ಬೆಂಗಳೂರು,ಆ.21-
ರಾಜ್ಯದ ಪರಿಶಿಷ್ಟ ಸಮುದಾಯಗಳ ಬಹುದಿನದ ಬೇಡಿಕೆಯಾದ ಒಳ ಮೀಸಲಾತಿಯನ್ನು ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು ಎಡ ಮತ್ತು ಬಲ ವರ್ಗಕ್ಕೆ ಸೇರಿದ ಅಸ್ಪೃಶ್ಯ ಸಮುದಾಯಗಳಿಗೆ ಶೇಕಡ 6 ಮತ್ತು ಸ್ಪರ್ಶ್ಯ ಸಮುದಾಯಗಳಿಗೆ ಶೇಕಡ ಐದರಷ್ಟು ಮೀಸಲಾತಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಪರಿಶಿಷ್ಟ ಸಮುದಾಯಗಳಿಗೆ ಒಳ ಮೀಸಲಾತಿಭ ನೀಡುವ ಸಂಬಂಧ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ರಚಿಸಿದ್ದ ಆಯೋಗ ನೀಡಿದ ವರದಿಯನ್ನು ಆಧರಿಸಿ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ವಿಧಾನಸಭೆಯಲ್ಲಿ ಪ್ರಕಟಿಸಿದರು.
ಈ ತೀರ್ಮಾನ ಕೈಗೊಳ್ಳುವ ಮೂಲಕ ರಾಜ್ಯ ಸರ್ಕಾರ ಪರಿಶಿಷ್ಟ ಸಮುದಾಯದವರಿಗೆ ದೊಡ್ಡ ಕೊಡುಗೆ ನೀಡಿದೆ ಹಾಗೆಯೇ ಈ ಕಾರಣಕ್ಕೆ ಸ್ಥಗಿತಗೊಂಡಿದ್ದ ಸರ್ಕಾರಿ ಹುದ್ದೆಗಳ ನೇಮಕಾತಿ ಮತ್ತು ಮುಂಬಡ್ತಿ ನೀಡುವ ಪ್ರಕ್ರಿಯೆಗೆ ತಕ್ಷಣವೇ ಚಾಲನೆ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾದರಿಯಲ್ಲಿ ಪರಿಶಿಷ್ಟ ಜಾತಿಗಳಿಗೆ ಮೀಸಲಾತಿ ನೀಡುವ ಕುರಿತಂತೆ ತೀರ್ಮಾನ ಕೈಗೊಳ್ಳಲು ಸುಪ್ರೀಂಕೋರ್ಟ್ ಮಾರ್ಗಸೂಚಿಯ ಅನುಸಾರ ಶಾಶ್ವತ ಆಯೋಗ ರಚಿಸಲು ನಿರ್ಧರಿಸಲಾಯಿತು ಎಂದು ಹೇಳಿದರು.
ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದಲ್ಲಿ ಪರಿಶಿಷ್ಟ ಜಾತಿಗಳ ಉಪವರ್ಗೀಕರಣ ಮಾಡುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಸಾಂವಿಧಾನಿಕವಾಗಿ ದತ್ತವಾಗಿದೆ ಎಂದು ಸ್ಪಷ್ಟವಾಗಿ ಹೇಳಿದೆ. ಸಂವಿಧಾನದ ಅನುಚ್ಚೇದ 14, 15 ಮತ್ತು 16 ರಲ್ಲಿ ತಿಳಿಯಪಡಿಸಿರುವ ಸಮಾನತೆಯ ತತ್ವಕ್ಕೆ ಯಾವುದೇ ಚ್ಯುತಿ ಬಾರದಂತೆ ಅದರ ಮೂಲ ಆಶಯವನ್ನು ಸದೃಢಗೊಳಿಸುವ ದೃಷ್ಟಿಯಿಂದ ಒಳ ಮೀಸಲಾತಿ ವ್ಯವಸ್ಥೆ ಕಲ್ಪಿಸಬಹುದು ಎಂದು ಆದೇಶಿಸಿದೆ.
ಈ ಹಿನ್ನೆಲೆಯಲ್ಲಿ ಸರ್ಕಾರ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್‌ದಾಸ್ ಅವರ ಏಕ ಸದಸ್ಯ ಆಯೋಗ ರಚಿಸಿತು.ಈ ಆಯೋಗ ರಾಜ್ಯದ 101 ಪರಿಶಿಷ್ಟ ಜಾತಿಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿ ವರದಿಯನ್ನು ಸಲ್ಲಿಸಿದೆ ಆಯೋಗವು ಪರಿಶಿಷ್ಟ ಜಾತಿಗಳಿಗೆ ಸೇರಿದ 1,05,09,871 ಜನರ ದತ್ತಾಂಶಗಳನ್ನು ಸಂಗ್ರಹಿಸಿದೆ. ಶೇ.93 ರಷ್ಟು ಪರಿಶಿಷ್ಟ ಜಾತಿಗಳ ಜನಸಂಖ್ಯೆಯು ಈ ಸಮೀಕ್ಷೆಗೆ ಲಭ್ಯವಾಗಿದೆ. ಈ ವರದಿಯನ್ನು ಕೂಲಂಕಶವಾಗಿ ಪರಿಶೀಲಿಸಿತು ಎಂದು ವಿವರಿಸಿದರು.
ಸಂಪುಟ ಸದಸ್ಯರ ಸರ್ವಾನುಮತದ ತೀರ್ಮಾನದೊಂದಿಗೆ ಆಯೋಗದ ಶಿಫಾರಸಿಗೆ ಕೆಲವು ಮಾರ್ಪಾಟುಗಳನ್ನು ಮಾಡಲಾಯಿತು.
ಅದರಂತೆ ಎಡಗೈ ಸಂಬ0ಧಿತ ಜಾತಿಗಳೆಂದು ಆಯೋಗವು ಗುರ್ತಿಸಿರುವ ಸಮುದಾಯಗಳಿಗೆ ಶೇ.6 ರಷ್ಟು ಒಳಮೀಸಲಾತಿ ಕಲ್ಪಿಸಲು ತೀರ್ಮಾನಿಸಲಾಗಿದೆ.
ಆಯೋಗವು ಪರಯ, ಮೊಗೇರ ಮುಂತಾದ ಬಲಗೈ ಸಂಬ0ಧಿತ ಜಾತಿಗಳನ್ನು ಎಡಗೈ ಸಂಬ0ಧಿತ ಜಾತಿಗಳ ಜೊತೆ ಸೇರಿಸಲಾಗಿದೆ ಎಂಬುದನ್ನು ಗಮನಿಸಿದ ಸಚಿವ ಸಂಪುಟವು ಈ ಜಾತಿಗಳನ್ನು ಬಲಗೈ ಸಂಬ0ಧಿತ ಜಾತಿಗಳ ಜೊತೆ ಸೇರಿಸಿ ಬಲಗೈ ಸಂಬ0ಧಿತ ಜಾತಿಗಳ ಸಮೂಹಕ್ಕೆ ಶೇ.6 ರಷ್ಟು ಮೀಸಲಾತಿ ಕಲ್ಪಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಇದರ ಜೊತೆಯಲ್ಲಿ ಆದಿ ಕರ್ನಾಟಕ, ಆದಿ ಆಂಧ್ರ, ಆದಿ ದ್ರಾವಿಡ ಗುಂಪುಗಳಲ್ಲಿನ 4,74,954 ಜನಸಂಖ್ಯೆಯನ್ನು ಎಡಗೈ ಸಂಬ0ಧಿತ ಮತ್ತು ಬಲಗೈ ಸಂಬ0ಧಿತ ಜಾತಿಗಳ ಜೊತೆ ಸಮಾನವಾಗಿ ಹಂಚಿಕೆ ಮಾಡಲು ತೀರ್ಮಾನಿಸಿದ್ದೇವೆ ಎಂದರು.
ಸ್ಪೃಶ್ಯ ಜಾತಿಗಳ ಗುಂಪಿಗೆ ಜಸ್ಟೀಸ್ ನಾಗಮೋಹನ್ ದಾಸ್ ಅವರು ಶೇ. 4 ರಷ್ಟು ಮೀಸಲಾತಿಯನ್ನು ಶಿಫಾರಸ್ಸು ಮಾಡಿದ್ದರು. ಹಾಗೆಯೇ 59 ಜಾತಿಗಳ 5,22,099 ಜನಸಂಖ್ಯೆಯನ್ನು ಪ್ರವರ್ಗ-ಎ ಎಂದು ತೀರ್ಮಾನಿಸಿ ಶೇ.1 ರಷ್ಟು ಮೀಸಲಾತಿಯನ್ನು ಶಿಫಾರಸ್ಸು ಮಾಡಿದ್ದರು. ಕೆಲವು ತಾಂತ್ರಿಕ ಕಾರಣಗಳಿಂದ ಈ ಎರಡೂ ಗುಂಪುಗಳನ್ನು ಒಟ್ಟಿಗೆ ಸೇರಿಸಿ ಶೇ.5 ರಷ್ಟು ಮೀಸಲಾತಿ ನೀಡಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು
ಆಯೋಗವು ಎ,ಬಿ,ಸಿ,ಡಿ,ಇ ಎಂದು ಪ್ರವರ್ಗಗಳನ್ನಾಗಿ ವಿಭಾಗೀಕರಿಸಿ ಮಾಡಿದ್ದ ಶಿಫಾರಸ್ಸನ್ನು ಸಂಪುಟ ಸಭೆ ಎ,ಬಿ,ಸಿ ಎಂದು ಮೂರು ಪ್ರವರ್ಗಗಳನ್ನಾಗಿ ವಿಭಾಗೀಕರಿಸಲು ಹಾಗೂ ಎಡಗೈ ಸಂಬ0ಧಿತ ಜಾತಿಗಳುಳ್ಳ ಎ ಪ್ರವರ್ಗಕ್ಕೆ – ಶೇ. 6, ಬಲಗೈ ಸಂಬ0ಧಿತ ಜಾತಿಗಳುಳ್ಳ ಬಿ ಪ್ರವರ್ಗಕ್ಕೆ – ಶೇ. 6 ಹಾಗೂ ಸಿ ಪ್ರವರ್ಗಕ್ಕೆ – ಶೇ.5 ರಷ್ಟು ಒಳಮೀಸಲಾತಿ ನೀಡಲು ತೀರ್ಮಾನಿಸಿತು ಎಂದು ತಿಳಿಸಿದರು.
ಪರಿಶಿಷ್ಟ ಜಾತಿಗಳಲ್ಲಿರುವ ಎಲ್ಲಾ 101 ಜಾತಿಗಳಿಗೆ ಶಿಕ್ಷಣ, ಉದ್ಯೋಗಾವಕಾಶ ಹಾಗೂ ಇನ್ನಿತರೆ ವಿಷಯಗಳಲ್ಲಿ ಅವಕಾಶಗಳನ್ನು ಒದಗಿಸುವಲ್ಲಿ ಸಮಾನತೆ ಮತ್ತು ನ್ಯಾಯ ಸಮ್ಮತತೆಯನ್ನು ಖಚಿತಪಡಿಸಿಕೊಳ್ಳುವ ದೃಷ್ಟಿಯಿಂದ ಈ ಮಾರ್ಪಾಡುಗಳನ್ನು ಮಾಡಲಾಗಿದೆ.
ಪರಿಶಿಷ್ಟ ಜಾತಿಗಳಲ್ಲಿನ ಚಲನಶೀಲತೆಯನ್ನು ಹಾಗೂ ಲಭ್ಯವಾಗುವ ದತ್ತಾಂಶಗಳನ್ನು ಪರಿಶೀಲಿಸಿಕೊಂಡು, ಕಾಲಕಾಲಕ್ಕೆ ಈ ಜಾತಿಗಳನ್ನು ಅಧ್ಯಯನ ಮಾಡಿ ವರದಿ ನೀಡಲು ಶಾಶ್ವತ ಪರಿಶಿಷ್ಟ ಜಾತಿಗಳ ಆಯೋಗವನ್ನು ರಚಿಸಲು ತೀರ್ಮಾನಿಸಿದ್ದೇವೆ.
ಇದರ ಜೊತೆಗೆ ಒಳ ಮೀಸಲಾತಿಯ ಕುರಿತಂತೆ ಆದೇಶ ಹೊರಡಿಸಿದ ಕೂಡಲೇ ನೇಮಕಾತಿ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಹಾಗೂ ಒಂದು ಬಾರಿಗೆ ವಯೋಮಿತಿ ಸಡಿಲಿಸಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು
ಇದೇ ಸಂದರ್ಭದಲ್ಲಿ ಒಳ ಮೀಸಲಾತಿ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.
Previous Articleಅಕ್ಟೋಬರ್ ಕ್ರಾಂತಿಗೆ ಸಜ್ಜಾಗುತ್ತಿದೆ ವೇದಿಕೆ
Next Article ಕ್ಯಾನ್ಸರ್ ಪೇಷಂಟ್ ಮಾಡಿದ ಘನ ಕಾರ್ಯ