ಬೆಂಗಳೂರು,ಸೆ.27:
ರಾಜ್ಯ ಸರ್ಕಾರ ಮತ್ತು ರಾಜಭವನದ ನಡುವೆ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ರಾಜ್ಯಪಾಲರಿಗೆ ಬರೆದಿರುವ ಪತ್ರ ಸಂಚಲನ ಉಂಟುಮಾಡಿದೆ.
ರಾಜಭವನ ಸಚಿವಾಲಯದ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿ ಲೋಕಾಯುಕ್ತ ಸ್ಪೆಷಲ್ ಎಸ್ಐಟಿ ಐಜಿಪಿ ಎಂ. ಚಂದ್ರಶೇಖರ್ ಅವರು ಸೆಪ್ಟೆಂಬರ್ 4 ರಂದು ಡಿಜಿ-ಐಜಿಪಿ ಅಲೋಕ್ ಮೋಹನ್ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮನೀಶ್ ಖರ್ಬೀಕರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಕೇಂದ್ರ ಸಚಿವ ಕುಮಾರಸ್ವಾಮಿ ಸೇರಿದಂತೆ ಹಲವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ತನಿಖಾಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದು ಹಲವು ತಿಂಗಳುಗಳ ಕಳೆದಿವೆ ಈ ಬಗ್ಗೆ ರಾಜಭವನ ಇನ್ನು ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂಬ ಆರೋಪ ಕೇಳಿ ಬಂದಿತ್ತು.
ಇದರ ಬೆನ್ನಲ್ಲೇ ತನಿಖಾಧಿಕಾರಿಗಳು ರಾಜ್ಯಪಾಲರಿಗೆ ಬರೆದಿದ್ದ ಪತ್ರ ಮಾಧ್ಯಮಗಳಲ್ಲಿ ಪ್ರಕಟಗೊಂಡಿದ್ದವು. ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ರಾಜ್ಯಪಾಲರು ತಮ್ಮ ಕಚೇರಿಯ ರಹಸ್ಯ ಪತ್ರ ಸೋರಿಕೆಯಾಗಿದೆ ಎಂದು ಹೇಳಿದ್ದರು.
ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಲೋಕಾಯುಕ್ತ 2023ರ ಸೆ.24ರಂದು ರಾಜ್ಯಪಾಲರಿಗೆ ಪ್ರಸ್ತಾವ ಸಲ್ಲಿಕೆ ಮಾಡಿತ್ತು. ನಿಯಮಗಳ ಪ್ರಕಾರ ನಾಲ್ಕು ತಿಂಗಳೊಳಗೆ ಕಡತ ವಿಲೇವಾರಿ ಮಾಡಬೇಕು. ಆದರೆ, ಎಂಟು ತಿಂಗಳಿನಿಂದ ಕಡತ ರಾಜ್ಯಪಾಲರ ಸಚಿವಾಲಯದಲ್ಲೇ ಬಾಕಿ ಉಳಿದಿದೆ. ಇದು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 19ರ ಪ್ರಕಾರ ಸ್ಪಷ್ಟ ಉಲ್ಲಂಘನೆಯಾಗಿದೆ ಎಂಬ ಟೀಕೆ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ತಮ್ಮ ಕಚೇರಿಯಲ್ಲಿನ ಪತ್ರ ಸೋರಿಕೆ ಬಗ್ಗೆ ತನಿಖೆ ನಡೆಸುವಂತೆ ಹೇಳಿದ್ದರು.
ಈ ವಿಷಯವಾಗಿ ಈಗ ತನಿಖೆಗೆ ಅನುಮತಿ ಕೋರಿ ಹಿರಿಯ ಪೊಲೀಸ್ ಅಧಿಕಾರಿ ಪಾತ್ರ ಬರೆದಿದ್ದು ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ.