ನವದೆಹಲಿ: ಮುಂದಿನ ಒಂದೂವರೆ ವರ್ಷದಲ್ಲಿ ವಿವಿಧ ಇಲಾಖೆಗಳಲ್ಲಿ ಮಿಷನ್ ಮೋಡ್‌ನ ಅನುಸಾರ 10 ಲಕ್ಷ ನೇಮಕಾತಿ ಮಾಡಲು ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ಈ ಸಂಬಂಧ ಪ್ರಧಾನಿ ಕಚೇರಿಯಿಂದ ಟ್ವೀಟ್ ಮಾಡಲಾಗಿದ್ದು ಜನರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಮೋದಿ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
ಮಂಗಳವಾರ ಪ್ರಧಾನಮಂತ್ರಿ ಕಚೇರಿ ಈ ಬಗ್ಗೆ ಟ್ವೀಟ್ ಮಾಡಿದೆ. ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳು ಹಾಗೂ ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲಗಳ ಸ್ಥಿತಿಗತಿಯ ಪರಾಮರ್ಶೆ ನಡೆಸಿದ ಬಳಿಕ ಮೋದಿ ಅವರು ಈ ನಿರ್ದೇಶನ ನೀಡಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ತಿಳಿಸಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಒವೈಸಿ, ಟಿಎಂಸಿಯ ಮಮತಾ ಬ್ಯಾನರ್ಜಿ ಸೇರಿದಂತೆ ವಿಪಕ್ಷಗಳು ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಳವಾಗುತ್ತಿದೆ ಎಂದು ಟೀಕೆ ಮಾಡುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿ ಅವರು ಮಹತ್ವದ ಘೋಷಣೆ ಮಾಡಿದ್ದಾರೆ.
ಉದ್ಯೋಗಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಕಾರ್ಯಪ್ರವೃತ್ತರಾಗಿದ್ದು, ಮುಂದಿನ ಒಂದೂವರೆ ವರ್ಷದಲ್ಲಿ 10 ಲಕ್ಷ ಜನರನ್ನು ನೇಮಿಸಿಕೊಳ್ಳಲಾಗುವುದು. ಪ್ರಧಾನ ಮಂತ್ರಿಗಳು ನೇಮಕಾತಿ ಬಗ್ಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ಟ್ವೀಟ್ ಮಾಡಿದೆ.