ಬೆಂಗಳೂರು, ಮಾ.14: ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ಮಾನದಂಡ ಆಧರಿಸಿ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡುವಂತೆ ಬಿಜೆಪಿ (BJP) ಕೇಂದ್ರ ನಾಯಕತ್ವ ಸ್ಪಷ್ಟ ಸೂಚನೆ ನೀಡಿದ್ದರೂ ಸೊಪ್ಪು ಹಾಕದ ಹಲವರು ಬಂಡಾಯದ ಬಾವುಟ ಹಾರಿಸಲು ಸಜ್ಜುಗೊಂಡಿದ್ದಾರೆ.
ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ತಮ್ಮ ಪುತ್ರನಿಗೆ ಹಾವೇರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ್ದರಿಂದ ಆಕ್ರೋಶಗೊಂಡಿದ್ದು ನಾಳೆ ತಮ್ಮ ಬೆಂಬಲಿಗರ ಸಭೆ ಕರೆದಿದ್ದಾರೆ.
ಟಿಕೆಟ್ ಹಂಚಿಕೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕೈ ಮೇಲಾಗಿದ್ದು ಅವರು ಹೇಳಿದವರಿಗೆ ಹೈಕಮಾಂಡ್ ಟಿಕೇಟ್ ನೀಡಿದೆ. ಈ ವೇಳೆ ಹಿಂದುತ್ವ ಮತ್ತು ಪಕ್ಷದ ನೀತಿ ಸಿದ್ಧಾಂತವನ್ನು ಗಾಳಿಗೆ ತೂರಲಾಗಿದೆ ಎಂದು ಈಶ್ವರಪ್ಪ ಆಪಾದಿಸಿದ್ದಾರೆ. ಅಷ್ಟೇ ಅಲ್ಲ ಯಡಿಯೂರಪ್ಪ ಅವರು ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ಕೊಡಿಸಲು ವಹಿಸಿದ ಮುತವರ್ಜಿಯನ್ನು ತಮ್ಮ ಮಗನಿಗೆ ಟಿಕೆಟ್ ಕೊಡಿಸಲು ವಹಿಸಲಿಲ್ಲ ಎಂದು ದೂರಿದ್ದಾರೆ.
ಪಕ್ಷದ ಹಿಂದುತ್ವ ವಾದಿ ನಾಯಕರಾದ ನಳಿನ್ ಕುಮಾರ್ ಕಟೀಲು, ಸಿ.ಟಿ. ರವಿ, ಬಸನಗೌಡ ಪಾಟೀಲ್ ಯತ್ನಾಳ್, ಅನಂತಕುಮಾರ್ ಹೆಗಡೆ, ಪ್ರತಾಪ ಸಿಂಹ ಮೊದಲಾದವರನ್ನು ತುಳಿಯುವ ಪ್ರಯತ್ನ ಮಾಡಲಾಗಿದೆ ಪಕ್ಷಕ್ಕೆ ಸಂಬಂಧವೇ ಇಲ್ಲದ ಯದುವೀರ್ ಮತ್ತು ಡಾ.ಮಂಜುನಾಥ್ ಅವರಿಗೆ ಟಿಕೆಟ್ ನೀಡಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.
ತಮ್ಮ ಪುತ್ರನಿಗೆ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡಲಾಗುತ್ತದೆ ಎಂದು ಪಕ್ಷದ ರಾಜ್ಯ ಉಸ್ತುವಾರಿ ಕೇಂದ್ರ ನಾಯಕ ರಾಧಾ ಮೋಹನ್ ಸಿಂಗ್ ನೀಡಿರುವ ಆಹ್ವಾನವನ್ನು ತಿರಸ್ಕರಿಸಿರುವ ಅವರು ಇದೀಗ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ.
ಅದೇ ರೀತಿಯಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಮಾಜಿ ಸಂಸದ ಜಿಎಂ ಸಿದ್ದೇಶ್ವರ್ ಅವರ ಪತ್ನಿಗೆ ಟಿಕೆಟ್ ನೀಡಿರುವ ಕ್ರಮದ ವಿರುದ್ಧ ಕೆಂಡಮಂಡಲರಾಗಿರುವ ಮಾಜಿ ಸಚಿವ ರೇಣುಕಾಚಾರ್ಯ ಇದೀಗ ಬಂಡಾಯದ ಮೂಲಕ ಬಿಜೆಪಿ ಅಭ್ಯರ್ಥಿಗೆ ಸೋಲುಣಿಸಲು ತಂತ್ರ ರೂಪಿಸ ತೊಡಗಿದ್ದಾರೆ.
ರೇಣುಕಾಚಾರ್ಯ ಅವರ ನೇತೃತ್ವದಲ್ಲಿ ಮಾಜಿ ಸಚಿವ ರವೀಂದ್ರನಾಥ ನಿವಾಸದಲ್ಲಿ ಸಭೆ ನಡೆಸಿದ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಮಲ್ಲಿಕಾರ್ಜುನ್, ಮಾಜಿ ಶಾಸಕ ಗುರುಸಿದ್ದನಗೌಡ ಪುತ್ರ ಡಾ. ರವೀಂದ್ರ ಇದೀಗ ಪಕ್ಷದ ಅಭ್ಯರ್ಥಿಯ ವಿರುದ್ಧ ಯಾರಾದರೂ ಒಬ್ಬರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಬೇಕು ಎಂಬ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಗೊತ್ತಾಗಿದೆ.
ಮತ್ತೊಂದೆಡೆ ಕೊಪ್ಪಳ ಕ್ಷೇತ್ರದ ಹಾಲಿ ಸಂಸದ ಕರಡಿ ಸಂಗಣ್ಣ ತಮಗೆ ಟಿಕೆಟ್ ನಿರಾಕರಿಸಿರುವ ಹೈಕಮಾಂಡ್ ವಿರುದ್ಧ ಆಕ್ರೋಶಗೊಂಡಿದ್ದು ಬೆಂಬಲಿಗರೊಂದಿಗೆ ಸಮಾಲೋಚನೆ ನಡೆಸಿದರು. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕು ಎಂದು ನಿರ್ಧರಿಸಿರುವ ಅವರು ಕಾಂಗ್ರೆಸ್ ಇಲ್ಲವೇ ಜನಾರ್ದನ ರೆಡ್ಡಿ ನೇತೃತ್ವದ ಪಕ್ಷದಿಂದ ಕಣಕ್ಕಿಳಿಯುವ ಕುರಿತಂತೆ ಚಿಂತನೆ ನಡೆಸಿದ್ದಾರೆ.
ಬೆಂಗಳೂರು ಉತ್ತರ ಕ್ಷೇತ್ರದಿಂದ ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡಿರುವ ಕ್ರಮದ ವಿರುದ್ಧ ಕೆಲವು ನಿಷ್ಠಾವಂತರು ಬೇಸರ ಹೊರ ಹಾಕಿದ್ದಾರೆ. ಮಾಜಿ ಸಂಸದ ಸದಾನಂದ ಗೌಡ ಅವರು ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಿಸುವ ಸಾಧ್ಯತೆ ಇದ್ದು ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗುವುದಿಲ್ಲ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
ತುಮಕೂರಿನಲ್ಲೂ ಮಾಜಿ ಸಚಿವ ವಿ ಸೋಮಣ್ಣ ಅವರ ಸ್ಪರ್ಧೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು ಮಾಜಿ ಸಚಿವ ಮಾಧುಸ್ವಾಮಿ ನೇತ್ರತ್ವದಲ್ಲಿ ಹಲವರು ಬಂಡಾಯ ಸಾರಲು ಸಜ್ಜುಗೊಂಡಿದ್ದಾರೆ ಪ್ರಮುಖವಾಗಿ ಪಕ್ಷದ ಅಧ್ಯಕ್ಷ ವಿಜಯೇಂದ್ರ ಬಣದಲ್ಲಿ ಗುರುತಿಸಿಕೊಂಡಿರುವ ಯುವ ಕಾರ್ಯಕರ್ತರು ಸೋಮಣ್ಣ ಅವರ ಸ್ಪರ್ಧೆಗೆ ವಿರೋಧ ವ್ಯಕ್ತಪಡಿಸಿದ್ದು ಚುನಾವಣೆಯಲ್ಲಿ ಸಾಕಷ್ಟು ಪರಿಣಾಮ ಬೀರುವ ಸಾಧ್ಯತೆ ಇದೆ.
ಮೈಸೂರಿನಲ್ಲಿ ಸಂಸದ ಪ್ರತಾಪ ಸಿಂಹ ತಮಗೆ ಟಿಕೆಟ್ ನಿರಾಕರಿಸಿರುವ ಹಿಂದೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇರ ಹಸ್ತಕ್ಷೇಪವಿದೆ ಎಂದು ಆಪಾದಿಸಿದ್ದು ಪಕ್ಷದ ಅಭ್ಯರ್ಥಿ ಯದುವೀರ್ ಪರ ಯಾವುದೇ ರೀತಿಯ ಪ್ರಚಾರ ನಡೆಸದಿರಲು ತಮ್ಮ ಬೆಂಬಲಿಗರಿಗೆ ಸೂಚನೆ ನೀಡಿದ್ದಾರೆ ರಾಜಕೀಯವಾಗಿ ತಾವು ಸದ್ಯದಲ್ಲೇ ಒಂದು ನಿರ್ಧಾರ ಕೈಗೊಳ್ಳುತ್ತಿತ್ತು ಅದಕ್ಕಾಗಿ ಕಾದು ನೋಡುವಂತೆ ಎಲ್ಲರಿಗೂ ತಿಳಿಸುವ ಮೂಲಕ ಆಶ್ಚರ್ಯ ಮೂಡಿಸಿದ್ದಾರೆ.
ಮಂಗಳೂರು ಕ್ಷೇತ್ರದಿಂದ ಸ್ಪರ್ಧಿಸಲು ತಮಗೆ ಟಿಕೆಟ್ ನಿರಾಕರಿಸಿದ ನಳಿನ್ ಕುಮಾರ್ ಕಟಿಲ್ ಪಕ್ಷದ ನಿರ್ಧಾರ ಅದಕ್ಕೆ ತಲೆ ಬಾಗುತ್ತೇನೆ ಎಂದು ಹೇಳಿದ್ದಾರಾದರೂ ಚುನಾವಣೆ ಘೋಷಣೆಯಾದ ನಂತರ ಇವರು ಯಾವ ನಿಲುವು ತಳೆಯಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.


1 ಟಿಪ್ಪಣಿ
Тяговые аккумуляторные https://ab-resurs.ru батареи для складской техники: погрузчики, ричтраки, электротележки, штабелеры. Новые АКБ с гарантией, помощь в подборе, совместимость с популярными моделями, доставка и сервисное сопровождение.