ಬೆಂಗಳೂರು,ಡಿ.19: ಕಳೆದ ಕೆಲವಾರು ದಿನಗಳಿಂದ ನೆನೆಗುದಿಗೆ ಬಿದ್ದಿರುವ ಬಿಬಿಎಂಪಿ, ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಸೇರಿದಂತೆ ಕೆಲವು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಹಿಡಿದಿದ್ದ ಗ್ರಹಣ ಬಿಡುಗಡೆಯಾಗುವ ಲಕ್ಷಣಗಳು ಗೋಚರಿಸಿವೆ.
ಚುನಾವಣೆ ನಡೆಸುವ ಸಂಬಂಧ ಮೀಸಲಾತಿ ಪಟ್ಟಿ ಪ್ರಕಟ ಸೇರಿದಂತೆ ಎಲ್ಲ ಪ್ರಕ್ರಿಯೆಗಳನ್ನು ಮುಂದಿನ ಎರಡು ವಾರಗಳಲ್ಲಿ ಪೂರ್ಣಗೊಳಿಸುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.
ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ‘ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯ್ದೆ’ಗೆ ತಿದ್ದುಪಡಿ ತಂದಿರುವುದನ್ನು ಪ್ರಶ್ನಿಸಿ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವಂತೆ ಕೋರಿ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.
ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯಪೀಠ ಸರ್ಕಾರದ ಪರವಾಗಿ ಅಡ್ವೋಕೇಟ್ ಜನರಲ್ ನೀಡಿದ ಹೇಳಿಕೆಯನ್ನು ಪರಿಗಣಿಸಿ ಅರ್ಜಿಯನ್ನು ಇತ್ಯರ್ಥ ಪಡಿಸಿತು. ಅಲ್ಲದೆ, ಚುನಾವಣಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವಲ್ಲಿ ಸರ್ಕಾರದಿಂದ ಯಾವುದಾದರೂ ಸಮಸ್ಯೆಗಳು ಎದುರಾದಲ್ಲಿ ಅರ್ಜಿದಾರರು ಅಗತ್ಯವಿದ್ದಲ್ಲಿ ಮತ್ತೆ ನ್ಯಾಯಾಲಯದ ಕದ ತಟ್ಟಬಹುದು ಎಂದು ಅರ್ಜಿದಾರರಿಗೆ ನ್ಯಾಯಪೀಠ ತಿಳಿಸಿತು ವಿಚಾರಣೆ ವೇಳೆ ಸರ್ಕಾರದ ಪರವಾಗಿ ಹಾಜರಾಗಿದ್ದ ರಾಜ್ಯ ಅಡ್ವೋಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯನ್ನು ಇಂದು ಪೂರ್ಣಗೊಳಿಸಲಾಗುತ್ತಿದೆ.ಸದ್ಯದಲ್ಲೇ ಅಧಿಸೂಚನೆ ಹೊರಡಿಸಲಾಗುವುದು. ಅಲ್ಲದೆ, ಕ್ಷೇತ್ರಗಳಲ್ಲಿ ಮೀಸಲಾತಿ ನಿಗಧಿ ಪಡಿಸುವ ಸಂಬಂಧ ಮುಂದಿನ ಎರಡು ವಾರಗಳಲ್ಲಿ ಕರಡು ಅಧಿಸೂಚನೆ ಹೊರಡಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಲಾಗುವುದು ಎಂದು ಹೇಳಿದರು.
ಇದಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಪರಿಶೀಲಿಸಿ ಮುಂದಿನ ಎರಡು ವಾರಗಳಲ್ಲಿ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವುದಾಗಿ ನ್ಯಾಯಪೀಠಕ್ಕೆ ಮಾಹಿತಿನೀಡಿದರು. ಈ ಅಂಶವನ್ನು ಮುಚ್ಚಳಿಕೆ ಎಂದು ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಪೀಠ, ಈ ಸಂಬಂಧ ವಿವರವಾದ ಸೂಕ್ತ ಮೆಮೋ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿತು.