ಬೆಂಗಳೂರು,ಮೇ .18-
ಲೋಕಸಭೆ ಚುನಾವಣೆ ಬೆನ್ನಲ್ಲೇ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಜನತೆ ಭಯದಿಂದ ಬದುಕುವಂತಾಗಿದೆ ಈ ಹಿನ್ನೆಲೆಯಲ್ಲಿ
ತಕ್ಷಣವೇ ಅಗತ್ಯ ಕ್ರಮ ಕೈಗೊಂಡು ಅಪರಾಧಿಗಳಲ್ಲಿ ಭಯದ ವಾತಾವರಣ ಮೂಡಿಸಬೇಕು ಎಂದು ರಾಜ್ಯ ಬಿಜೆಪಿ ಆಗ್ರಹಿಸಿದೆ.
ಕೇಂದ್ರದ ಮಾಜಿ ಸಚಿವ ಡಿವಿ ಸದಾನಂದ ಗೌಡ ನೇತೃತ್ವದಲ್ಲಿ ಬಿಜೆಪಿ ನಾಯಕರ ನಿಯೋಗ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರನ್ನು ಭೇಟಿ ಮಾಡಿ ಕಾನೂನು ವ್ಯವಸ್ಥೆ ಕಾಪಾಡುವಂತೆ ಮನವಿ ಸಲ್ಲಿಸಿತು.
ಇತ್ತೀಚೆಗೆ ಕೊಲೆ, ಸುಲಿಗೆ, ದೌರ್ಜನ್ಯ, ಅತ್ಯಾಚಾರ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚುತ್ತಿದ್ದು, ತಕ್ಷಣವೇ ಉನ್ನತ ಅಧಿಕಾರಿಗಳ ಸಭೆ ಕರೆದು ಕಾನೂನು ಸುವ್ಯವಸ್ಥೆ ಕಾಪಾಡಲು ಕೋರಿತು.
ಹುಬ್ಬಳ್ಳಿಯಲ್ಲಿ ಕೆಲ ದಿನಗಳ ಹಿಂದೆ ನಡೆದ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ, ಮಡಿಕೇರಿಯಲ್ಲಿ ವಿದ್ಯಾರ್ಥಿನಿಯ ಬರ್ಭರ ಕೊಲೆ, ಮೂರು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ನಡೆದ ವಿದ್ಯಾರ್ಥಿನಿ ಅಂಜಲಿ ಅಂಬಿಗೆರೆ ಹತ್ಯೆ ಸೇರಿದಂತೆ ಕಳೆದ ಎರಡು ತಿಂಗಳಿನಿಂದ ನಡೆದಿರುವ ಕಾನೂನು ಬಾಹಿರ ಚಟುವಟಿಕೆಗಳನ್ನು ಉಲ್ಲೇಖ ಮಾಡಲಾಗಿದೆ.
ಹಿಂದೆ ರಾಜ್ಯವು ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ಉತ್ತಮ ಹೆಸರು ಪಡೆದಿತ್ತು. ಆದರೆ, ಇದೀಗ ಮಹಿಳೆಯರ ಮೇಲಿನ ದೌರ್ಜನ್ಯ, ಕೊಲೆ, ಸುಲಿಗೆಗಳು ಹಾಗೂ ಬಡವರು, ಶೋಷಿತರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ. ಕರ್ನಾಟಕವು ಈ ಮೂಲಕ ಅಪರಾಧಗಳ ರಾಜ್ಯ ಎಂಬ ಕೆಟ್ಟ ಹೆಸರು ಪಡೆಯುವಂತಾಗಿದೆ ಎಂದು ಹೇಳಿದೆ.
ರಾಜ್ಯ ಸರ್ಕಾರವು ಕಾನೂನು ಸುವ್ಯವಸ್ಥೆ ಕಡೆ ಗಮನ ಕೊಡುತ್ತಿಲ್ಲ. ಅಪರಾಧ ಪ್ರಮಾಣ ಹೆಚ್ಚಳದ ವಿಚಾರದಲ್ಲೂ ಅದು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದನ್ನು ತಮ ಗಮನಕ್ಕೆ ತರಲು ಬಯಸುತ್ತೇವೆ.ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರವು ಬೆಂಗಳೂರು ಗ್ರಾಮಾಂತರ ಕ್ಷೇತ್ರ ಸೇರಿದಂತೆ ವಿವಿಧೆಡೆ ಸೋಲಿನ ಭೀತಿಯಿಂದ ಪೊಲೀಸ್ ಇಲಾಖೆಯನ್ನು ಬಳಸಿಕೊಳ್ಳಲು ಮುಂದಾಗಿತ್ತು. ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಾಗ ಪ್ರಕರಣ ದಾಖಲಿಸದೆ ಇರುವುದು, ಜೀವ ಬೆದರಿಕೆ ಹಾಕಿದರೂ ಕ್ರಮ ಕೈಗೊಳ್ಳದ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಿದೆ.
Previous Articleಚೆಕ್ ಇನ್ ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದಾಗ ಆಗಿದ್ದೇನು.?
Next Article ಪ್ರಜ್ವಲ್ ಬಗ್ಗೆ ದೇವೇಗೌಡರು ಹೇಳಿದ್ದು ಏನು ಗೊತ್ತಾ.?