ಬೆಂಗಳೂರು,ಸೆ.14:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇದೀಗ ಮತ್ತೊಂದು ಆರೋಪ ಕೇಳಿ ಬಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುದಲಿತರ, ವಿಕಲಚೇತನರಿಗೆ ಹಂಚಿಕೆಯಾಗಿದ್ದ ನಿವೇಶನದಲ್ಲಿ ಅಕ್ರಮವಾಗಿ ಮನೆ ಕಟ್ಟಿದ್ದರು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಯಾರ ಜಾಗದಲ್ಲಿ ಮನೆಯನ್ನು ಕಟ್ಟಿದ್ದರು ಎಂಬುದನ್ನು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.
ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಸಾಕಮ್ಮ ಎಂಬುವರ ಹೆಸರಿನಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ ಮನೆ ಕಟ್ಟಿದ್ದರು. ಆ ಮನೆ ಮಾರಾಟವಾಗಿದ್ದರೂ ಇದು ಯಾರ ಸ್ವಾಧೀನದಲ್ಲಿದೆ ಎಂಬುದು ಗೊತ್ತಿದೆ, ಈ ಸಂಬಂಧ ದಾಖಲೆಗಳು ತಮ್ಮ ಬಳಿ ಇವೆ ಎಂದು ಹೇಳಿದರು.
ನಾನು ಕೇಂದ್ರ ಸಚಿವನಾಗಿರುವುದನ್ನು ಸಹಿಸಲಾಗುತ್ತಿಲ್ಲ. ಕರ್ನಾಟಕಕ್ಕೆ ಬಂದರೆ ಸಹಿವುದಿಲ್ಲ, ಮುಗಿದೇ ಹೋಯಿತು ಎನ್ನುತ್ತಿದ್ದರು. ಅಂತಹ ಸಂದರ್ಭದಲ್ಲೇ ಕೇಂದ್ರ ಸಚಿವನಾಗಿರುವುದು ಅವರಿಗೆ ನೋವು ತಂದಿದೆ. ಇದಕ್ಕೆ ಔಷಧಿಯನ್ನು ಎಲ್ಲಿಂದ ತರಲಿ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು