ಬೆಂಗಳೂರು, ಡಿ.20 – ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಹೆಚ್ಚಿನ ಸಂಸದರನ್ನು ಆಯ್ಕೆ ಮಾಡಲು ರಣತಂತ್ರ ರೂಪಿಸುತ್ತಿರುವ ಬಿಜೆಪಿ ಹೈಕಮಾಂಡ್ ನಾಳೆ ದೆಹಲಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸುತ್ತಿದೆ.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರೊಂದಿಗೆ ಜೆ.ಪಿ.ನಡ್ಡಾ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಕೇಂದ್ರ ಗೃಹಸಚಿವ ಅಮಿತ್ ಷಾ ಅವರುಗಳು ಮಾತುಕತೆ ನಡೆಸಲಿದ್ದಾರೆ.
ನಾಳಿನ ಸಭೆಯಲ್ಲಿ ಸೀಟು ಹಂಚಿಕೆ ಕುರಿತಾಗಿ ಉಭಯ ಪಕ್ಷಗಳ ಮುಖಂಡರು ಸ್ಪಷ್ಟವಾದ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ. ಕುಮಾರಸ್ವಾಮಿ ಅವರಿಗೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸಾಥ್ ನೀಡುತ್ತಿದ್ದು, ನಾಳಿನ ಸಭೆಯಲ್ಲಿ ಜೆಡಿಎಸ್ 28 ಕ್ಷೇತ್ರಗಳ ಪೈಕಿ ಎಷ್ಟು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿದೆ ಎಂಬುದರ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ.
ಮೂಲಗಳ ಪ್ರಕಾರ, ಜೆಡಿಎಸ್ 28 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳನ್ನು ತನಗೆ ಬಿಟ್ಟುಕೊಡಬೇಕೆಂಬ ಬೇಡಿಕೆಯನ್ನು ಇಟ್ಟಿದೆ ಎಂದು ತಿಳಿದುಬಂದಿದೆ. ಹಾಸನ, ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಮೈಸೂರು-ಕೊಡಗು ಕ್ಷೇತ್ರಗಳನ್ನು ತನಗೆ ನೀಡಬೇಕೆಂಬ ಬೇಡಿಕೆಯನ್ನು ಪ್ರಮೋದ್ ಸಾವಂತ್ ಮೂಲಕ ಮಾಹಿತಿ ನೀಡಿದೆ.