ಬೆಂಗಳೂರು – ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದು ನೂರು ದಿನ ಸಮೀಪಿಸುತ್ತಿರುವ ಸಮಯದಲ್ಲೇ ಶಾಸಕರು ಮತ್ತು ಮಂತ್ರಿಗಳ ನಡುವೆ ಸಂಘರ್ಷ ಆರಂಭವಾಗಿದೆ.ಕಾರ್ಯಕರ್ತರ ಗೋಳಂತೂ ಕೇಳುವವರೇ ಇಲ್ಲ.
ಇದೀಗ ಈ ಎಲ್ಲಾ ಸಮಸ್ಯೆಯನ್ನು ಬಗೆಹರಿಸುವ ಗುರುತರ ಹೊಣೆಗಾರಿಕೆ ಹಿರಿಯ ನಾಯಕ ಹಾಗೂ ಗೃಹ ಮಂತ್ರಿ ಪರಮೇಶ್ವರ್ ಅವರ ಹೆಗಲೇರುವ ಸಾಧ್ಯತೆಯಿದೆ.
ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ಸುದೀರ್ಘ ಅವಧಿಯವರೆಗೆ ಸೇವೆ ಸಲ್ಲಿಸಿರುವ ಪರಮೇಶ್ವರ್ ಪಕ್ಷದ ಕಾರ್ಯಕರ್ತರ ವಲಯದಲ್ಲಿ ಸಾಕಷ್ಟು ಪ್ರಭಾವ ಹೊಂದಿದ್ದಾರೆ. ಮೂಲ ಹಾಗೂ ವಲಸಿಗರ ನಡುವೆ ಉತ್ತಮ ಬಾಂಧವ್ಯ ಹೊಂದಿದ್ದು ಇವರ ನೇತೃತ್ವದಲ್ಲಿ ಸಮನ್ವಯ ಸಮಿತಿಯೊಂದು ರಚನೆಯಾಗುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ನ ಉನ್ನತ ಮೂಲಗಳು ತಿಳಿಸಿವೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರ ಮತ್ತು ಪಕ್ಷದ ಮಧ್ಯೆ ಹೆಚ್ಚಿನ ಸಮನ್ವಯ ಅಗತ್ಯವಿದೆ. ಈಗಾಗಾಗಲೇ ಸಚಿವರ ವಿರುದ್ಧ ಪಕ್ಷದ ಕೆಲವು ಶಾಸಕರ ಮುನಿಸಿಕೊಂಡಿದ್ದು, ಇದು ಮುಂದುವರಿಯದಂತೆ ಎಚ್ಚರಿಕೆ ವಹಿಸಬೇಕಿದೆ. ಈ ಉದ್ದೇಶದಿಂದ, ಹಿರಿಯ ಸಚಿವರಾಗಿರುವ ಪರಮೇಶ್ವರ್ ನೇತೃತ್ವದಲ್ಲಿ ಸಮನ್ವಯ ಸಮಿತಿ ರಚಿಸಲು ಚರ್ಚೆ ನಡೆದಿದೆ.
ಇನ್ನು ಮುಂದೆ ಸರ್ಕಾರದ ಮಟ್ಟದಲ್ಲಿ ಯಾವುದೇ ತೀರ್ಮಾನಗಳನ್ನು ತೆಗೆದುಕೊಳ್ಳುವ ಸಮಯದಲ್ಲಿ
ಮೊದಲುಈ ಸಮಿತಿಯಲ್ಲಿ ಚರ್ಚಿಸಿ, ಆನಂತರ ಸರ್ಕಾರದ ಮಟ್ಟದಲ್ಲಿ ತೀರ್ಮಾನ ಕೈಗೊಂಡು ಅನುಷ್ಠಾನಕ್ಕೆ ತರಲು ಉದ್ದೇಶಿಸಲಾಗಿದೆ ಎಂದೂ ಮೂಲಗಳು ಹೇಳಿವೆ.
ಈ ಸಮಿತಿ ರಚನೆ,ಅದರ ಕಾರ್ಯವ್ಯಾಪ್ತಿ ಮೊದಲಾದ ವಿಷಯಗಳ ಬಗ್ಗೆ ದೆಹಲಿಯಲ್ಲಿ ಕರೆದಿರುವ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಆಗಸ್ಟ್ 2ರಂದು ದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ರಾಜ್ಯದ ಎಲ್ಲಾ ಮಂತ್ರಿಗಳು, ಹಿರಿಯ ನಾಯಕರು ಮತ್ತು ಎಐಸಿಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಭಾಗವಹಿಸಲಿದ್ದಾರೆ.ಈ ಸಭೆ ಸಮನ್ವಯ ಸಮಿತಿ ಕುರಿತು ನಿರ್ಧಾರ ತೆಗೆದುಕೊಳ್ಳಲಿದೆ.