ಬೆಂಗಳೂರು,ಜ.31-ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರ ಚಿನ್ನಾಭರಣಗಳನ್ನು ಕೊಂಡೊಯ್ಯಲು
ಛಾಯಾಗ್ರಾಹಕರು, ವಿಡಿಯೋಗ್ರಾಫರ್ ಮತ್ತು ಆರು ದೊಡ್ಡ ಪೆಟ್ಟಿಗೆಗಳ (ಟ್ರಂಕ್) ಜೊತೆಗೆ ಅಗತ್ಯ ಭದ್ರತೆಯೊಂದಿಗೆ ಆಗಮಿಸುವಂತೆ ತಮಿಳುನಾಡು ಸರ್ಕಾರಕ್ಕೆ ನಗರದ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ತಿಳಿಸಿದೆ.
ಆರ್‌ಟಿಐ ಕಾರ್ಯಕರ್ತ ಟಿ.ನರಸಿಂಹಮೂರ್ತಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನಗರದ 36ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು, 2025ರ ಫೆಬ್ರವರಿ 14 ಮತ್ತು 15ರಂದು ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಸೂಚನೆ ನೀಡಿದರು.
ಜಯಲಲಿತಾ ಅವರ ಆಸ್ತಿಗೆ ತಾವೇ ವಾರಸುದಾರರು ಎಂದು ಅವರ ಸಹೋದರನ ಸಂಬಂಧಿಗಳು ಸಲ್ಲಿಸಿದ್ದ ಮೇಲ್ಮನವಿಗಳನ್ನು ಹೈಕೋರ್ಟ್ ಇತ್ತೀಚೆಗೆ ವಜಾಗೊಳಿಸಿ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯ ಮತ್ತೊಮ್ಮೆ ಈ ಆದೇಶ ಮಾಡಿದೆ.
ಏನೆಲ್ಲಾ ವಸ್ತುಗಳಿವೆ?:
7,040 ಗ್ರಾಂ ತೂಕದ 468 ಬಗೆಯ ಚಿನ್ನ ಹಾಗೂ ವಜ್ರಖಚಿತ ಆಭರಣಗಳು, 700 ಕೆಜಿ ತೂಕದ ಬೆಳ್ಳಿ ಆಭರಣಗಳು, 740 ದುಬಾರಿ ಚಪ್ಪಲಿಗಳು, 11,344 ರೇಷ್ಮೆ ಸೀರೆಗಳು, 250 ಶಾಲು, 12 ರೆಫ್ರಿಜಿರೇಟರ್, 10 ಟಿವಿ ಸೆಟ್, 8 ವಿಸಿಆರ್, 1 ವಿಡಿಯೋ ಕ್ಯಾಮೆರಾ, 4 ಸಿಡಿ ಪ್ಲೇಯರ್, 2 ಆಡಿಯೋ ಡೆಕ್, 24 ಟೂ-ಇನ್ ಒನ್ ಟೇಪ್ ರೆಕಾರ್ಡರ್, 1040 ವಿಡಿಯೋ ಕ್ಯಾಸೆಟ್, 3 ಐರನ್ ಲಾಕರ್, 1,93,202 ರೂ. ನಗದು ಸೇರಿದಂತೆ ಹಲವು ವಸ್ತುಗಳನ್ನು ಜಯಲಲಿತಾ ಅವರಿಂದ ಜಪ್ತಿ ಮಾಡಲಾಗಿತ್ತು.
ಪ್ರಕರಣದ ಹಿನ್ನೆಲೆ:
ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಬೆಂಗಳೂರಿನ ವಿಶೇಷ ನ್ಯಾಯಾಲಯವು ಜಯಲಲಿತಾಗೆ ನಾಲ್ಕು ವರ್ಷ ಜೈಲು ಮತ್ತು 100 ಕೋಟಿ ರೂ. ದಂಡ ವಿಧಿಸಿ 2014ರ ಸೆ.27ರಂದು ಆದೇಶಿಸಿತ್ತು. ಜೊತೆಗೆ, ಜಪ್ತಿ ಮಾಡಲಾದ ಬೆಲೆಬಾಳುವ ವಸ್ತುಗಳನ್ನು ಆರ್‌ಬಿಐ, ಎಸ್‌ಬಿಐಗೆ ಅಥವಾ ಸಾರ್ವಜನಿಕ ಹರಾಜು ಮೂಲಕ ಮಾರಾಟ ಮಾಡಬೇಕು. ಅದರಿಂದ ಬಂದ ಹಣವನ್ನು ದಂಡದ ಮೊತ್ತಕ್ಕೆ ಹೊಂದಾಣಿಕೆ ಮಾಡಬೇಕು ಎಂದು ನಿರ್ದೇಶಿಸಿತ್ತು. ಈ ನಡುವೆ ಜಯಲಿತಾ ಮೃತಪಟ್ಟಿದ್ದರು.
ಆದ್ದರಿಂದ ಜಯಲಲಿತಾರ ಒಡವೆಗಳ ಹಸ್ತಾಂತರ ಕುರಿತು ಆರ್‌ಟಿಐ ಕಾರ್ಯಕರ್ತ ನರಸಿಂಹ ಮೂರ್ತಿ ಅವರು ಜಯಲಲಿತಾ ಅವರ ವಸ್ತುಗಳ ವಿಲೇವಾರಿಗೆ ಕೈಗೊಂಡಿರುವ ಕ್ರಮಗಳ ಮಾಹಿತಿ ನೀಡುವಂತೆ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು
Previous Articleಮರಿ ರೌಡಿಯ ಅಟ್ಟಹಾಸಕ್ಕೆ ಬೆಚ್ಚಿದ ಜನ
Next Article ದುಪ್ಪಟ್ಟು ಲಾಭಕ್ಕಾಗಿ ದಿವಾಳಿಯಾದ