ಬೆಂಗಳೂರು, ಫೆ.19 – ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಇದ್ದು, ವಿದ್ಯುತ್ ಗೆ ಬೇಡಿಕೆ ಹೆಚ್ಚಿದೆ. ಸರ್ಕಾರ ಈ ಬೇಡಿಕೆಗೆ ಅನುಗುಣವಾಗಿ ವಿದ್ಯುತ್‍ಪೂರೈಕೆ ಮಾಡಲಾಗುತ್ತಿದ್ದು, ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ವಿಧಾನಪರಿಷತ್‍ನಲ್ಲಿ ಸ್ಪಷ್ಟಪಡಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಛಲವಾದಿ ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಮಳೆ ಕೊರತೆಯಾಗಿದ್ದರೂ ಅಣೆಕಟ್ಟೆಗಳಲ್ಲಿ ಹೆಚ್ಚಿನ ನೀರು ಸಂಗ್ರಹವಾಗಿದ್ದರಿಂದ ವಿದ್ಯುತ್ ಉತ್ಪಾದನೆಗೆ ಸಮಸ್ಯೆಯಾಗಿಲ್ಲ.ಜೊತೆಗೆ ಹಲವು ಪರ್ಯಾಯ ಮಾರ್ಗಗಳಿಂದ ವಿದ್ಯುತ್ ಪಡೆಯುತ್ತಿದ್ದು, ಬೇಡಿಕೆಗೆ ತಕ್ಕಂತೆ ಪೂರೈಕೆಯಾಗುತ್ತಿದೆ ಎಂದು ಹೇಳಿದರು.
ಗ್ರಾಮೀಣ ಪ್ರದೇಶದಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಗಮನ ಹರಿಸಲಾಗಿದೆ. ಸಮಸ್ಯೆಯಾದ ಟ್ರಾನ್ಸ್ ಫಾರ್ಮರ್ ಗಳನ್ನು 48 ಘಂಟೆಯೊಳಗೆ ದುರಸ್ತಿ ಮಾಡಿಕೊಡಬೇಕು . ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ 24 ಘಂಟೆಯೊಳಗೆ ಕೊಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಬಹುತೇಕ ರೈತರು ಕೃಷಿ ಪಂಪ್‍ಸೆಟ್‍ಗಳಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಈ ಕಾರಣಕ್ಕಾಗಿ ನಾವು ಅವರಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿಲ್ಲ.ಬದಲಾಗಿ ಈ ಎಲ್ಲಾ ಪಂಪ್ ಸೆಟ್ ಗಳಿಗೆ ಪರವಾನಗಿ ಪಡೆದು ಸಕ್ರಮ ಮಾಡಿಕೊಳ್ಳುವಂತೆ ರೈತರಿಗೆ ಮನವಿ ಮಾಡುತ್ತಿದ್ದೇವೆ ಎಂದು ತಿಳಿಸಿದರು ರಾಜ್ಯದಲ್ಲಿ ಇಲ್ಲಿಯವರೆಗೆ ವಿದ್ಯುತ್ ಅಭಾವ ಉಂಟಾಗಿಲ್ಲ. ಅಗತ್ಯವಿರುವಷ್ಟು ವಿದ್ಯುತ್ ಪೂರೈಕೆಯಾಗಲಿದೆ. ಬೇರೆ ಬೇರೆ ರಾಜ್ಯಗಳಿಂದಲೂ ವಿದ್ಯುತ್ ಖರೀದಿಗೆ ಕ್ರಮ ವಹಿಸಲಾಗಿದೆ.ಬೇಸಿಗೆ ಸಮಯದಲ್ಲೂ ಗೊಂದಲವಾಗದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ವಿವರಿಸಿದರು.

