ಬೆಂಗಳೂರು, ಎ.29: ಲೈಂಗಿಕ ದೌರ್ಜನ್ಯ ಆರೋಪದ ಸುಳಿಯಲ್ಲಿ ಸಿಲುಕಿರುವಬಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಇದೀಗ ಜೆಡಿಎಸ್ ಶಾಸಕರೇ ತಿರುಗಿ ಬಿದ್ದಿದ್ದಾರೆ.
ತಕ್ಷಣವೇ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ಆಗ್ರಹಿಸಿರುವ ಶಾಸಕರು ತಮಗೆ ಜೆಡಿಎಸ್ ನ 19 ಶಾಸಕರ ಭವಿಷ್ಯ ಬೇಕೋ? ತಮ್ಮ ಕುಟುಂಬದ ರೇವಣ್ಣ ಹಾಗೂ ಪ್ರಜ್ವಲ್ ಮುಖ್ಯವೋ ತೀರ್ಮಾನಿಸಿ’ ಎಂದು ಹೇಳಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮತ್ತು ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಅವರಿಗೆ ಪತ್ರ ಬರೆದಿರುವ ಶಾಸಕ ಶರಣಗೌಡ ಕಂದಕೂರ್ ಅವರು,ಗಂಭೀರ ಸ್ವರೂಪದ ಆರೋಪದ ಹಿನ್ನಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡುವಂತೆ ಮನವಿ ಮಾಡಿದ್ದಾರೆ.
ಪ್ರಕರಣದ ಬಗ್ಗೆ ಸರ್ಕಾರ ಎಸ್‌ಐಟಿ ತನಿಖೆಗೆ ವಹಿಸಿರುವ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಆಂತರಿಕ ಸಮಿತಿ ರಚನೆ ಮಾಡಬೇಕು. ಆ ಸಮಿತಿಯು ಪೆನ್‌ಡ್ರೈವ್ ಪ್ರಕರಣದ ಸತ್ಯಾಸತ್ಯತೆಯನ್ನು ನಾಡಿನ ತಾಯಂದಿರಿಗೆ ತಿಳಿಸುವಂತಾಗಲಿ, ಅಲ್ಲಿಯವರೆಗೆ ಪಕ್ಷಕ್ಕಾಗುವ ಮುಜುಗರ ತಪ್ಪಿಸಲು ರಾಜ್ಯದ 2ನೇ ಹಂತದ ಲೋಕಸಭಾ ಚುನಾವಣೆ ವೇಳೆ ವ್ಯತಿರಿಕ್ತ ಪ್ರಭಾವ ಬೀರದಿರಲು ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡುವಂತೆ ಕೋರಿದ್ದಾರೆ.
ಕೆಲ ದಿನಗಳಿಂದ ರಾಜ್ಯಾದ್ಯಂತ ಹರಿದಾಡುತ್ತಿರುವ ವಿಡಿಯೋ ತುಣುಕುಗಳಿಂದ ಪಕ್ಷಕ್ಕೆ ತೀವ್ರ ಮುಜುಗರ ಉಂಟಾಗಿದೆ. ಪಕ್ಷದ ನಾಯಕರಾದ ನೀವು ಹೆಣ್ಣು ಮಕ್ಕಳನ್ನು ಗೌರವದಿಂದ ಕಾಣುತ್ತಿದ್ದೀರಿ ಎಂಬುದರಲ್ಲಿ ಎರಡು ಮಾತಿಲ್ಲ. 6 ದಶಕಗಳಿಗೂ ಹೆಚ್ಚು ಕಾಲ ರಾಜಕೀಯ ಜೀವನ ನಡೆಸಿಕೊಂಡು ಬಂದಿರುವ, ರಾಷ್ಟ್ರಕ್ಕೆ ಮಾದರಿಯಾದ ತತ್ವ ಸಿದ್ಧಾಂತಗಳ ಬುನಾದಿ ಮೇಲೆ ಜೆಡಿಎಸ್ ಅನ್ನು ಸಮರ್ಥವಾಗಿ ಕಟ್ಟಿ ಬೆಳೆಸಿದ್ದೀರಿ, ರಾಷ್ಟ್ರದ ಮೊದಲ ಕನ್ನಡಿಗ ಪ್ರಧಾನಿ ಎಂಬ ಹೆಗ್ಗಳಿಕೆಯೂ ನಿಮ್ಮದಾಗಿದೆ ಎಂದಿದ್ದಾರೆ.
ಹೆಣ್ಣು ಸಾಕ್ಷಾತ್ ಕಪಿಲಸಿದ್ಧ ಮಲ್ಲಿಕಾರ್ಜುನ ಎಂಬ ಶರಣರ ವಾಣಿಯಂತೆ ಹೆಣ್ಣು ಮಕ್ಕಳನ್ನು ಗೌರವಾದರಗಳಿಂದ ನೋಡಿಕೊಂಡು ಬಂದಿದ್ದೀರಿ. ನಮ್ಮ ಪಕ್ಷದ ಚಿಹ್ನೆಯೂ ಕೂಡ ಭತ್ತದ ತೆನೆ ಹೊತ್ತ ಮಹಿಳೆಯಾಗಿದ್ದು, ಮಹಿಳೆಯರ ಬಗ್ಗೆ ಇರುವ ಗೌರವವನ್ನು ಪ್ರತಿನಿಧಿಸುತ್ತದೆ. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಲಾಟರಿ ನಿಷೇಧ ಮಾಡಿ, ವಿದ್ಯಾರ್ಥಿನಿಯರಿಗೆ ಸೈಕಲ್ ಭಾಗ್ಯವನ್ನು ನೀಡುವ ಮೂಲಕ ಹೆಣ್ಣು ಮಕ್ಕಳ ಕಷ್ಟಕ್ಕೆ ಸ್ಪಂದಿಸಿದ್ದರು ಎಂದು ಪತ್ರದಲ್ಲಿ ಅವರು ತಿಳಿಸಿದ್ದಾರೆ.
ಯಾವುದು ಮುಖ್ಯ:
ಇದರ ನಡುವೆ, ಜೆಡಿಎಸ್ ನ 19 ಶಾಸಕರ ಭವಿಷ್ಯ ಬೇಕೋ? ತಮ್ಮ ಕುಟುಂಬದ ರೇವಣ್ಣ ಹಾಗೂ ಪ್ರಜ್ವಲ್ ಮುಖ್ಯವೋ ತೀರ್ಮಾನಿಸಿ’ ಎಂದು ಮುಳಬಾಗಿಲು ಕ್ಷೇತ್ರದ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಆಗ್ರಹಿಸಿದ್ದಾರೆ.
ಸಂಬಂಧ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ‘ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂಥ ಕೆಲಸ ಮಾಡಿದವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕು’ ಎಂದು ಒತ್ತಾಯಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ‘ಹಾಸನದ ಲೀಲೆಗಳು’ ಮಾಧ್ಯಮಗಳಲ್ಲಿ ಪ್ರಜ್ವಲಿಸುತ್ತಿರುವುದು ಪಕ್ಷದ ಸಾಮಾನ್ಯ ಕಾರ್ಯಕರ್ತರಾಗಿ ರಾಜ್ಯದಲ್ಲೆಡೆ ಮುಜುಗರಕ್ಕೆ ಒಳಗಾಗಿರುವುದಲ್ಲದೆ ಹೊರಗಡೆ ಪಕ್ಷದ ಹೆಸರು ಹೇಳಲು ಸಹ ಹೇಸಿಗೆ ಎನಿಸುವಂಥ ಸ್ಥಿತಿಗೆ ತಲುಪಿದೆ’ ಎಂದಿದ್ದಾರೆ.
ಮಾಧ್ಯಮದವರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲಾಗದ ದಯನೀಯ ಪರಿಸ್ಥಿತಿ ಮೊದಲ ಬಾರಿ ಶಾಸಕನಾಗಿರುವ ನನಗೆ ಬಂದಿದೆ. ಈ ಕಷ್ಟಕರ ಸನ್ನಿವೇಶಗಳು ಎದುರಾಗುತ್ತಿದ್ದರೆ, ಸಾಮಾನ್ಯ ಕಾರ್ಯಕರ್ತರ ಪರಿಸ್ಥಿತಿ ಯೋಚಿಸಿ’ ಎಂದು ಪ್ರಶ್ನಿಸಿದ್ದಾರೆ.