ಬೆಂಗಳೂರು, ಮಾ.1: ರಾಜ್ಯದ ಯಾವುದೇ ಕಡೆ ಕುಡಿಯುವ ನೀರಿನ ಸಮಸ್ಯೆಗೆ ಗಮನ ನೀಡದೆ ಉದಾಸೀನ ಮಾಡಿದರೆ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಿ ಶಿಸ್ತುಕ್ರಮ ಕೈಗೊಳ್ಳುವುದಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ರಾಜ್ಯದ ಯಾವುದೇ ಕಡೆ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಂಡ ತಕ್ಷಣವೇ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಒಂದುವೇಳೆ ನಿರ್ಲಕ್ಷ್ಯ ತೋರಿದರೆ ಅಂತವರ ವಿರುದ್ಧ ಕ್ರಮಕೈಗೊಳ್ಳುವುದು ನಿಶ್ಚಿತ ಎಂದರು.
ಜಿಲ್ಲಾಡಳಿತ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಪ್ರದೇಶಗಳನ್ನು ಮೊದಲೇ ಗುರುತಿಸಿ ಅಗತ್ಯ ಕ್ರಮಗಳನ್ನು
ಕೈಗೊಳ್ಳುವಂತೆಯೂ ಸಚಿವರು ತಾಕೀತು ಮಾಡಿದ್ದಾರೆ. ಇಂದಿನ ಸಭೆಯಲ್ಲಿ ಸಚಿವರು ಜಿಲ್ಲೆಗಳ ಬರ ಪರಿಸ್ಥಿತಿ ಕುಡಿಯುವ ನೀರಿನ ಸಮಸ್ಯೆ,ಮೇವಿನ ಕೊರತೆ ಮಾಹಿತಿ ಪಡೆದುಕೊಂಡು ಸಮಸ್ಯೆಗಳ ಪರಿಹಾರಕ್ಕೆ ಸಲಹೆ ಸೂಚನೆಗಳನ್ನು ನೀಡಿದರು.ಕುಡಿಯುವ ನೀರಿನ ಸಮಸ್ಯೆ ಇರುವ ಕಡೆ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆದುನೀರು ಪೂರೈಸಲು ಹಾಗೂ ಟ್ಯಾಂಕರ್ ಮೂಲಕ ನೀರು ಪೂರೈಸಲು ಕ್ರಮಕೈಗೊಂಡು ಇವರುಗಳಿಗೆ 15 ದಿನಗಳೊಳಗೆ ಹಣ ಪಾವತಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.