ಕಾವೇರಿ ನೀರು ದರ ಹೆಚ್ಚಳ ಎಷ್ಟು ಗೊತ್ತೆ.
Bengaluru, ಮಾ.14:
ರಾಜಧಾನಿ ಮಹಾನಗರ ಬೆಂಗಳೂರಿನ ಜನತೆಗೆ ದರ ಏರಿಕೆಯ ಹೊರಹಾಕಲು ವೇದಿಕೆ ಸಜ್ಜುಗೊಂಡಿದೆ. ಬೆಂಗಳೂರು ಜಲ ಮಂಡಳಿ ಪೂರೈಸುವ ಪ್ರತಿ ಲೀಟರ್ ನೀರಿಗೆ ಒಂದು ಪೈಸೆ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.
ವಿಧಾನ ಪರಿಷತ್ ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ರಾಮೋಜಿ ಗೌಡ ಮಾಡಿದ ಪ್ರಸ್ತಾವನೆಗೆ ಉತ್ತರಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಳೆದ 2014ರ ನಂತರ ಬೆಂಗಳೂರಿನಲ್ಲಿ ನೀರಿನ ದರ ಪರಿಷ್ಕರಣೆ ಮಾಡಿಲ್ಲ. ಹೀಗಾಗಿ ಬೆಂಗಳೂರು ಜಲ ಮಂಡಳಿ ಪ್ರತಿ ಲೀಟರ್ ನೀರಿಗೆ 7 ರಿಂದ 8 ಪೈಸೆ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದೆ.ಆದರೆ ಸರ್ಕಾರ
ಸದ್ಯಕ್ಕೆ 1 ಪೈಸೆಯಷ್ಟು ಮಾತ್ರ ಏರಿಕೆ ಮಾಡಲು
ಅನುಮತಿಸುವ ಬಗ್ಗೆ ಚಿಂತನೆ ನಡೆಸಿದ್ದು ಈ ಬಗ್ಗೆ ಬೆಂಗಳೂರಿನ ಶಾಸಕರ ಜೊತೆ ಚರ್ಚಿಸಿ ನಿರ್ಧಾರ ಪ್ರಕಟಿಸಲಾಗುವುದು ಎಂದು ಹೇಳಿದರು.
2014ರಿಂದ ಇಲ್ಲಿಯವರೆಗೂ ನೀರಿನ ದರ ಏರಿಕೆ ಮಾಡಿಲ್ಲ. ಹೀಗಾಗಿ ನಾವು ಕನಿಷ್ಠ ಪಕ್ಷ ಒಂದು ಪೈಸೆಯಾದರೂ ನೀರಿನ ದರ ಏರಿಕೆ ಮಾಡಲು ತೀರ್ಮಾನಿಸಿದ್ದೇವೆ. ಇದರಿಂದ ಮಂಡಳಿ ಪ್ರತಿ ವರ್ಷ ಅನುಭವಿಸುತ್ತಿರುವ ಸುಮಾರು 1 ಸಾವಿರ ಕೋಟಿ ನಷ್ಟವನ್ನು ತಪ್ಪಿಸಬಹುದಾಗಿದೆ. ಮಂಡಳಿಯ ವಿದ್ಯುತ್ ಬಿಲ್ ಏರಿಕೆಯಾಗುತ್ತಲೇ ಇದೆ. ಹೀಗಾಗಿ ಮಂಡಳಿಯವರು 7-8 ಪೈಸೆ ಏರಿಕೆಗೆ ಮುಂದಾಗಿದ್ದರು. ನಾನು ಸಧ್ಯಕ್ಕೆ 1 ಪೈಸೆಯಷ್ಟು ಮಾಡಿ ಸಾಕು ಎಂದು ಹೇಳಿದ್ದೇನೆ. ಪಾಲಿಕೆ ಬಜೆಟ್ ಕುರಿತ ಸಭೆ ವೇಳೆ ಬೆಂಗಳೂರಿನ ಶಾಸಕರನ್ನು ಕರೆದು ಸಭೆ ಮಾಡಿ ಚರ್ಚೆ ಮಾಡಲಾಗುವುದು” ಎಂದು ತಿಳಿಸಿದರು.
ಕಳೆದ ವರ್ಷ ಬೇಸಿಗೆಯಲ್ಲಿ ಬೆಂಗಳೂರಿನಲ್ಲಿ ಬಹಳ ಸಂಕಷ್ಟದ ಪರಿಸ್ಥಿತಿ ಎದುರಾಗಿತ್ತು. 7 ಸಾವಿರ ಕೊಳವೆಬಾವಿಗಳು ಬತ್ತಿದ್ದವು. ಹೀಗಾಗಿ ಖಾಸಗಿ ಟ್ಯಾಂಕರ್ ಗಳನ್ನು ಪಾಲಿಕೆ ಸುಪರ್ದಿಗೆ ತೆಗೆದುಕೊಳ್ಳಲಾಗಿತ್ತು ಆದರೆ ಈ ಬಾರಿ ಅಂತಹ ದುಸ್ಥಿತಿ ಬರುವ ಸಾಧ್ಯತೆ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾವೇರಿ 5ನೇ ಹಂತದ ಯೋಜನೆಯನ್ನು ಪೂರ್ಣಗೊಳಿಸಿ ನೀರನ್ನು ಹೊರ ತರಲಾಗಿದೆ. 110 ಹಳ್ಳಿಗಳಿಗೆ ನೀಡಲು ವ್ಯವಸ್ಥೆ ಮಾಡಲಾಗಿದೆ. ನಗರದಲ್ಲಿ ದೊಡ್ಡ ದೊಡ್ಡ ಅಪಾರ್ಟ್ ಮೆಂಟ್ ಗಳನ್ನು ಕಟ್ಟಿದ್ದು, ಯಾರೊಬ್ಬರೂ ಜಲಮಂಡಳಿಗೆ ನೀರಿನ ಸಂಪರ್ಕದ ಡೆಪಾಸಿಟ್ ಪಾವತಿ ಮಾಡಿಲ್ಲ. ಅನುಮತಿ ಪಡೆಯದೇ ಅಕ್ರಮವಾಗಿ ಸಂಪರ್ಕ ಪಡೆದಿದ್ದಾರೆ. ಅವರಿಗೆ ನೋಟೀಸ್ ನೀಡಲಾಗಿದೆ ಎಂದರು.
ನಗರ ಪ್ರದೇಶದಲ್ಲಿ ಅಂತರ್ಜಲ ಹೆಚ್ಚಳ ಮಾಡುವ ಉದ್ದೇಶದಿಂದ ಬತ್ತಿರುವ ಎಲ್ಲಾ ಕೆರೆಗಳಿಗೆ ನೀರು ತುಂಬಿಸಲು ಮುಂದಾಗಿದ್ದೇವೆ. ಖಾಸಗಿ ಟ್ಯಾಂಕರ್ ಗಳದ್ದು ದೊಡ್ಡ ದಂಧೆಯಾಗಿದೆ. ಹೀಗಾಗಿ ಇದಕ್ಕಾಗಿ ಕನಿಷ್ಠ ದರ ನಿಗದಿ ಮಾಡಲಾಗಿದೆ. ಎಲ್ಲಿ ತುರ್ತಾಗಿ ನೀರನ್ನು ಪೂರೈಸಬಹುದೋ ಅದಕ್ಕೆ ಕ್ರಮ ಕೈಗೊಳ್ಳಲಾಗುವುದು. ಇದರ ಜತೆಗೆ ಭವಿಷ್ಯದ ಉದ್ದೇಶದಿಂದ ಕಾವೇರಿ 6ನೇ ಹಂತದ ಕುಡಿಯುವ ನೀರಿನ ಯೋಜನೆಗೆ ಪ್ಲಾನ್ ಸಿದ್ಧವಾಗಿದ್ದು, ಅದನ್ನು ಸಚಿವ ಸಂಪುಟದ ಮುಂದೆ ಪ್ರಸ್ತಾಪಿಸಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲಾಗುವುದು.
ಎಂದು ವಿವರಿಸಿದರು.