ಬೆಂಗಳೂರು,ಆ.1-
ವರುಣನ ಆರ್ಭಟದಿಂದ ನಲುಗಿರುವ ಬೆಳಗಾವಿ ಉಡುಪಿ ಕಾರವಾರ ಬಾಗಲಕೋಟೆ ಸೇರಿದಂತೆ ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಇನ್ನೂ ಆರು ದಿನ ಬಾರಿ ಮಳೆಯಾಗುವ ಸಾಧ್ಯತೆ ಇದೆ
ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಗಳಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಹಲವು ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಮಂಗಳೂರು, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಬೀದರ್, ಧಾರವಾಡ, ಗದಗ, ಹಾವೇರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು, ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲೂ ಕೂಡ ಮಳೆಯಾಗಲಿದ್ದು ಯಲ್ಲೋ ಅಲರ್ಟ್ ನೀಡಲಾಗಿದೆ.
ರಾಜ್ಯದ ಬಹುತೇಕ ಜಲಾಶಯಗಳು ತುಂಬಿ ತುಳುಕುತ್ತಿದ್ದು, ಭಾರೀ ಪ್ರಮಾಣದಲ್ಲಿ ನೀರನ್ನು ಹೊರ ಬಿಡುತ್ತಿರುವುದರಿಂದ ನದಿ ಪಾತ್ರದಲ್ಲಿ ಪ್ರವಾಹ ಉಂಟಾಗಿದೆ. ಹೊಲ- ಗದ್ದೆಗಳು ಜಲಾವೃತಗೊಂಡಿವೆ. ಭತ್ತ, ಕಬ್ಬು, ಈರುಳ್ಳಿ, ಮೆಣಸಿನಕಾಯಿ, ಹೆಸರುಕಾಳು ಸೇರಿದಂತೆ ವಿವಿಧ ಬೆಳೆಗಳು ನೀರಿನಲ್ಲಿ ಮುಳುಗಿ ಹೋಗಿವೆ.
ಉತ್ತರ ಕನ್ನಡ, ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ತಡರಾತ್ರಿಯವರೆಗೆ ಮಳೆ ಸುರಿದ ಪರಿಣಾಮ ಹಲವೆಡೆ ತಗ್ಗುಪ್ರದೇಶಗಳಿಗೆ ನೀರು ನುಗ್ಗಿ ಜನರು ಜಾಗರಣೆ ಮಾಡುವಂತಾಗಿದೆ. ಉತ್ತರ ಕನ್ನಡ ಜಿಲ್ಲಾಧ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮಲೆನಾಡು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಹಲವೆಡೆ ಮಣ್ಣು ಕುಸಿದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ವಣಗೆರೆಯಲ್ಲೂ ಕೂಡ ಮಳೆ ಆರ್ಭಟ ಮುಂದುವರೆದಿದೆ. ಜೀವನಡಿ ತುಂಗಭದ್ರಾ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಹರಿಹರ ಹಾಗೂ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಕೆಲ ಗ್ರಾಮಗಳ ಸೇತುವೆಗಳು ಜಲಾವೃತಗೊಂಡು ಸಂಪರ್ಕ ಕಡಿತಗೊಂಡಿವೆ
Previous Articleಅತಿಯಾದ ವೇಗದಲ್ಲಿ ಕಾರು ಚಲಾಯಿಸಿದರೆ ಅಷ್ಟೇ..
Next Article ರಾಜ್ಯದಲ್ಲಿ ಬಿಜೆಪಿ ಒಡೆದಮನೆಯಾಗಿದೆಯಂತೆ.