ಬೆಂಗಳೂರು, ಆ.19:
ಜನತಾದಳದ ಅಗ್ರಗಣ್ಯ ನಾಯಕ, ನವರಂಗಿ ನಕಲಿ ಸ್ವಾಮಿ, ಬರೀ ಬುರುಡೆ ಬಿಡುವ ಕುಮಾರಸ್ವಾಮಿ ವಿರುದ್ದ ಇಲ್ಲದ ಕ್ರಮ ನಮ್ಮ ವಿರುದ್ದವೇಕೆ ರಾಜ್ಯಪಾಲರೇ? ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.
ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ವಿರೋಧಿಸಿ ಫ್ರೀಡಂ ಪಾರ್ಕ್ ನಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ಮುಂದಿನ 10 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುತ್ತದೆ. ನಿಮ್ಮ ಯಾವ ಹುನ್ನಾರಗಳಿಗೂ ನಮ್ಮ ಸರ್ಕಾರ ಜಗ್ಗುವುದಿಲ್ಲ, ಬಗ್ಗುವುದಿಲ್ಲ, ಹೆದರುವುದಿಲ್ಲ ಎಂದು ಗುಡುಗಿದರು.
ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅಧಿಕಾರ ದುರುಪಯೋಗ, ಅಂದು ಮಂತ್ರಿಗಳಾಗಿದ್ದ ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ಧನ ರೆಡ್ಡಿ ಅವರ ವಿರುದ್ಧದ ಆರೋಪಗಳ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಿ ಕಳಂಕಿತರ ವಿರುದ್ದ ವಿಚಾರಣೆಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದರೂ ಏಕೆ ಪುರಸ್ಕರಿಸಿಲ್ಲ ರಾಜ್ಯಪಾಲರೇ?” ಎಂದು ಪ್ರಶ್ನಿಸಿದರು.
ವಿರೋಧ ಪಕ್ಷದವರು ಹತ್ತು ಜನ್ಮ ಎತ್ತಿದರೂ ಕಾಂಗ್ರೆಸ್ ಸರ್ಕಾರ ಬೀಳಿಸಲು ಸಾಧ್ಯವಿಲ್ಲ. ಮುಖ್ಯಮಂತ್ರಿಗಳು ರಾಜಿನಾಮೆ ಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಮಂತ್ರದಿಂದ ಮಾವಿನಕಾಯಿ ಉದುರಿಸಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರ ಪರವಾಗಿ ಡಿ.ಕೆ.ಶಿವಕುಮಾರ್ ಒಬ್ಬನೇ ಅಲ್ಲ ಇಂಡಿಯಾ ಒಕ್ಕೂಟ ಹಾಗೂ ರಾಜ್ಯದ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು, ಕಟ್ಟ ಕಡೆಯ ಮತದಾರರು ಆಶೀರ್ವಾದ ಮಾಡಿ ಬೆನ್ನಲುಬಾಗಿ ನಿಂತಿದ್ದಾರೆ” ಎಂದರು.
ಸರ್ಕಾರ ನೀಡಿರುವ ಸಲಹೆಗಳನ್ನೂ ಓದದ ರಾಜ್ಯಪಾಲರು ಟಿ.ಜೆ.ಅಬ್ರಹಾಂ ಎನ್ನುವ ವ್ಯಕ್ತಿ ಬೆಳಗ್ಗೆ ಅರ್ಜಿ ಕೊಟ್ಟರೆ, ಸಾಯಂಕಾಲದ ವೇಳೆಗೆ ಒಂದೇ ದಿನದಲ್ಲಿ ಮುಖ್ಯಮಂತ್ರಿಗಳಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ಬಿಜೆಪಿಯವರು ನಿಮ್ಮನ್ನು ಉಪಯೋಗಿಸಿಕೊಳ್ಳುತ್ತಿದ್ದಾರೆ. ರಾಜ್ಯಪಾಲರೇ ನಿಮ್ಮದು ಸಾಂವಿಧಾನಿಕ ಹುದ್ದೆ, ನಿಮ್ಮ ಮೇಲೆ ಈಗಲೂ ಗೌರವವಿದೆ. ನಿಮಗೆ ಸಾಕಷ್ಟು ಸಮಯವಿದ್ದು ವಿಚಾರಣೆಗೆ ನೀಡಿರುವ ಅನುಮತಿ ವಾಪಸ್ ಪಡೆಯಿರಿ” ಎಂದು ಆಗ್ರಹಿಸಿದರು.