ಧರ್ಮ ರಾಜಕಾರಣದ ಹಸು ಬರಡಾಗುತ್ತಲೇ, ಬಿಜೆಪಿಯಿಂದ ಭಾಷಾ ರಾಜಕಾರಣ ಆರಂಭವಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು ಹಿಂದಿ ಪರ ವಕಾಲತ್ತು ಹಾಕುತ್ತಿರುವ ಅಮಿತ್ ಶಾ ಅವರ ಗುಲಾಮಗಿರಿ ಬಿಟ್ಟು ಬಿಜೆಪಿ ನಾಯಕರು ಕನ್ನಡ ತಾಯಿಯ ಸ್ವಾಭಿಮಾನಿ ಮಕ್ಕಳಾಗಬೇಕು ಎಂದು ಸಲಹೆ ಮಾಡಿದ್ದಾರೆ. ಭಾಷೆ, ಪ್ರದೇಶಗಳ ನಮ್ಮ ನೀತಿ-ನಿಲುವು “ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ… ಎನ್ನುವ ಕುವೆಂಪು ಅವರ ಕವಿ ನುಡಿಯಿಂದ ಪ್ರೇರಿತವಾದುದು. ಕನ್ನಡ ಭಾಷೆ ನಮಗೆ ರಾಜಕಾರಣದ ಆಯುಧ ಅಲ್ಲ, ಇದು ನಮ್ಮ ಜೀವದ ಉಸಿರು.ಇಂಗ್ಲಿಷ್, ಹಿಂದಿ ಎಲ್ಲ ಭಾಷೆಗಳ ಬಗ್ಗೆ ನಮಗೆ ಗೌರವ ಇದೆ, ಇವೆಲ್ಲವೂ ಬೇಕು. ಈ ಭಾಷೆಗಳ ಮೂಲಕ ಹರಿದು ಬರುವ ಜ್ಞಾನದ ಅಮೃತವೂ ಬೇಕು. ಆದರೆ ಕನ್ನಡಕ್ಕೆ ಮೊದಲ ಆದ್ಯತೆ, ಮಾತೃಭಾಷೆಗೆ ಮೊದಲ ಪೂಜೆ ಎಂದು ಹೇಳಿದ್ದಾರೆ.
ನಮ್ಮದು ಒಕ್ಕೂಟ ವ್ಯವಸ್ಥೆಯ ದೇಶ. ರಾಜ್ಯಗಳು ಭಾಷೆಯ ಆಧಾರದಲ್ಲಿ ರಚನೆಯಾಗಿವೆ. ಭಾಷಾವಾರು ಪ್ರಾಂತದಲ್ಲಿ ಪ್ರಾದೇಶಿಕ ಭಾಷೆಯನ್ನು ಮನ್ನಿಸಬೇಕಾಗುತ್ತದೆ. ಕನ್ನಡ ನಮಗೆ ಮಾತೃಭಾಷೆಯೂ ಹೌದು, ಪರಿಸರದ ಭಾಷೆ ಕೂಡಾ.ಹಿಂದಿ ನಮ್ಮ ರಾಷ್ಟ್ರಭಾಷೆ ಅಲ್ಲ. ಪ್ರತಿಯೊಂದು ರಾಜ್ಯಭಾಷೆಯೂ ನಮ್ಮ ರಾಷ್ಟ್ರಭಾಷೆ, ನೆಲದ ಸಾರ್ವಭೌಮ ಭಾಷೆ. ಇದನ್ನೂ ಸಂವಿಧಾನವೂ ಅಂಗೀಕರಿಸಿದೆ. ಸಂವಿಧಾನವನ್ನೇ ವಿರೋಧಿಸುವ ದೇಶದ್ರೋಹಿಗಳಿಗೆ ಈ ಸಾಮಾನ್ಯ ಜ್ಞಾನದ ಅರಿವಿರಲಿ ಎಂದಿದ್ದಾರೆ.
ಧರ್ಮ ರಾಜಕಾರಣದ ಹಸು ಬರಡಾಗುತ್ತಿರುವುದನ್ನು ಕಂಡ ಬಿಜೆಪಿ ನಾಯಕರು ಈಗ ಭಾಷಾ ರಾಜಕಾರಣದ ಹಸುವಿನ ಕೆಚ್ಚಲಿಗೆ ಕೈ ಹಾಕಿದ್ದಾರೆ. ಈ ಸ್ವಾರ್ಥ ರಾಜಕಾರಣಕ್ಕೆ ಸ್ವಾಭಿಮಾನಿ ಕನ್ನಡಿಗರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೇಳಿದ್ದಾರೆ.