ಬೆಂಗಳೂರು,ಫೆ.28:
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಪೋಕ್ಸೋ ಪ್ರಕರಣ ಎದುರಿಸುತ್ತಿದ್ದು ನಿರೀಕ್ಷಣಾ ಜಾಮೀನು ಪಡೆದಿರುವ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಯಡಿಯೂರಪ್ಪ ಅವರಿಗೆ ಸಂಕಷ್ಟ ಎದುರಾಗಿದೆ.
ಹೈಕೋರ್ಟ್ ಆದೇಶದ ಅನ್ವಯ ಈ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ನ್ಯಾಯಾಲಯ
ಮಾರ್ಚ್ 15 ರಂದು ಖುದ್ದಾಗಿ ಹಾಜರಾಗುವಂತೆ ಬಿಎಸ್ ಯಡಿಯೂರಪ್ಪ ಹಾಗೂ ಇತರ ಆರೋಪಿಗಳಿಗೆ ಸಮನ್ಸ್ ನೀಡಿದೆ.
ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ಕೆಲವೇ ದಿನಗಳ ಹಿಂದಷ್ಟೇ ಕರ್ನಾಟಕ ಹೈಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ದೊರೆಕಿತ್ತು. ಪ್ರಕರಣ ರದ್ದತಿ ಕೋರಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಧಾರವಾಡ ಪೀಠ, ನಿರೀಕ್ಷಣಾ ಜಾಮೀನು ನೀಡಿತ್ತು. ಆದರೆ, ಪ್ರಕರಣ ರದ್ದು ಮಾಡಲು ನ್ಯಾಯಪೀಠ ನಿರಾಕರಿಸಿತ್ತು.
ಹೀಗಾಗಿ ಯಡಿಯೂರಪ್ಪ ಬಂಧನದಿಂದ ಪಾರಾದರೂ ವಿಚಾರಣೆ ಎದುರಿಸಲೇಬೇಕಾಗಿದೆ. ಆದ್ದರಿಂದ ಇದೀಗ ಬೆಂಗಳೂರಿನ ನ್ಯಾಯಾಲಯ ವಿಚಾರಣೆಗೆ ದಿನ ನಿಗದಿಪಡಿಸಿದೆ.
ಯಡಿಯೂರಪ್ಪ ಅವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ 2024 ರ ಮಾರ್ಚ್ನಲ್ಲಿ ಕೇಳಿಬಂದಿತ್ತು. ಸಂತ್ರಸ್ತೆಯ ತಾಯಿ ಈ ಆರೋಪ ಮಾಡಿದ್ದರು. ಬಳಿಕ ಯಡಿಯೂರಪ್ಪ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Previous Articleದಾಸ ವಿದೇಶ ಯಾತ್ರೆ ಹೋಗುವಂತಿಲ್ಲ.
Next Article ಬಿಜೆಪಿ -ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರುತ್ತಿದ್ದಾರೆ