ಬೆಂಗಳೂರು, ಜೂ.7:
ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ 187 ಕೋಟಿ ಹಗರಣದ ಸುಳಿಗೆ ಸಿಲುಕಿ ಕ್ರೀಡಾ ಸಚಿವ ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿದೆ.
ನಿಗಮದಲ್ಲಿ ನಡೆದಿರುವ ಹಣಕಾಸು ವರ್ಗಾವಣೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದ ಬಿಜೆಪಿ ನಾಯಕರು ವಿಧಾನಸೌಧದಿಂದ ರಾಜಭವನದವರೆಗೆ ಮೆರವಣಿಗೆ ನಡೆಸಿದರು ಬಳಿಕ ನಿಯೋಗದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದರು
ಮುಖ್ಯಮಂತ್ರಿಗಳ ಮೂಗಿನ ನೇರಕ್ಕೆ ಈ ಹಗರಣ ನಡೆದಿದೆ. ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆಯಾಗಿರುವ ಪ್ರಕರಣಕ್ಕೆಸಂಬಂಧಿಸಿದಂತೆ ಹಣಕಾಸು ಇಲಾಖೆಯ ಹೊಣೆ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯುವಂತೆ ರಾಜ್ಯಪಾಲ ಥಾವರ ಚಂದ್ ಗೆಹಲೋಟ್ ಅವರಿಗೆ ಮನವಿ ಸಲ್ಲಿಸಿದರು
ಇದಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ
ಪ್ರತಿಪಕ್ಷ ನಾಯಕ ಅಶೋಕ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಹೈದರಾಬಾದ್‌ನಲ್ಲಿ 18 ಕ್ಕೂ ಹೆಚ್ಚು ನಕಲಿ ಬ್ಯಾಂಕ್ ಖಾತೆಗಳನ್ನು ತೆರೆದು ಹಣವನ್ನು ಅಕ್ರಮವಾಗಿ ವರ್ಗಾಯಿಸಿದ್ದಾರೆ. ಹಣಕಾಸು ಇಲಾಖೆ ಅನುಮತಿ ಇಲ್ಲದೇ ಇದು ನಡೆಯಲು ಸಾಧ್ಯವಿಲ್ಲ’ ಎಂದು ಹೇಳಿದರು.
ಮುಖ್ಯಮಂತ್ರಿಯವರ ಗಮನಕ್ಕೆ ಬರದೇ ಈ ಹಗರಣ ನಡೆದಿರಲು ಸಾಧ್ಯವಿಲ್ಲ. ಕೇವಲ ಸಚಿವರ ರಾಜೀನಾಮೆ ಪಡೆದರೆ ಸಾಲದು. ರಾಜ್ಯದ ಇತಿಹಾಸದಲ್ಲಿ ಇಂಥ ದೊಡ್ಡ ಹಗರಣ ನಡೆದಿರಲಿಲ್ಲ. ಹಗರಣ ನಡೆದು ಇಷ್ಟು ದಿನ ಆದರೂ ಸಚಿವರ ರಾಜೀನಾಮೆ ಪಡೆಯಲು ಸಿಎಂ ಹಿಂದೆ-ಮುಂದೆ ನೋಡುತ್ತಿದ್ದಾರೆ. ಸಿಬಿಐ ತನಿಖೆಗೆ ಕೋರಿದ್ದು, ಅದಕ್ಕೂ ಮಣಿದಿಲ್ಲ ಎಂದು ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಈ ವಿಚಾರವನ್ನು ಇಲ್ಲಿಗೇ ಕೈಬಿಡುವುದಿಲ್ಲ. ವಿಪಕ್ಷವಾಗಿ ನಾವು ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ಮುಖ್ಯಮಂತ್ರಿಯವರು ಹಾರಿಕೆ ಉತ್ತರ ನೀಡುತ್ತಿದ್ದಾರೆ. ಆನೆ ನಡೆದಿದ್ದೇ ದಾರಿ ಎಂಬಂತೆ ಮುಖ್ಯಮಂತ್ರಿಯವರ ವರ್ತಿಸುತ್ತಿರುವುದನ್ನು ಖಂಡಿಸುತ್ತೇವೆ. ಈ ವಿಷಯದಲ್ಲಿ ರಾಜ್ಯವ್ಯಾಪಿ ಹೋರಾಟ ಮಾಡುತ್ತೇವೆ ಎಂದರು.
Previous Articleಗೂಳಿಹಟ್ಟಿ ಶೇಖರ್ ಸಿಡಿಸಿದ ವಿವಾದದ ಬಾಂಬ್.
Next Article ಸಂಸದ ಸಾಗರ್ ಖಂಡ್ರೆಗೆ ಸಿದ್ದರಾಮಯ್ಯ ಕಿವಿ ಮಾತು.