ಬೆಂಗಳೂರು,ಜೂ.24:
7ನೇ ವೇತನ ಆಯೋಗದ ಶಿಫಾರಸುಗಳನ್ನು ತಮಗೂ ವಿಸ್ತರಣೆ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳಿಗೆ ಅಗ್ರಹಿಸಿ ತುಮಕೂರು ಬೆಳಗಾವಿ ಸೇರಿ ರಾಜ್ಯದ ಎಲ್ಲ ಮಹಾನಗರ ಪಾಲಿಕೆ ಅಧಿಕಾರಿ, ನೌಕರರು ಸಾಮೂಹಿಕ ರಜೆ ಹಾಕಿ ಜುಲೈ 7ರಂದು ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ,ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಅಧ್ಯಕ್ಷ ಅಮೃತ್ ರಾಜ್, 10 ಮಹಾನಗರ ಪಾಲಿಕೆಯ ಅಧಿಕಾರಿ ಮತ್ತು ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ, ಹಲವಾರು ಬಾರಿ ಮನವಿ ಮಾಡಿಕೊಂಡಿದ್ದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಹೋರಾಟದ ಹಾದಿ ಹಿಡಿಯಬೇಕಾಯಿತು ಎಂದು ಹೇಳಿದರು.
7ನೇ ವೇತನ ಆಯೋಗದ ಸೌಲಭ್ಯವನ್ನು ರಾಜ್ಯ ಸರ್ಕಾರಿ ನೌಕರರಿಗೆ ವಿಸ್ತರಿಸಿರುವಂತೆ ಮಹಾನಗರ ಪಾಲಿಕೆ ಅಧಿಕಾರಿ ನೌಕರರಿಗೆ ಯಥಾವತ್ತಾಗಿ ಸರ್ಕಾರ ಆರ್ಥಿಕ ಇಲಾಖೆಯಿಂದಲೇ ಅನುಧಾನವನ್ನು ಬಿಡುಗಡೆ ಮಾಡಬೇಕು. ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ವೃಂದ ಮತ್ತು ನೇಮಕಾತಿ ನಿಯಮಾವಳಿಗಳ ತಿದ್ದುಪಡಿ ಮಾಡಿ ಕರಡು ಅಧಿಸೂಚನೆಯನ್ನು ಪ್ರಕಟಿಸಬೇಕು ಎಂದು ಆಗ್ರಹಿಸಿದರು
ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಜಾರಿ ಮಾಡಿರುವ ಕೆ.ಜಿ.ಐ.ಡಿ ಮತ್ತು ಜಿ.ಪಿ.ಎಫ್ ಸೌಲಭ್ಯವನ್ನು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರಿಗೆ ಜಾರಿಗೊಳಿಸುವುದು ನಮ ಪ್ರಮುಖ ಬೇಡಿಕೆಯಾಗಿದೆ ಎಂದು ಅವರು ಹೇಳಿದರು.
ರಾಜ್ಯ ಸರ್ಕಾರಿ ನೌಕರರಿಗೆ ಜಾರಿಗೊಳಿಸಿರುವ ಆರೋಗ್ಯ ಸೌಲಭ್ಯದ ಜ್ಯೋತಿ ಮತ್ತು ಆರೋಗ್ಯ ಸಂಜೀವಿನಿಯನ್ನು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರಿಗೆ ಜಾರಿಗೊಳಿಸಬೇಕು.ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ವರ್ಷ ಆಯೋಜಿಸುವ ಕ್ರೀಡೆಯನ್ನು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರಿಗೆ ಆಯೋಜಿಸಬೇಕು.ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರು ಸುಮಾರು ವರ್ಷಗಳಿಂದ ವಿವಿಧ ವೃಂದದ ಹುದ್ದೆಗಳನ್ನು ಮುಂಬಡ್ತಿ ಪಡೆಯಲು ವಂಚಿತರಾಗಿರುವುದರಿಂದ ಕೂಡಲೇ ವೃಂದವಾರು ಮುಂಬಡ್ತಿ ನೀಡಬೇಕು ಎಂದು ಒತ್ತಾಯಿಸಿದರು.
ಜು.7 ರಂದು ಎಲ್ಲಾ ಮಹಾನಗರ ಪಾಲಿಕೆಯ ಅಧಿಕಾರಿ ನೌಕರರು ಸಾಮೂಹಿಕ ರಜೆ ಹಾಕಿ ಕೆಲಸ ಕಾರ್ಯಗಳನ್ನು ಸ್ಥಗಿತ ಮಾಡಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ತಿಳಿಸಿದರು