ಬೆಂಗಳೂರು, ಫೆ.23- ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರನ್ನು ದೇಶದ ಪ್ರಧಾನಿ ಮಾಡಬೇಕು ಎಂಬ ಉದ್ದೇಶದೊಂದಿಗೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ರಾಜ್ಯದ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಮ್ಮತಿಸಿದೆ.
ಸೀಟು ಹಂಚಿಕೆ ಮತ್ತು ಚುನಾವಣೆ ಕಾರ್ಯತಂತ್ರದ ಕುರಿತು ಪಕ್ಷದ ಹಿರಿಯ ನಾಯಕ ಅಮಿತ್ ಶಾ ಅವರೊಂದಿಗೆ ದೆಹಲಿಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಮಾಲೋಚನೆ ನಡೆಸಿ ಕ್ಷೇತ್ರಗಳ ಹಂಚಿಕೆಯ ಬಗ್ಗೆ ಅಂತಿಮ ನಿರ್ಧಾರ ಕೈಗೊಂಡಿದ್ದಾರೆ.
ಜೆಡಿಎಸ್ ನ ತವರು ಹಾಸನ ಮಂಡ್ಯ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳಿಂದ ಜೆಡಿಎಸ್ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರು ಬಿಜೆಪಿ ಚಿನ್ಹೆಯಡಿ ಕಣಕ್ಕಿಳಿಯಲಿದ್ದಾರೆ.
ಈ ಮಾತುಕತೆಯ ಸಮಯದಲ್ಲಿ ಕುಮಾರಸ್ವಾಮಿ ಜೆಡಿಎಸ್ ಗೆ 6 ಲೋಕಸಭಾ ಕ್ಷೇತ್ರಗಳನ್ನು ಬಿಟ್ಟು ಕೊಡುವಂತೆ ಮನವಿ ಮಾಡಿದರು ಕೊನೆಗೆ 5 ಕ್ಷೇತ್ರಕ್ಕೆ ಪಟ್ಟು ಹಿಡಿದರು .ಆದರೆ ಸಂಪನ್ಮೂಲ ಸೇರಿದಂತೆ ಹಲವಾರು ಕಾರಣಗಳನ್ನು ನೀಡಿ ಅಮಿತ್ ಶಾ ವಸ್ತು ಸ್ಥಿತಿಯನ್ನು ವಿವರಿಸಿದ ಪರಿಣಾಮ ಅಂತಿಮವಾಗಿ ಮೂರು ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕುಮಾರಸ್ವಾಮಿ ಸಮ್ಮತಿಸಿದ್ದಾರೆ ಎಂದು ಗೊತ್ತಾಗಿದೆ.
ಹಾಸನ ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ, ಮಂಡ್ಯ ಕ್ಷೇತ್ರದಿಂದ ಮಾಜಿ ಸಂಸದ ಪುಟ್ಟರಾಜು ಇಲ್ಲವೇ ಕುಮಾರಸ್ವಾಮಿ ಮತ್ತು ಕೋಲಾರದಿಂದ ನಿಸರ್ಗ ನಾರಾಯಣಸ್ವಾಮಿ ಅವರು ಜೆಡಿಎಸ್ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲಿದ್ದಾರೆ.
ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಡಾ. ಮಂಜುನಾಥ್ ಅವರು ಸ್ಪರ್ಧಿಸಬೇಕು ಎಂಬ ಬಗ್ಗೆ ಒತ್ತಡವಿದ್ದು, ಈ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಡಾ. ಮಂಜುನಾಥ್ ಅವರು ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಬಗ್ಗೆ ರಾಜ್ಯಾದ್ಯಂತ ಜನರಲ್ಲಿ ಒಳ್ಳೆಯ ಭಾವನೆ ಇದೆ. ಅವರು ಸಹ ಸಭೆ ಸಮಾರಂಭಗಳಲ್ಲಿ ಭಾಗವಹಿಸಿದಾಗ ಲೋಕಸಭೆ ಚುನಾವಣೆಗೆ ಸ್ರ್ಪಧಿಸುವಂತೆ ಜನರು ಕೂಡ ಒತ್ತಡ ಹಾಕುತ್ತಿದ್ದಾರೆ ಎಂದರು.
ಮಂಜುನಾಥ್ ಅವರು ಚುನಾವಣೆಗೆ ಸ್ರ್ಪಧಿಸುವ ವಿಚಾರದಲ್ಲಿ ಬಹಿರಂಗವಾಗಿ ಇದುವರೆಗೂ ಏನನ್ನೂ ಹೇಳಿಲ್ಲ. ರಾಜಕೀಯ ಪ್ರವೇಶ ಮಾಡುವ ಬಗ್ಗೆ ತೀರ್ಮಾನ ಮಾಡಿಲ್ಲ ಎಂದು ಹೇಳುತ್ತಿದ್ದಾರೆ. ಸಮಯ ಬಂದಾಗ ಈ ಎಲ್ಲಾ ವಿಚಾರ ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 28 ಸ್ಥಾನ ಗೆಲ್ಲಬೇಕೆಂಬ ನಿಟ್ಟಿನಲ್ಲಿ ಅನುಸರಿಸಬೇಕಾದ ಕಾರ್ಯತಂತ್ರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರೊಂದಿಗೆ ದೆಹಲಿ ಭೇಟಿ ಸಂದರ್ಭದಲ್ಲಿ ಸುದೀರ್ಘವಾಗಿ ಚರ್ಚಿಸಲಾಗಿದೆ. ಅಮಿತ್ ಷಾ ಅವರು ಸಹ ಹಲವು ಸಲಹೆ- ಸೂಚನೆಗಳನ್ನು ನೀಡಿದ್ದಾರೆ ಎಂದರು.
ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಜಂಟಿ ಹೋರಾಟ ಮಾಡಲಿದ್ದು, ಏನೇ ತೀರ್ಮಾನ ಕೈಗೊಂಡರೂ ಉಭಯ ಪಕ್ಷಗಳ ನಾಯಕರು ಚರ್ಚಿಸಿ ಒಮ್ಮತದ ನಿರ್ಣಯ ಕೈಗೊಳ್ಳಲಾಗುವುದು. ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಸೋಮವಾರ ಬಿಜೆಪಿ ಹಮ್ಮಿಕೊಳ್ಳಲಿರುವ ರಾಜಭವನ ಚಲೋ ಕಾರ್ಯಕ್ರಮದಲ್ಲಿ ನಾವು ಭಾಗಿಯಾಗುತ್ತೇವೆ ಎಂದು ಸ್ಪಷ್ಟಪಡಿಸಿದರು.