ಬೆಂಗಳೂರು:
ಚಾಮರಾಜಪೇಟೆಯ ವಿನಾಯಕನಗರದಲ್ಲಿ ರಸ್ತೆ ಬದಿ ಕಟ್ಟಿದ್ದ ಹಸುಗಳ ಕೆಚ್ಚಲು ಕೊಯ್ದು ಮಚ್ಚಿನಿಂದ ಕಾಲಿಗೆ ಹೊಡೆದ ಆರೋಪಿಯನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ.
ಬಿಹಾರದ ಚಂಪಾರಣ್ ಜಿಲ್ಲೆಯ ಶೇಕ್ ನಸ್ರು (30) ಬಂಧಿತ ಆರೋಪಿಯಾಗಿದ್ದಾನೆ, ರಸ್ತೆ ಬದಿ ಶೆಡ್‌ನಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಘಟನೆ ವಿನಾಯಕನಗರದಲ್ಲಿ ನಿನ್ನೆ ಬೆಳಿಗ್ಗೆ ಬೆಳಕಿಗೆ ಬಂದಿತ್ತು.
ಹಸುಗಳ ಮಾಲೀಕ ನೀಡಿದ ದೂರಿನ ಅನ್ವಯ ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 325 (ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ) ಕಾಯ್ದೆಯಡಿ ಕಾಟನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
ಆರೋಪಿ ಶೇಕ್ ನಸ್ರು ಘಟನಾ ಸ್ಥಳದಿಂದ 50 ಮೀಟರ್ ದೂರದಲ್ಲಿದ್ದ ಪ್ಲಾಸ್ಟಿಕ್ ಹಾಗೂ ಬಟ್ಟೆಯ ಬ್ಯಾಗ್‌ಗಳನ್ನು ಹೊಲಿಯುವ ಅಂಗಡಿಯಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ.
ಮದ್ಯದ ಅಮಲಿನಲ್ಲಿ ದುಷ್ಕೃತ್ಯ ಎಸಗಿರುವುದು ತನಿಖೆಯ ವೇಳೆ ತಿಳಿದುಬಂದಿದೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಜನವರಿ 24ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು,ಆತನನ್ನು ಹೆಚ್ಚಿನ ವಿಚಾರಣೆ ನಡೆಸಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಎಸ್. ಗಿರೀಶ್ ಮಾಹಿತಿ ನೀಡಿದ್ದಾರೆ.
ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದ ವಿನಾಯಕನಗರ ನಿವಾಸಿ ಕರ್ಣ ಹಲವು ವರ್ಷಗಳಿಂದ ಹಸು ಸಾಕುತ್ತಿದ್ದಾರೆ. ಕಳೆದ ಜ.11ರ ತಡರಾತ್ರಿ ಯಾರೋ ಕಿಡಿಗೇಡಿಗಳು ಮೂರು ಹಸುಗಳ ಕೆಚ್ಚಲನ್ನು ಕತ್ತರಿಸಿ, ಕಾಲಿಗೆ ಮಚ್ಚಿನಿಂದ ಹಲ್ಲೆ ಮಾಡಿ ವಿಕೃತಿ ಮೆರೆದಿದ್ದರು.
ಚಿಕ್ಕಪೇಟೆ ಉಪ ವಿಭಾಗದ ಎಸಿಪಿ ರಮೇಶ್ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.
ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹಸುಗಳು ಕ್ಷೇಮವಾಗಿವೆ. ಆದರೆ, ಗಾಯ ಮಾಸಲು ಸಮಯಬೇಕಿದೆ.
ಹಸುವಿನ ಕೆಚ್ಚಲು ಕತ್ತರಿಸಿದ ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಪರ ಸಂಘಟನೆ ಮುಖಂಡರು, ವಿಪಕ್ಷ ನಾಯಕ ಆರ್ ಅಶೋಕ್, ಸಂಸದ ಪಿಸಿ ಮೋಹನ್, ಎಂಎಲ್ಸಿ ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ, ಮಾಲೀಕ ಕರ್ಣನಿಗೆ ಸಾಂತ್ವನ ಹೇಳಿದ್ದರು. ಘಟನೆಯನ್ನು ಖಂಡಿಸಿದ ನಾಯಕರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ವಿಪಕ್ಷ ನಾಯಕ ಆರ್. ಅಶೋಕ್ ವೈಯುಕ್ತಿಕವಾಗಿ ಒಂದು ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದರು.
ಚಾಮರಾಜಪೇಟೆಯ ಪಶು ಆಸ್ಪತ್ರೆಯನ್ನು ಕಬ್ಜಾ ಮಾಡಲು ಮುಂದಾಗಿದ್ದರು. ಈ ವೇಳೆ ನಾನು ಮತ್ತು ಸುತ್ತಮುತ್ತಲಿನ ಹಸುಗಳ ಮಾಲೀಕರು ಹಸುಗಳೊಂದಿಗೆ ಆಸ್ಪತ್ರೆ ಮುಂದೆ ಪ್ರತಿಭಟನೆ ಮಾಡಿದ್ದರು. ಹೀಗಾಗಿ ಯಾರೋ ಕಿಡಿಗೇಡಿಗಳು ಈ ರೀತಿ ಮಾಡಿದ್ದಾರೆ ಎಂದು ಹಸುಗಳ ಮಾಲೀಕ ಕರ್ಣ ಆರೋಪಿಸಿದ್ದಾರೆ.
Previous Articleನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಇವೆ ನೋಡಿ
Next Article ಈ ಬಾರಿ ಐಪಿಎಲ್ ಯಾವಾಗ ಗೊತ್ತಾ
