ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಪ್ರೇರಣೆ ನೀಡಿರುವ ಸಚಿವ ಈಶ್ವರಪ್ಪ ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ಸಮರ್ಥಿಸಿಕೊಳ್ಳುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಯ ರಕ್ಷಣೆಗೆ ಮುಂದಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಆಪಾದಿಸಿದ್ದಾರೆ.
ಆರೋಪಿತ ಈಶ್ವರಪ್ಪ ಬಂಧನವಾಗಲೇ ಬೇಕು ಅಲ್ಲಿಯವರೆಗೆ ವಿರಮಿಸುವ ಪ್ರಶ್ನೆಯೇ ಇಲ್ಲ. ಇದಕ್ಕಾಗಿ ಆಗ್ರಹಿಸಿ ನಾಳೆಯಿಂದ ಎಲ್ಲಾ ನಾಯಕರ ನೇತೃತ್ವದಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ತಿಳಿಸಿದರು.
ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ವಿಧಾನಸೌಧದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆಗೆ ಸಚಿವ ಈಶ್ವರಪ್ಪ ಹಾಗೂ ಅವರ ಆಪ್ತ ಸಹಾಯಕರ ಶೇ.40ರಷ್ಟು ಲಂಚದ ಕಿರುಕುಳವೇ ಕಾರಣ ಎಂಬುದಕ್ಕೆ ಸಾಕಷ್ಟು ಪುರಾವೆಗಳಿವೆ ಎಂದು ಹೇಳಿದರು.
ಪ್ರಕರಣದ ತನಿಖೆ ನಡೆಯುವ ಮುನ್ನವೇ ಮುಖ್ಯಮಂತ್ರಿ ಹೇಳಿಕೆ ನೀಡಿ, ಈಶ್ವರಪ್ಪ ಯಾವುದೇ ತಪ್ಪು ಮಾಡಿಲ್ಲ ಎಂದಿದ್ದಾರೆ. ಹೀಗಾಗಿ ಪೊಲೀಸರು ಈ ಪ್ರಕರಣದ ನ್ಯಾಯಯುತ ತನಿಖೆ ನಡೆಸಲು ಸಾಧ್ಯವಿಲ್ಲ ಎಂದರು.
ನಾವು ಈಶ್ವರಪ್ಪ ಅವರ ರಾಜೀನಾಮೆಗೆ ಒತ್ತಾಯ ಮಾಡುತ್ತಿಲ್ಲ. ಬೇರೆ ಪ್ರಕರಣಗಳಲ್ಲಿ ಹೇಗೆ ಕ್ರಮ ಕೈಗೊಂಡು ಕಾನೂನು ಪಾಲನೆ ಮಾಡಲಾಗುತ್ತದೆಯೋ ಅದೇ ರೀತಿ ಈ ಪ್ರಕರಣದಲ್ಲೂ ಕಾನೂನು ಪಾಲನೆ ಆಗಬೇಕು. ಸಚಿವ ಈಶ್ವರಪ್ಪ ಬಂಧನ ಆಗಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದರು