ಬೆಂಗಳೂರು – ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (Kumaraswamy) ಕರೆಂಟ್ ಕಳ್ಳತನ ಮಾಡಿದ್ದಾರಾ.? ಇಂತಹದೊಂದು ಆರೋಪ ಇದೀಗ ಅವರ ಮೇಲೆ ಕೇಳಿಬಂದಿದೆ. ಬೆಳಕಿನ ಹಬ್ಬ ದೀಪಾವಳಿಯ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರ ಬೆಂಗಳೂರಿನ ಜೆ.ಪಿ ನಗರದಲ್ಲಿನ ನಿವಾಸಕ್ಕೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.
ಅವರ ಮನೆಗೆ ಮೀನುಗುವ ಎಲೆಕ್ಟ್ರಿಕಲ್ ದೀಪಗಳನ್ನು ಅಳವಡಿಸಿರುವ ಕಾರ್ಮಿಕರು ಅದಕ್ಕೆ ಬೇಕಾಗುವ ವಿದ್ಯುತ್ ಅನ್ನು ನೇರವಾಗಿ ವಿದ್ಯುತ್ ಕಂಬದಿಂದ ಪಡೆದುಕೊಂಡಿದ್ದಾರೆ.ಈ ರೀತಿಯಲ್ಲಿ ಕಂಬದಿಂದ ನೇರವಾಗಿ ವಿದ್ಯುತ್ ಸಂಪರ್ಕ ಪಡೆಯುವುದು ಕಾನೂನು ಬಾಹಿರ ಎಂದು ಘೋಷಿಸಲಾಗಿದೆ.
ಕುಮಾರಸ್ವಾಮಿ (Kumaraswamy) ಅವರ ನಿವಾಸಕ್ಕೆ ಈ ರೀತಿಯಲ್ಲಿ ವಿದ್ಯುತ್ ಸಂಪರ್ಕ ಪಡೆಯಲಾಗಿದೆ ಎಂಬ ಮಾಹಿತಿ ಬರುತ್ತಿದ್ದಂತೆ ಎಕ್ಸ್ ನಲ್ಲಿ ಟೀಕೆ ಹೇಳಿಕೆ ಪೋಸ್ಟ್ ಮಾಡಿರುವ ಕಾಂಗ್ರೆಸ್ ಜಗತ್ತಿನ ಏಕೈಕ ಮಹಾ ಪ್ರಾಮಾಣಿಕ ಹೆಚ್.ಡಿ ಕುಮಾರಸ್ವಾಮಿಯವರ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ ಎಂದು ಉಲ್ಲೇಖಿಸಿ,ಈ ಕುರಿತಾಸ ವಿಡಿಯೋ ಬಿಡುಗಡೆ ಮಾಡಿದೆ.
ಕುಮಾರಸ್ವಾಮಿ ಅವರೇ ನಮ್ಮ ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್ ಉಚಿತ ಕೊಡುತ್ತಿದೆಯೇ ಹೊರತು 2000 ಯೂನಿಟ್ ಅಲ್ಲ. ತಮಗೆ ಅಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹಜ್ಯೋತಿ ಯೋಜನೆಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ, ಒಹ್, ತಿಳಿದಿರಲಿಲ್ಲ ಗೃಹಜ್ಯೋತಿಯಲ್ಲಿ ಒಬ್ಬರಿಗೆ ಒಂದು ಮೀಟರ್ ಗೆ ಅವಕಾಶವಿದೆ, ತಮ್ಮ ಹೆಸರಲ್ಲಿ ಹಲವು ಮೀಟರ್ ಗಳಿವೆಯಲ್ಲವೇ ಎಂದು ವ್ಯಂಗ್ಯವಾಡಿದೆ.
ರಾಜ್ಯದ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ 7 ಗಂಟೆ ವಿದ್ಯುತ್ ಕೊಡುವ ಕ್ರಮ ಕೈಗೊಂಡಿದ್ದರೂ ಪುಂಖಾನುಪುಂಕವಾಗಿ ಮಾತಾನಾಡುವ ತಾವು ಇಂತಹ ಚೀಪ್ ಕಳ್ಳತನಕ್ಕೆ ಇಳಿಯುವಷ್ಟು “ಬರ” ಎದುರಿಸುತ್ತಿದ್ದೀರಾ? ಅದೇನೋ ಪತ್ರಿಕಾಗೋಷ್ಠಿ ನಡೆಸಿ “ಕರ್ನಾಟಕ ಕತ್ತಲಲ್ಲಿದೆ“ ಎನ್ನುತ್ತಾ ಬಡಬಡಿಸಿದ್ದಿರಲ್ಲವೇ, ಈಗ ಕದ್ದ ವಿದ್ಯುತ್ತಿನಲ್ಲಿ ನಿಮ್ಮ ಮನೆಗೆ ಬೆಳಕು ಮಾಡಿಕೊಂಡಿದ್ದೀರಿ, ನಿಮ್ಮ ಮನೆ ಹೀಗೆ ಜಗಮಗ ಹೊಳೆಯುತ್ತಿರುವಾಗ ಅದ್ಯಾವ ಬಾಯಲ್ಲಿ ಕರ್ನಾಟಕ ಕತ್ತಲಲ್ಲಿದೆ ಎನ್ನುವಿರಿ ಸ್ವಾಮಿ? ಎಂದು ಪ್ರಶ್ನಿಸಿದೆ.
ನಿಮ್ಮದೇ ಶೈಲಿಯ ಪ್ರಶ್ನೆ ಕೇಳಬೇಕೆಂದರೆ, ರಾಜ್ಯ ಬರ ಎದುರಿಸುತ್ತಿರುವಾಗ ನಿಮ್ಮ ಮನೆ ಮಾತ್ರ ಜಗಮಗಿಸಬೇಕೆ? ರೈತರ ಪಾಲಿನ ವಿದ್ಯುತ್ ಕಳ್ಳತನ ಮಾಡಿ ಮೋಜು ಮಾಡಬೇಕೆ? ನಿಮ್ಮ ಮನೆಯ ದೀಪಾವಳಿಗೆ ರಾಜ್ಯದ ಜನರ “ದಿವಾಳಿ”ಯನ್ನು ಬಯಸುತ್ತಿದ್ದೀರಾ? ವಿದ್ಯುತ್ತನ್ನೇ ಬಿಡದೆ ಲೂಟಿ ಮಾಡುವ ತಾವು ರಾಜ್ಯವನ್ನು ಇನ್ನೆಷ್ಟು ಲೂಟಿ ಮಾಡಿರಬಹುದು? ಎಂದು ಟೀಕಿಸಿದೆ.ಇದಾದ ಕೆಲ ಹೊತ್ತಿನಲ್ಲೇ ಕಾರ್ಯಾಚರಣೆಗಿಳಿದ ಬೆಸ್ಕಾಂ ಅಧಿಕಾರಿಗಳು ಅಕ್ರಮ ವಿದ್ಯುತ್ ಸಂಪರ್ಕ ಕುರಿತಾಗಿ ಕುಮಾರಸ್ವಾಮಿ ಅವರಿಗೆ ನೋಟೀಸ್ ನೀಡಿದೆ.
ಹರಿಶ್ಚಂದ್ರ ಅಲ್ಲ:
ಈ ಎಲ್ಲಾ ಬೆಳವಣಿಗೆಯ ನಡುವೆ ಎಕ್ಸ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ ನಾನೇನೂ ಹರಿಶ್ಚಂದ್ರ ಅಲ್ಲ.ತಮ್ಮ ಮನೆಯ ವಿದ್ಯುತ್ ದೀಪಾಲಂಕರಕ್ಕೆ ಕರೆಂಟ್ ಬಳಸುವ ವಿಷಯದಲ್ಲಿ ತಪ್ಪಾಗಿದೆ ಒಪ್ಪಿಕೊಳ್ಳುತ್ತೇನೆ.ಇದಕ್ಕಾಗಿ ನಿಯಮ ಪ್ರಕಾರ ವಿಧಿಸುವ ದಂಡ ಪಾವತಿಸುತ್ತೇನೆ ಎಂದು ಹೇಳಿದ್ದಾರೆ.
ನಾನೇನು ರಾಜ್ಯದ ಆಸ್ತಿ ಕಬಳಿಸಿಲ್ಲ. ಕಂಡವರ ಭೂಮಿಗೆ ಬೇಲಿ ಹಾಕಿಲ್ಲ. ಇನ್ನೊಬ್ಬರ ರಕ್ತ ಕುಡಿದು ಧನದಾಹ ತೀರಿಸಿಕೊಂಡಿಲ್ಲ. ಕುಮಾರಸ್ವಾಮಿ ವಿದ್ಯುತ್ ಕಳ್ಳತನ ಮಾಡಿದ್ದಾರೆ, ಬೆಸ್ಕಾಂ ಕ್ರಮ ಕೈಗೊಳ್ಳಲಿ ಎಂದು ಉಪ ಮುಖ್ಯಮಂತ್ರಿಗಳು ಹೇಳಿದ್ದಾರೆ. ನಾನು ಮನೆಯಲ್ಲೇ ಇದ್ದೇನೆ. ಬೆಸ್ಕಾಂ ಅಧಿಕಾರಿಗಳು ಬರಲಿ. ಅವರ ಯಾವುದೇ ಕ್ರಮಕ್ಕೆ ನಾನು ಸಿದ್ಧನಿದ್ದೇನೆ ಎಂದಿದ್ದಾರೆ.
ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ.ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ನೀಡಲಿ. ದಂಡ ಕಟ್ಟುತ್ತೇನೆ. ಇದನ್ನೇ ಕಾಂಗ್ರೆಸ್ ದೊಡ್ಡದು ಮಾಡಿ ಪ್ರಚಾರ ಗಿಟ್ಟಿಸುವ ಕೆಲಸ ಮಾಡುತ್ತಿದೆ. ಆ ಪಕ್ಷದ ಕ್ಷುಲ್ಲಕ ಮನಃಸ್ಥಿತಿಯ ಬಗ್ಗೆ ನನಗೆ ಮರುಕ ಇದೆ ಎಂದಿದ್ದಾರೆ.
ಸ್ವಾಗತಾರ್ಹ; ಈ ಘಟನೆ ಬಳಿಕ ಪ್ರತಿಕ್ರಿಯೆ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿದ್ಯುತ್ ಕಳ್ಳತನ ಒಪ್ಪಿಕೊಂಡ ಕುಮಾರಸ್ವಾಮಿಗೆ ಅಭಿನಂದನೆ: ಡಿಸಿಎಂ ಡಿ.ಕೆ.ಶಿವಕುಮಾರ್ ಅಚಾತುರ್ಯವೋ, ಕಳ್ಳತನವೋ ಒಟ್ಟಿನಲ್ಲಿ ವಿದ್ಯುತ್ ಕಳ್ಳತನದ ಬಗ್ಗೆ ಕುಮಾರಸ್ವಾಮಿ ಅವರು ಒಪ್ಪಿಕೊಂಡು, ದಂಡ ಕಟ್ಟುತ್ತೇನೆ ಎಂದು ಹೇಳಿರುವುದು ಅಭಿನಂದನೀಯ ಎಂದು ಹೇಳಿದರು.
ಕುಮಾರಸ್ವಾಮಿ ಮನೆಗೆ ವಿದ್ಯುತ್ ಕಳವು ವಿಚಾರವನ್ನು ಮಾಧ್ಯಮಗಳಲ್ಲಿ ಗಮನಿಸಿದೆ. ಅವರ ನೆರೆಹೊರೆಯವರೇ ಅಕ್ರಮ ವಿದ್ಯುತ್ ಸಂಪರ್ಕದ ವಿಡಿಯೋ ಮಾಡಿ ಮಾಧ್ಯಮಗಳಿಗೆ ನೀಡಿದ್ದಾರೆ. ಆನಂತರ ನಮ್ಮ ಪಕ್ಷದ ಸಾಮಾಜಿಕ ಜಾಲತಾಣ ಘಟಕ ಏನು ಕೆಲಸ ಮಾಡಬೇಕೊ ಅದನ್ನು ಮಾಡಿದೆ. ಅವರ ಪಕ್ಷದ ಸೋಶಿಯಲ್ ಮೀಡಿಯಾದಲ್ಲಿ ಬೇಕಾದಷ್ಟು ಬರೆದಂತೆ, ನಮ್ಮ ಪಕ್ಷದವರು ಏನು ಕೆಲಸ ಮಾಡಬೇಕೋ ಅದನ್ನು ಮಾಡಿದ್ದಾರೆ. ಅವರು ಮಾಡೋದನ್ನು ನೋಡಿಕೊಂಡು ಸುಮ್ಮನೆ ಕುಳಿತುಕೊಳ್ಳಲು ಆಗುತ್ತದೆಯೇ?” ಎಂದು ಮರುಪ್ರಶ್ನಿಸಿದರು.
ವಿದ್ಯುತ್ ಕಳ್ಳತನ ಮಾಡಬಾರದು, ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ನಮ್ಮಂತವವರೇ ಹೀಗೆ ಕಳವು ಮಾಡಿದರೆ ತಪ್ಪಲ್ಲವೇ? ಸಂಬಂಧಿಸಿದ ಇಲಾಖೆಯವರು ಏನು ಕ್ರಮ ತೆಗೆದುಕೊಳ್ಳುತ್ತಾರೋ ನೋಡೋಣ. ಈ ವಿಚಾರವಾಗಿ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ, ನಮಗೆ ಅದರ ಅವಶ್ಯಕತೆಯೂ ಇಲ್ಲ ಮತ್ತು ಸಮಯವೂ ಇಲ್ಲ. ಬೆಸ್ಕಾಂನವರು ಕ್ರಮ ತೆಗೆದುಕೊಳ್ಳುತ್ತಾರೆ” ಎಂದರು.