ಬೆಂಗಳೂರು,ಜೂ.28-
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಪ್ರಕರಣವನ್ನು ರಾಜಕೀಯಕ್ಕೆ ಬಳಸಿರುವ ಪ್ರತಿಪಕ್ಷ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಸಮರ ಘೋಷಣೆ ಮಾಡಿದೆ.
ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಜವಾಬ್ದಾರಿ ಹೊರಬೇಕು ಹಾಗೂ ಸಚಿವ ಶರಣ ಪ್ರಕಾಶ್ ಪಾಟೀಲ್, ನಿಗಮದ ಅಧ್ಯಕ್ಷ ಬಸವರಾಜ್ ದದ್ದಲ್ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಇಂದು ರಾಜ್ಯಾದ್ಯಂತ ಎಲ್ಲ ಜಿಲ್ಲಾಧಿಕಾರಿಗಳ ಕಚೇರಿ ಮುತ್ತಿಗೆ ಕಾರ್ಯಕ್ರಮ ನಡೆಸಿದ್ದು, ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಚಿತ್ರದುರ್ಗದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರೆ ಕೋಲಾರದಲ್ಲಿ ಪ್ರತಿಪಕ್ಷ ನಾಯಕ ಆರ್ ಅಶೋಕ್ ನೇತ್ರತ್ವದಲ್ಲಿ ಕಾರ್ಯಕರ್ತರು ಹೋರಾಟ ನಡೆದರು.
ಹೋರಾಟದ ಬಗ್ಗೆ ಮಾಹಿತಿ ನೀಡಿದ ವಿಜಯೇಂದ್ರ ಅವರು, ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವರಾಗಿದ್ದ ನಾಗೇಂದ್ರ ರಾಜೀನಾಮೆ ಕೊಟ್ಟಿದ್ದಾರೆ ಸರಿ. ಆದರೆ ಪ್ರಕರಣ ಇಲ್ಲಿಗೆ ಮುಗಿದಿಲ್ಲ. ಅಧಿಕಾರಿಗಳ ಮೇಲೆ ಆರೋಪ ಹಾಕಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತೇಪೆ ಹಾಕಲು ಹೊರಟ್ಟಿದ್ದಾರೆ ಎಂದು ಆಪಾದಿಸಿದರು
ಈ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಜವಾಬ್ದಾರಿ ಹೊರಬೇಕು. ಹಾಗೆಯೇ ಸಚಿವರಾದ ಶರಣ ಪ್ರಕಾಶ್ ಪಾಟೀಲ್, ನಿಗಮದ ಅಧ್ಯಕ್ಷ ಬಸವರಾಜ ದದ್ದಲ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಈ ಹಗರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಎಸ್‌ಐಟಿ ಮಾಜಿ ಸಚಿವ ನಾಗೇಂದ್ರ ಅವರನ್ನು ಕರೆದು ವಿಚಾರಣೆ ಮಾಡುವ ಧೈರ್ಯ ತೋರಿಲ್ಲ. ನಾಗೇಂದ್ರ ಆಪ್ತರ ಬಗ್ಗೆ ಆರೋಪಿಯಾಗಿರುವ ಸತ್ಯನಾರಾಯಣ ವರ್ಮ ಮಾಡಿರುವ ಆರೋಪ ಗಂಭೀರವಾದದ್ದು. ಈ ಬಗ್ಗೆ ನ್ಯಾಯಾಲಯವೂ ಸರ್ಕಾರಕ್ಕೆ ಛೀಮಾರಿ ಹಾಕಿದೆ ಎಂದು ಅವರು ಹೇಳಿದರು.
ಸಿಎಂ ರಾಜಿನಾಮೆ:
ಕೋಲಾರದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರತಿ ಪಕ್ಷ ನಾಯಕ ಆರ್ ಅಶೋಕ,ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭಾಗಿಯಾಗಿದ್ದು, ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ನಿಗಮದಲ್ಲಿ ಸಚಿವ ಬಿ.ನಾಗೇಂದ್ರ 20% ತಿಂದಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ 80% ತಿಂದಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಈ ಕುರಿತು ಸದನದಲ್ಲೂ ಆಗ್ರಹಿಸುತ್ತೇವೆ. ಸಿಎಂ ರಾಜೀನಾಮೆ ನೀಡುವವರೆಗೂ ಹೋರಾಡುತ್ತೇವೆ ಎಂದು ತಿಳಿಸಿದರು.
ಕಾಂಗ್ರೆಸ್ ಸರ್ಕಾರ ಉಚಿತಗಳ ಹೆಸರಲ್ಲಿ ಬೆಲೆ ಏರಿಕೆ ಮಾಡಿದೆ. ಹಾಲಿನ ಬೆಲೆ ಏರಿಕೆ ಮಾಡಿದ್ದು ಏಕೆ ಎಂದು ಪ್ರಶ್ನೆ ಮಾಡಿದರೆ ಹೆಚ್ಚು ಹಾಲು ನೀಡಿದ್ದೇವೆ ಎನ್ನುತ್ತಾರೆ. ಆದರೆ ಹೆಚ್ಚಾದ ಹಣವನ್ನು ರೈತರಿಗೆ ಕೊಡುವುದಿಲ್ಲ. ಬಡವರು ಕೂಲಿ ಮಾಡಿ ದುಡಿದು ಮದ್ಯ ಸೇವಿಸಲು ಹೋದರೆ ಅದಕ್ಕೂ ದರ ಏರಿಕೆ ಮಾಡಿದ್ದಾರೆ. ಶ್ರೀಮಂತರು ಕುಡಿಯುವ ಮದ್ಯದ ದರವನ್ನು ಇಳಿಕೆ ಮಾಡಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ನಡೆಯುತ್ತಿಲ್ಲ. ಆದರೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಮಾತ್ರ ಅಭಿವೃದ್ಧಿಯಾಗುತ್ತಿದ್ದಾರೆ ಎಂದು ಆಪಾದಿಸಿದರು.
ರೈತರಿಗೆ 800 ಕೋಟಿ ರೂ. ಹಾಲಿನ ಪ್ರೋತ್ಸಾಹಧನ ನೀಡಬೇಕಿದೆ. ರೈತರು ಬರ ಪರಿಹಾರ, ಪ್ರೋತ್ಸಾಹಧನ ಇಲ್ಲದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸರ್ಕಾರಕ್ಕೆ ಕುಡಿಯುವ ನೀರು ಕೊಡಲು ಕೂಡ ಯೋಗ್ಯತೆ ಇಲ್ಲದೆ ಕಲುಷಿತ ನೀರು ಕುಡಿದು ಜನರು ಸತ್ತಿದ್ದಾರೆ. ಡೆಂಘೀ ರೋಗ ಹರಡುತ್ತಿದ್ದು, ಅದಕ್ಕೆ ಚಿಕಿತ್ಸೆ ನೀಡಲು ಸರ್ಕಾರದ ಬಳಿ ಹಣವಿಲ್ಲ.ಮುಂದಿನ ಸ್ಥಳೀಯ ಸಂಸ್ಥೆಗಳ Electionಯಲ್ಲಿ ಜನರು ಕಾಂಗ್ರೆಸ್‌ಗೆ ಬುದ್ಧಿ ಕಲಿಸಬೇಕು ಎಂದರು.
Previous Articleನಿವೃತ್ತ ನೌಕರರಿಗೆ ರಾಮಲಿಂಗಾರೆಡ್ಡಿ ಬಂಪರ್ ಕೊಡುಗೆ.
Next Article ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಬೀಗ.