ಬೆಂಗಳೂರು, ನ. 6:
ಅಬಕಾರಿ ಇಲಾಖೆಯಲ್ಲಿ 900 ಕೋಟಿ ರೂಪಾಯಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಇದಕ್ಕೆ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ನೇರ ಕಾರಣವಾಗಿದ್ದು ಕೂಡಲೇ ಅವರನ್ನು ಸಂಪುಟದಿಂದ ಕೈ ಬಿಡಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಬಕಾರಿ ಇಲಾಖೆಯಲ್ಲಿ ನಡೆದಿರುವ ಈ ಬಹು ಕೋಟಿ ಪ್ರಕರಣದ ಬಗ್ಗೆ ಸಿಬಿಐ ತನಿಖೆಗೆ ಆದೇಶಸಬೇಕು. ಅಕ್ರಮ ಹಣದ ವಹಿವಾಟು ನಡೆದಿರುವ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಕೂಡ ತನಿಖೆ ಕೈಗೆತ್ತಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಹಿಂದೆ ಬೆಂಗಳೂರಿನಲ್ಲಿ ರೌಡಿಗಳು ಹಫ್ತಾ ವಸೂಲಿ ಮಾಡುತ್ತಿದ್ದರು. ಈಗ ರೌಡಿಗಳೇ ನಾಚುವಂತೆ ಅಬಕಾರಿ ಸಚಿವ ತಿಮ್ಮಾಪುರ ವಸೂಲಿ ಮಾಡುತ್ತಿದ್ದಾರೆ.ಈ ವಸೂಲಿ ವಾರಕ್ಕೆ 18 ಕೋಟಿ ರೂಪಾಯಿವರೆಗಿದೆ.ಅಂದರೆ ವರ್ಷಕ್ಕೆ ಸುಮಾರು 900 ಕೋಟಿ ರೂಪಾಯಿ ಮಾಡಲಾಗುತ್ತಿದೆ ಎಂದು
ಮದ್ಯ ಮಾರಾಟಗಾರರ ಸಂಘ ಪತ್ರದಲ್ಲಿ ವಿವರಿಸಿರುವುದಾಗಿ ತಿಳಿಸಿದರು.
ಇಲಾಖೆಯ ಪ್ರತಿ ಹುದ್ದೆಯ ಅಧಿಕಾರಿಗಳಿಗೆ ಎಷ್ಟು ಲಂಚ ನೀಡಲಾಗುತ್ತಿದೆ ಅಲ್ಲದೆ ಮುಖ್ಯಮಂತ್ರಿ ಕಚೇರಿಯ ಅಧಿಕಾರಿ, ಪಿಎ, ಪಿಎಸ್ ಪಡೆಯುತ್ತಿರುವ ಲಂಚದ ಬಗ್ಗೆಯೂ ವಿವರವಿದೆ. ಸಮಬಾಳು ಸಮಪಾಲು ಎಂಬಂತೆ ಸಚಿವ ತಿಮ್ಮಾಪುರ ಎಲ್ಲರಿಗೂ ಲಂಚ ಹಂಚಿದ್ದಾರೆ ಎಂದು ದೂರಿದರು
ಬಿಜೆಪಿ ಸರ್ಕಾರವಿದ್ದಾಗ ಕಾಂಗ್ರೆಸ್ ನಾಯಕರು 40 ಪರ್ಸೆಂಟ್ ಎಂದು ಆರೋಪ ಮಾಡಿದ್ದರೂ ಅದಕ್ಕೆ ಸೂಕ್ತ ದಾಖಲೆ ನೀಡಿಲ್ಲ. ಈಗ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಭಿತ್ತಿಪತ್ರ ಅಂಟಿಸುವುದಾದರೆ ನಾನು ಕೂಡ ಬರುತ್ತೇನೆ ಎಂದು ವ್ಯಂಗ್ಯವಾಡಿದರು.
Previous Articleಶೌಚಾಲಯದಲ್ಲಿ ಕ್ಯಾಮೆರಾ ಇಟ್ಟ ಕಾಮುಕ.
Next Article ಬೆಂಗಳೂರಿನ ಈ ರಸ್ತೆಯಲ್ಲಿ ಆಟೋ ಸಂಚಾರ ಇಲ್ಲ.