ಬೆಂಗಳೂರು,ಜ.15-
ರಾಜ್ಯ ಕಾಂಗ್ರೆಸ್ಸಿನಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಕುತೂಹಲ ಮೂಡಿಸಿದ್ದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನೂತನ ಸಾರಥಿ ನೇಮಕ ಮಾಡಬೇಕು ಎಂಬ ಅಗ್ರಹ ಕೇಳಿಬಂದಿದೆ.
ಬೆಳಗಾವಿಯಲ್ಲಿ ನಡೆಯುತ್ತಿರುವ ಜೈ ಬಾಪು, ಜೈ ಸಂವಿಧಾನ ಸಮಾವೇಶ ಮುಗಿಯುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷರ ಸ್ಥಾನ ಕೂಡ ಬದಲಾಗಲಿದೆ ಎಂದು ಹೇಳಲಾಗುತ್ತಿದೆ.
ಉಪ ಮುಖ್ಯಮಂತ್ರಿಯಾಗಿರುವ ಡಿಕೆ ಶಿವಕುಮಾರ್ ಸುದೀರ್ಘ ಅವಧಿಯಿಂದ ಕೆಪಿಸಿಸಿ ಅಧ್ಯಕ್ಷರಾಗಿದ್ದು ಅವರ ಸ್ಥಾನಕ್ಕೆ ಹೊಸಬರ ನೇಮಕ ಕುರಿತು ಚರ್ಚೆ ಆರಂಭಗೊಂಡಿದೆ.
ಸದ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ Electionಗಳು ನಡೆಯಲಿದ್ದು ಅದಕ್ಕೆ ಮೊದಲೇ ಕೆಪಿಸಿಸಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಪಕ್ಷವನ್ನು ಚುನಾವಣೆಗೆ ಸಜ್ಜುಗೊಳಿಸಬೇಕು ಎಂದು ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದೆ.
ಈ ಬಾರಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಉತ್ತರ ಕರ್ನಾಟಕಕ್ಕೆ ಸೇರಿದ ಪ್ರಭಾವಿ ಲಿಂಗಾಯತ ಸಮುದಾಯಕ್ಕೆ ನೀಡಬೇಕು ಎಂದು ಹೈಕಮಾಂಡ್ ಚಿಂತನೆ ನಡೆಸಿದ್ದು ಇದಕ್ಕಾಗಿ ಸಚಿವರಾದ ಎಂ.ಬಿ. ಪಾಟೀಲ್, ಈಶ್ವರ ಖಂಡ್ರೆ ಮತ್ತು ಮಾಜಿ ಸಚಿವ ಅಪ್ಪಾಜಿ ನಾಡಗೌಡ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿದೆ.
ಹೈಕಮಾಂಡ್ ಸೂಚನೆಯ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ನೂತನ ಕೆಪಿಸಿಸಿ ಅಧ್ಯಕ್ಷರ ನೇಮಕಾತಿ ಕುರಿತಂತೆ ತಮ್ಮ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ತಮ್ಮ ಆಪ್ತರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.ಈ ವೇಳೆ ಈಶ್ವರ ಖಂಡ್ರೆ ಮತ್ತು ಎಂಬಿ ಪಾಟೀಲ್ ಪರವಾಗಿ ಹೆಚ್ಚಿನ ಒಲವು ವ್ಯಕ್ತವಾಗಿದೆ ಆದರೆ ಈ ಇಬ್ಬರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಮಂತ್ರಿ ಸ್ಥಾನವನ್ನು ನಿಭಾಯಿಸುವುದಾಗಿ ಹೇಳುತ್ತಿದ್ದಾರೆ.
ಆದರೆ,ಹೈಕಮಾಂಡ್ ಪಕ್ಷದಲ್ಲಿ ಒಬ್ಬರಿಗೆ ಒಂದೇ ಹುದ್ದೆ ಎಂಬ ತತ್ವವನ್ನು ಕಟ್ಟುನಿಟ್ಟಾಗಿ ಪಾಲಿಸಲು ಮುಂದಾಗಿರುವ ಹಿನ್ನೆಲೆಯಲ್ಲಿ ಈ ಇಬ್ಬರಲ್ಲಿ ಯಾರಾದರೂ ಅಧ್ಯಕ್ಷ ಸ್ಥಾನ ಒಪ್ಪಿಕೊಂಡಲ್ಲಿ ಅವರು ಮಂತ್ರಿ ಸ್ಥಾನ ತೊರೆಯಬೇಕಾಗುತ್ತದೆ ಎಂದು ಸ್ಪಷ್ಟವಾಗಿ ಹೇಳಿದೆ.ಆದರೆ ಇಬ್ಬರೂ ಅದಕ್ಕೆ ಸಿದ್ದರಿಲ್ಲ ಎಂದು ಹೇಳಲಾಗಿದೆ.
ಹೀಗಾಗಿ ಸದ್ಯ ಕರ್ನಾಟಕ ಸೋಪು ಮತ್ತು ಡಿಟರ್ಜೆಂಟ್ ಕಾರ್ಖಾನೆ ಅಧ್ಯಕ್ಷರಾಗಿರುವ ಅಪ್ಪಾಜಿ ನಾಡಗೌಡ ಅವರನ್ನು ಈ ಸ್ಥಾನಕ್ಕೆ ನೇಮಕ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಲವು ಹೊಂದಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಕಿತ್ತೂರು ಕರ್ನಾಟಕ ಪ್ರದೇಶಕ್ಕೆ ಸೇರಿರುವ ಅಪ್ಪಾಜಿ ನಾಡಗೌಡ ಅವರು ಅತ್ಯಂತ ಹಿರಿಯರಾಗಿದ್ದಾರೆ ಮಾಜಿ ಮಂತ್ರಿಯು ಆಗಿದ್ದು ಮೆಕಾನಿಕಲ್ ಇಂಜಿನಿಯರ್ ಪದವೀಧರನಾಗಿದ್ದಾರೆ. ಪಕ್ಷದಲ್ಲಿ ಹಲವಾರು ಹುದ್ದೆಗಳನ್ನು ನಿಭಾಯಿಸಿರುವ ಇವರನ್ನು ಪಕ್ಷದ ನೂತನ ಸಾರಥಿ ಯನ್ನಾಗಿ ನೇಮಕ ಮಾಡಿದರೆ ಉತ್ತಮ ಎಂಬ ಸಂದೇಶವನ್ನು ಹೈಕಮಾಂಡ್ ಗೆ ರವಾನಿಸಿರುವುದಾಗಿ ತಿಳಿದು ಬಂದಿದೆ.
Previous Articleಮುಡಾ ಹಗರಣ -ಕೋರ್ಟ್ ನಲ್ಲೇನಾಯಿತು ಗೊತ್ತಾ
Next Article ರಮೇಶ್ ಜಾರಕಿಹೊಳಿಗೆ ವಿಜಯೇಂದ್ರ ಎಚ್ಚರಿಕೆ