಭಟನೆ ಹಿನ್ನೆಲೆಯಲ್ಲಿ ಆನಂದ್ ರಾವ್ ವೃತ್ತದ ಸುತ್ತಮುತ್ತಲಿನ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ಬಿಗಿ ಪೊಲೀಸ್ ಬಂದೋಬಸ್ಥ್ ಮಾಡಲಾಗಿತ್ತು