ಬೆಂಗಳೂರು, ನ.25- ಉಪ ಮುಖ್ಯಮಂತ್ರಿ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿಗಳಿಕೆ ಆರೋಪ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಹಿಂದಿನ ಸರ್ಕಾರ ನಿರ್ಧಾರ ತೆಗೆದುಕೊಂಡಿಲ್ಲ.ಜಾರಿ ನಿರ್ದೇಶನಾಲಯದ ಆದೇಶದ ಮೇರೆಗೆ ಕ್ರಮ ಕೈಗೊಂಡಿರುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ತಾವು ಮುಖ್ಯಮಂತ್ರಿಯಾಗಿದ್ದ ವೇಳೆ ನಿಯಮಬಾಹಿರವಾಗಿ ತೀರ್ಮಾನ ಕೈಗೊಳ್ಳಲಾಗಿದೆ ಎಂಬ ಆರೋಪಗಳಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಜಾರಿ ನಿರ್ದೇಶನಾಲಯ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದರಿಂದಲೇ ರಾಜ್ಯ ಸರ್ಕಾರ ಈ ಕ್ರಮವನ್ನು ತೆಗೆದುಕೊಂಡಿತ್ತು ಎಂದು ವಿವರಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇದೆಲ್ಲವೂ ಗೊತ್ತಿದ್ದರೂ ಜನರನ್ನು ದಿಕ್ಕು ತಪ್ಪಿಸಲು ಸುಳ್ಳು ಹೇಳುತ್ತಿದ್ದಾರೆ. ಈಗ ಸತ್ಯವನ್ನು ತಿರುಚುವ ಕೆಲಸ ಸರ್ಕಾರದಿಂದ ನಡೆಯುತ್ತಿದೆ. ಹೇಳಿದ್ದನ್ನೇ ಹೇಳಿ ಸುಳ್ಳನ್ನು ಸತ್ಯ ಮಾಡಲು ಸಿದ್ದರಾಮಯ್ಯ ಮತ್ತು ಅವರ ತಂಡದವರು ಮುಂದಾಗಿದ್ದಾರೆ. ಒಂದಲ್ಲ, ಎರಡಲ್ಲ, ಸಾವಿರ ಬಾರಿ ಹೇಳುತ್ತೇನೆ. ನಾನು ಹೇಳಿದ್ದೇನೋ ಅದಕ್ಕೆ ಬದ್ದನಾಗುತ್ತೇನೆ ಎಂದು ಸ್ಪಷ್ಟಪಡಿಸಿದರು.
ಅಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದ ಇಡಿ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಕೆಲವು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ. ಇದೊಂದು ಗಂಭೀರ ಪ್ರಕರಣವಾಗಿರುವುದರಿಂದ ಸಿಬಿಐಗೆ ವಹಿಸುವಂತೆ ಸೂಚನೆ ನೀಡಿತ್ತು. ಈ ಕುರಿತು ರಾಜ್ಯ ಅಡ್ವೋಕೇಟ್ ಜನರಲ್ ಅವರ ಅಭಿಪ್ರಾಯವನ್ನು ಪಡೆದೇ ಸಿಬಿಐ ತನಿಖೆಗೆ ಆದೇಶ ಮಾಡಲಾಗಿತ್ತು ಇದರಲ್ಲಿ ಲೋಪವಾಗಿರುವುದು ಎಲ್ಲಿ ಎಂದು ಪ್ರಶ್ನಿಸಿದರು.
ಈಗ ಅಂದಿನ ಸರ್ಕಾರದ ಸಿಬಿಐ ತನಿಖೆ ನಡೆಸುವ ಆದೇಶವನ್ನು ಸಚಿವ ಸಂಪುಟ ಸಭೆಯಲ್ಲಿ ಹಿಂಪಡೆದಿರುವುದು ಸರಿಯಲ್ಲ ಎಂದರು.