ರಾಜ ಬಿಜೆಪಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಇದೀಗ ಕುತೂಹಲಕರ ಘಟ್ಟ ತಲುಪಿವೆ. ಬಿಜೆಪಿ ಅಧ್ಯಕ್ಷ ವಿಜಯೇಂದ್ರ ನಾಯಕತ್ವದ ವಿರುದ್ಧ ಬಂಡಾಯ ಸಾರಿರುವ ನಾಯಕರು ಇದೀಗ ಸೆಪ್ಟೆಂಬರ್ 15 ರಿಂದ ಉತ್ತರ ಕರ್ನಾಟಕದಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ವರ್ಗಗಳ ಕಲ್ಯಾಣಕ್ಕೆ ಮೀಸಲಿಟ್ಟ ಹಣವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಮತ್ತು ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಈ ಪಾದಯಾತ್ರೆ ನಡೆಯಲಿದೆ.
ಸೆಪ್ಟೆಂಬರ್ 15ರಂದು ಕೂಡಲಸಂಗಮದಿಂದ ಆರಂಭವಾಗಲಿರುವ ಪಾದಯಾತ್ರೆ ಬಳ್ಳಾರಿಯಲ್ಲಿ ಅಂತ್ಯಗೊಳ್ಳಲಿದ್ದು ಮಾಜಿ ಸಂಸದರಾದ ಅಣ್ಣಾ ಸಾಹೇಬ್ ಜೊಲ್ಲೆ, ನಳಿನ್ ಕುಮಾರ್ ಕಟೀಲ್, ಪ್ರತಾಪ್ ಸಿಂಹ, ಜಿ.ಎಂ. ಸಿದ್ದೇಶ್ವರ್ ಮಾಜಿ ಸಚಿವರಾದ ಅರವಿಂದ ಲಿಂಬಾವಳಿ ರಮೇಶ್ ಜಾರಕಿಹೊಳಿ, ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಹಲವು ನಾಯಕರು ಈ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಎಲ್ಲ ಸಮಾನ ಮನಸ್ಕ ನಾಯಕರು ಮತ್ತು ಕಾರ್ಯಕರ್ತರು ಈ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲು ನಿರ್ಧರಿಸಿರುವ ಇವರು ಇದಕ್ಕೆ ಹೈಕಮಾಂಡ್ ಅನುಮತಿ ಪಡೆದುಕೊಳ್ಳಲು ಯತ್ನಾಳ್ ನೇತೃತ್ವದಲ್ಲಿ ಸೋಮವಾರ ನಿಯೋಗವೊಂದು ದೆಹಲಿಗೆ ತೆರಳಲಿದೆ.
ಈ ನಿಯೋಗ ಪಕ್ಷದ ಅಧ್ಯಕ್ಷ ಜೆ ಪಿ ನಡ್ಡಾ, ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ತಮ್ಮ ಪಾದಯಾತ್ರೆಯ ಉದ್ದೇಶವನ್ನು ವಿವರಿಸಲಿದೆ ಕರ್ನಾಟಕದಲ್ಲಿ ಪಕ್ಷದ ಅಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಕೂಡ ಗಮನಕ್ಕೆ ತರಲಿದೆ.