ಬೆಂಗಳೂರು: ರಾಜ್ಯದ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕುರಿತು ಚರ್ಚೆ ನಡೆಸಲು ರಾಜ್ಯ ಸರ್ಕಾರವು ಸೆಪ್ಟೆಂಬರ್ 16ರಂದು ವಿಶೇಷ ಸಭೆ ಕರೆದಿದೆ.
ವಿಶೇಷ ಸಭೆ ಸಂಬಂಧಿಸಿದಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಸಭಾ ಸೂಚನಾ ಪತ್ರವನ್ನು ಹೊರಡಿಸಿದ್ದಾರೆ.
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸೆ.16 ಮಧ್ಯಾಹ್ನ 3 ಗಂಟೆಗೆ ಬಹುಮಹಡಿಗಳ ಕಟ್ಟಡದ ಮೂರನೇ ಮಹಡಿಯ ಕೊಠಡಿ ಸಂಖ್ಯೆ 331ರಲ್ಲಿ ಸಭೆ ನಡೆಯಲಿದೆ. ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕುರಿತು ಚರ್ಚಿಸಲು ಸಭೆಯನ್ನು ಏರ್ಪಡಿಸಲಾಗಿದೆ.
ಈ ಸಭೆಗೆ ಅಗತ್ಯ ಮಾಹಿತಿ ಅಥವಾ ದಾಖಲೆಗಳೊಂದಿಗೆ ಹಾಜರಾಗುವಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ನಿರ್ದೇಶಕರು, ರಾಜ್ಯ ಬುಡಕಟ್ಟು ಸಂಸೋಧನಾ ಸಂಸ್ಥೆ ನಿರ್ದೇಶಕರು, ಎಸ್‌ಸಿಎಸ್‌ಪಿ/ಟಿಎಸ್‌ಪಿ ನೋಡಲ್ ಏಜೆನ್ಸಿ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಕೇಂದ್ರಕ್ಕೆ ಶಿಫಾರಸು:
ಕುರುಬ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸಲು 2023ರಲ್ಲಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಿತ್ತು. ಮೈಸೂರು, ಚಾಮರಾಜನಗರ ಜಿಲ್ಲೆಯ ಕೆಲವು ಭಾಗಗಳಲ್ಲಿ ವಾಸಿಸುತ್ತಿರುವ ಕಾಡು ಕುರುಬರು, ಜೇನು ಕುರುಬರು ಎಸ್‌ಟಿ ಮೀಸಲಾತಿಯ ಸೌಲಭ್ಯ ಪಡೆಯುತ್ತಿದ್ದಾರೆ. ಉಳಿದ ಕುರುಬ ಸಮುದಾಯ ಪ್ರಸ್ತುತ ರಾಜ್ಯದ 2 ‘ಎ’ ಪಟ್ಟಿಯಲ್ಲಿದೆ. ಹೀಗಾಗಿ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಬೇಕು ಎಂದು ಶಿಫಾರಸು ಮಾಡಲಾಗಿತ್ತು.

