ಬೆಂಗಳೂರು,ಜ.2:
ಸಾಂಸ್ಕೃತಿಕ ರಾಜಧಾನಿ ಧಾರವಾಡ ಜನರು ಬಹುದಿನಗಳ ಕನಸು ನನಸಾಗುವ ಕಾಲ ಕೂಡಿ ಬಂದಿದೆ.ಹುಬ್ಬಳ್ಳಿ-ಧಾರವಾಡ ಮಹಾ ನಗರ ಪಾಲಿಕೆಯನ್ನು ವಿಭಜಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.
ತಕ್ಷಣದಿಂದಲೇ ಜಾರಿಗೆ ಬರುವಂತೆ ಧಾರವಾಡ ಮಹಾನಗರ ಪಾಲಿಕೆ ರಚನೆ ಮಾಡಲು ಇಂದು ನಡೆದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಂಪುಟ ಸಭೆಯ ನಂತರ ಕಾನೂನು ಸಚಿವ ಎಚ್ ಕೆ ಪಾಟೀಲ್ ಸುದ್ದಿಗಾರರಿಗೆ ತಿಳಿಸಿದರು.
ಧಾರವಾಡ ಜನಸಂಖ್ಯೆಯಲ್ಲಿ ಮತ್ತು ವಿಸ್ತೀರ್ಣದಲ್ಲಿ ಅತ್ಯಂತ ದೊಡ್ಡದಾಗಿದೆ ಇಲ್ಲಿ ಮೂರು ವಿಶ್ವವಿದ್ಯಾಲಯಗಳು ಸೇರಿದಂತೆ ಅನೇಕ ಪ್ರತಿಷ್ಠಿತ ಸಂಸ್ಥೆಗಳು ಕಾರ್ಯನಿರ್ವಹಣೆ ಮಾಡುತ್ತಿವೆ. ಹೀಗಾಗಿ ಸುಗಮ ಆಡಳಿತದ ದೃಷ್ಟಿಯಿಂದ ಪ್ರತ್ಯೇಕ ಮಹಾನಗರ ಪಾಲಿಕೆ ಅಗತ್ಯವಿದೆ ಎಂಬ ವರದಿಗಳನ್ನು ಆಧರಿಸಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ವಿವರಿಸಿದರು.
ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಕೈಗೊಂಡಿರುವ ಸಾಮಾಜಿಕ ಮತ್ತು ಆರ್ಥಿಕ ಜನಗಣತಿ ವರದಿಯನ್ನು ಮುಂದಿನ ಸಂಪುಟ ಸಭೆಯಲ್ಲಿ ಮಂಡಿಸಲು ತೀರ್ಮಾನಿಸಲಾಗಿದೆ ಕಾಂತರಾಜು ನೇತೃತ್ವದ ಆಯೋಗ ಕೈಗೊಂಡಿದ್ದ ಸಮೀಕ್ಷೆಯನ್ನು ಜಯಪ್ರಕಾಶ್ ಹೆಗ್ಡೆ ನೇತೃತ್ವದ ಆಯೋಗ ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ನೀಡಿದೆ.
ಈ ವರದಿಯನ್ನು ಮುಂದಿನ ಸಂಪುಟ ಸಭೆಯಲ್ಲಿ ಮಂಡಿಸುವಂತೆ ಮುಖ್ಯಮಂತ್ರಿಗಳು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದಾರೆ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿದ ನಂತರ ವರದಿ ಅನುಷ್ಠಾನ ಕುರಿತು ಸಂಪುಟ ಉಪ ಸಮಿತಿ ರಚಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ನಿರ್ಮಾಣವಾಗುತ್ತಿರುವ ಗೋಶಾಲೆಗಳಿಗೆ ಸಾಕಷ್ಟು ಪ್ರಮಾಣದ ಪಶುಗಳು ಸೇರ್ಪಡೆಯಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಈ ಹಿಂದಿನ ಸರ್ಕಾರ ಕೈಗೊಂಡಿದ್ದ 35 ಗೋಶಾಲೆಗಳ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತೀರ್ಮಾನಿಸಲಾಗಿದೆ. ಹಾಲಿ ಕಾರ್ಯನಿರ್ವಹಿಸುತ್ತಿರುವ 14 ರೂಪಾಯಿಗಳನ್ನು 10.50 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ತೀರ್ಮಾನಿಸಲಾಯಿತು ಎಂದು ತಿಳಿಸಿದರು.