ಬೆಂಗಳೂರು,
ನಿವೇಶನ ಹಂಚಿಕೆ ಅಕ್ರಮ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಇದೀಗ ರಾಜ್ಯ ಸರ್ಕಾರದೊಂದಿಗೆ ಸಂಘರ್ಷಕ್ಕೆ ಇಳಿದಿದ್ದಾರೆ.
ರಾಜ್ಯ ಸರ್ಕಾರ ವಿಧಾನ ಮಂಡಲದ ಉಭಯ ಸದನಗಳಲ್ಲಿ ಅನುಮೋದಿಸಿ ಅಂಕಿತ ಹಾಕಲು ಕಳುಹಿಸಿದ್ದ 11 ಮಸೂದೆಗಳಿಗೆ ಸಹಿ ಹಾಕಲು ನಿರಾಕರಿಸಿ ವಿವಿಧ ರೀತಿಯ ಸ್ಪಷ್ಟನೆಗಳನ್ನು ಕೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಒಂದೂವರ ವರ್ಷಗಳ ನಂತರದಲ್ಲಿ ಇದೆ ಮೊದಲ ಬಾರಿಗೆ ರಾಜ್ಯ ಸರ್ಕಾರ ಮತ್ತು ರಾಜಭವನದ ನಡುವೆ ನೇರ ಸಂಘರ್ಷ ಏರ್ಪಟ್ಟಿದೆ.
ಪರೀಕ್ಷೆಗಳಲ್ಲಿ ಅಕ್ರಮ ತಡೆಗಟ್ಟುವಿಕೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆದಾಯ ಆದಾಯ ಹೆಚ್ಚಳಕ್ಕೆ ಅವಕಾಶ ಉಪನೋಂದಣಿ ಕಚೇರಿಗಳಲ್ಲಿ ಜನ ದಟ್ಟಣೆ ಕಡಿಮೆ ಮಾಡಲು ಇ- ನೊಂದಣಿಗೆ ಅವಕಾಶ ನೀಡುವ ಮಸೂದೆಗಳನ್ನು ಕೂಡ ವಾಪಸ್ ಕಳುಹಿಸಿರುವುದು ಅಚ್ಚರಿ ಮೂಡಿಸಿದೆ.
ರಾಜ್ಯಪಾಲರು ಒಟ್ಟಾರೆಯಾಗಿ 11 ಮಸೂದೆಗಳನ್ನು ಸ್ಪಷ್ಟನೆ ಕೇಳಿ ರಾಜ್ಯ ಸರ್ಕಾರಕ್ಕೆ ಹಿಂತಿರುಗಿಸಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ.
ರಾಜ್ಯಪಾಲರು ಕರ್ನಾಟಕ ಪಬ್ಲಿಕ್ ಎಕ್ಸಾಮಿನೇಷನ್ (ನೇಮಕಾತಿಯಲ್ಲಿ ಭ್ರಷ್ಟಾಚಾರ ಮತ್ತು ಅನ್ಯಾಯದ ವಿಧಾನ ತಡೆಗಟ್ಟುವಿಕೆ ಕ್ರಮಗಳು) ವಿಧೇಯಕ 2023,ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ,
ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ಮಸೂದೆ, 2024
ಉಪ-ನೋಂದಣಿ ಕಚೇರಿಗಳಲ್ಲಿ ಜನಸಂದಣಿಯನ್ನು ಕಡಿಮೆ ಮಾಡಲು ಸರ್ಕಾರವು ಇ-ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆ, 2024
ಕರ್ನಾಟಕ ಪುರಸಭೆಗಳು ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ಮಸೂದೆ, 2024:
ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಮಸೂದೆ 2024
ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ಮಸೂದೆ 2024,ಕರ್ನಾಟಕ ವಿಧಾನಮಂಡಲ (ಅನರ್ಹತೆ ನಿವಾರಣಾ) (ತಿದ್ದುಪಡಿ) ಮಸೂದೆ 2024 ಮತ್ತು ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ 2024 ಕ್ಕೆ ಅಂಕಿತ ಹಾಕಲು ನಿರಾಕರಿಸಿ ಸ್ಪಷ್ಟನೆ ಕೇಳಿ ರಾಜ್ಯ ಸರ್ಕಾರಕ್ಕೆ ಕಳುಹಿಸಿದ್ದಾರೆ