ಬೆಂಗಳೂರು,ಸೆ.18:
ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ ಮಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ನಡೆಯುತ್ತಿರುವ ಡ್ರಗ್ಸ್ ದಂಧೆಗೆ ಅಂಕುಶ ಹಾಕುವ ಮೂಲಕ ಕರ್ನಾಟಕವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ಮಾಡಲು ಸರ್ಕಾರ ಪಣ ತೊಟ್ಟಿದೆ.
ಇದಕ್ಕಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ನೇತೃತ್ವದಲ್ಲಿ ಪ್ರತ್ಯೇಕ ಕಾರ್ಯಪಡೆಯನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.
ನಗರ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಹಾವಳಿ ತಡೆಗಟ್ಟುವ ದೃಷ್ಟಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ್ ಅವರು ಪೊಲೀಸ್ ಹಾಗೂ ಇತರೆ ಇಲಾಖೆಯ ಪ್ರಮುಖ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿನ ಡ್ರಗ್ಸ್ ಜಾಲದ ಬೇರುಗಳನ್ನು ಕತ್ತರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮೇಲಿಂದ ಮೇಲೆ ಸಭೆಗಳನ್ನು ನಡೆಸಿ ಅಗತ್ಯ ಕಾರ್ಯತಂತ್ರ ರೂಪಿಸಲು ಸೂಚನೆ ನೀಡಲಾಗಿದೆ. ಗೃಹ ಸಚಿವರ ನೇತೃತ್ವದಲ್ಲಿ ರಚಿಸಲಾಗಿರುವ ಕಾರ್ಯಪಡೆಯಲ್ಲಿ ಶಿಕ್ಷಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು ಇರಲಿದ್ದಾರೆ ಎಂದು ಹೇಳಿದರು.
ಠಾಣಾಧಿಕಾರಿಗಳಿಗೆ ಗೊತ್ತಿಲ್ಲದೆ ಡ್ರಗ್ಸ್ ದಂಧೆ ನಡೆಯಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಡ್ರಗ್ಸ್ ದಂಧೆ ನಡೆದರೆ ಠಾಣಾಧಿಕಾರಿ ಡಿವೈಎಸ್ಪಿ, ಎಸಿಪಿ ಮತ್ತು ಎಸ್ಪಿಗಳನ್ನು ಹೊಣೆಗಾರರನ್ನಾಗಿ ಮಾಡಿ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಡ್ರಗ್ಸ್ ದಂಧೆ ಹತ್ತಿಕ್ಕಲು ಅಗತ್ಯ ಬಿದ್ದರೆ ಹೊಸ ಕಾನೂನು ಜಾರಿಗೆ ತರುತ್ತೇವೆ.ಹೀಗಿರುವ ಕಾನೂನನ್ನು ಇನ್ನಷ್ಟು ಬಿಗಿಗೊಳಿಸುತ್ತೇವೆ. ಫೆಡ್ಲರ್‌ಗಳಿಗೆ ಜೀವಾವಧಿ ಶಿಕ್ಷೆಯವರೆಗೂ ಕಠಿಣ ಶಿಕ್ಷೆ ವಿಧಿಸಲು ಕಾನೂನಿಗೆ ತಿದ್ದುಪಡಿಗೆ ಕ್ರಮಕೈಗೊಳ್ಳಲಾಗುವುದು ಎಂದರು.
ಡ್ರಗ್ಸ್ ಹಾವಳಿ ತಡೆಯಲು ಕ್ಷಿಪ್ರ ಮತ್ತು ತೀಕ್ಷ್ಣಕ್ರಮ ಕೈಗೊಳ್ಳುತ್ತೇವೆ. ಈ ನಿಟ್ಟಿನಲ್ಲಿ ಎನ್‌ಸಿಸಿ, ಎನ್‌ಜಿಓಗಳನ್ನು ಬಲಗೊಳಿಸುವುದರ ಜತೆಗೆ ಪುನರ್‌ವಸತಿ ಕೇಂದ್ರಗಳನ್ನು ಹೆಚ್ಚಿಸಲು ಕ್ರಮಕೈಗೊಳ್ಳುತ್ತೇವೆ ಎಂದು ಹೇಳಿದರು.
ಡ್ರಗ್ಸ್ ಸೇವನೆಯಿಂದಾಗಿ ವಿದ್ಯಾರ್ಥಿ, ಯುವ ಜನರ ಮೇಲೆ ಕೆಟ್ಟ ಪರಿಣಾಮ ಬೀರುತ್ತಿರುವುದನ್ನು ತಡೆಗಟ್ಟಲು ಕ್ರಮ ತೆಗೆದುಕೊಳ್ಳಲಾಗಿದೆ. ಡ್ರಗ್ಸ್ ಸೇವಿಸಿ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವ ಪ್ರಕರಣಗಳಿಗೂ ಅಂಕುಶ ಹಾಕುವುದಾಗಿ ಹೇಳಿದರು.
ಡ್ರಗ್ಸ್ ದಂಧೆ ತಡೆಗೆ ಪೊಲೀಸರಿಗೆ ಮುಕ್ತ ಅವಕಾಶ ಕೊಡುತ್ತೇವೆ. ಒಂದು ವೇಳೆ ಡ್ರಗ್ ದಂಧೆಗೆ ಕಡಿವಾನ ಹಾಕಲು ವಿಫಲವಾದರೆ ಅವರನ್ನೇ ಹೊಣೆಗಾರರನ್ನಾಗಿ ಮಾಡುತ್ತೇವೆ ಎಂದು ಎಚ್ಚರಿಸಿದರು.
ಗೃಹ, ಆರೋಗ್ಯ, ವೈದ್ಯಕೀಯ ಶಿಕ್ಷಣ, ಗ್ರಾಮೀಣಾಭಿವೃದ್ಧಿ, ಸಮಾಜ ಕಲ್ಯಾಣ ಇಲಾಖೆ ಸೇರಿ ಹಲವು ಇಲಾಖೆಗಳ ಸಚಿವರು, ಅಧಿಕಾರಿಗಳ ಜತೆ ಉನ್ನತಮಟ್ಟದ ಸಭೆ ನಡೆಸಿ ಹಲವು ಕ್ಷಿಪ್ರ ತೀರ್ಮಾನ ಕೈಗೊಳ್ಳಲಾಗಿದೆ. ವಿದ್ಯಾರ್ಥಿ, ಯುವ ಜನರ, ಪೋಷಕರ ಸಹಭಾಗಿತ್ವದಲ್ಲಿ ಮಾಹಿತಿ ಸಂಗ್ರಹಿಸಿ ಡ್ರಗ್ಸ್ ಹಾವಳಿ ತಡೆಗೆ ಗಂಭೀರಚರ್ಚೆ ನಡೆಸಿದ್ದೇವೆ.ಈಗಾಗಲೇ ಇರುವ ರಾಜ್ಯಮಟ್ಟದ ಸಮಿತಿಯಿಂದ ಮಾಹಿತಿ ಅಭಿಪ್ರಾಯ ಸಂಗ್ರಹಿಸಿದ್ದೇವೆ ಎಂದರು
ಬೆಂಗಳೂರಿನ ಪೂರ್ವ ಭಾಗದಲ್ಲಿ ಡ್ರಗ್ಸ್ ಹಾವಳಿ ತೀವ್ರವಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದಕ್ಕೆ ಲಗಾಮು ಹಾಕಲು ನಿರ್ಣಯ ಮಾಡಿದ್ದೇವೆ ಎಂದ ಅವರು, ಒಡಿಶಾ, ಆಂಧ್ರ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಿಂದ ಮಾದಕವಸ್ತು ರಾಜ್ಯಕ್ಕೆ ಸರಬರಾಜು ಆಗುತ್ತಿದೆ. ಇದನ್ನು ತಡೆಗಟ್ಟಲು ಹೊಸ ಕಾರ್ಯತಂತ್ರ ರೂಪಿಸಿದ್ದೇವೆ ಎಂದು ತಿಳಿಸಿದರು
Previous ArticleA.I.ನಿಂದ ಅವಾಂತರ ಸೃಷ್ಟಿ.
Next Article ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..