ಬೆಂಗಳೂರು,ಆ. 9-
ಪ್ರತಿಪಕ್ಷಗಳ ವಿರುದ್ಧ ಸೇಡಿನ ಧೋರಣೆ ಅನುಸರಿಸುತ್ತಿರುವ ಕೇಂದ್ರ ಸರ್ಕಾರ ಮತ್ತು ಬಿಜೆಪಿ ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದೆ ಇದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡದೆ ಎಲ್ಲರೂ ಗಟ್ಟಿಯಾಗಿ ನಿಲ್ಲಬೇಕು ಎಂದು ಕಾಂಗ್ರೆಸ್ ಮುಖಂಡರು ಸಂಕಲ್ಪ ಮಾಡಿದ್ದಾರೆ.
ನಿವೇಶನ ಹಂಚಿಕೆ ಹಗರಣ ಆರೋಪದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ನಡೆಸುತ್ತಿರುವ ಜನಾಂದೋಲನ ಯಾತ್ರೆಯ ಸಮಾರೋಪ ಮೈಸೂರಿನಲ್ಲಿ ನಡೆಯಿತು.
ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಸಮರ ಸಾರಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು
ರಾಜ್ಯ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ ಈ ಸರ್ಕಾರದ ರಕ್ಷಣೆಗಾಗಿ ಜನರ ಆಶೀರ್ವಾದದೊಂದಿಗೆ ಬಂಡೆಯಂತೆ ನಿಂತಿದ್ದೇನೆ ಇದನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು.
ಈ ಹಿಂದೆ ಎಸ್ಎಂ ಕೃಷ್ಣ ಕಾವೇರಿಗಾಗಿ ಪಾದಯಾತ್ರೆ ಮಾಡಿದ್ದರು ನಾವು ಮೇಕೆದಾಟು ಯೋಜನೆಗೆ ಪಾದಯಾತ್ರೆ ಮಾಡಿದ್ದೆವು ರಾಹುಲ್ ಗಾಂಧಿ ಭಾರತ ಜೋಡೋ ಯಾತ್ರೆ ನಡೆಸಿ ಜನರ ಅಹವಾಲು ಆಲಿಸಿದರು ಸಿದ್ದರಾಮಯ್ಯ ಬಳ್ಳಾರಿ ಪಾದಯಾತ್ರೆ ಮಾಡಿ ಪ್ರಜಾಪ್ರಭುತ್ವ ಉಳಿಸಿದ್ದರು ಆದರೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ತಮ್ಮ ಶಾಪ ವಿಮೋಚನೆಗಾಗಿ ಪ್ರಾಯಶ್ಚಿತ ಯಾತ್ರೆ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಪ್ರಕ್ರಿಯೆಯಲ್ಲಿ ಮುಖ್ಯಮಂತ್ರಿ ಯಾವುದೇ ಪಾತ್ರ ನಿರ್ವಹಿಸಿಲ್ಲ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅವರದೇ ಪಕ್ಷದ ಶಾಸಕರು ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಮುಖ್ಯಸ್ಥರು ನಿವೇಶನ ನೀಡಿದ್ದಾರೆ. ಆದರೆ ಈಗ ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.
ಬಜೆಟ್ ನಲ್ಲಿ ರಾಜ್ಯಕ್ಕೆ ನ್ಯಾಯಯುತವಾಗಿ ದೊರಕಬೇಕಾದ ಪಾಲು ಕೊಡದೆ ಅನ್ಯಾಯ ಮಾಡುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬರ ಪರಿಹಾರಕ್ಕೂ ಆರ್ಥಿಕ ನೆರವು ನೀಡದಿಲ್ಲ ಈ ಬಗ್ಗೆ ಪ್ರಶ್ನೆ ಕೇಳಿದ ಕಾಂಗ್ರೆಸ್ ಸರ್ಕಾರವನ್ನು ಪದಚ್ಯುತಿಗೊಳಿಸಲು ಪಿತೂರಿ ಮಾಡುತ್ತಿದೆ ಎಂದು ಆಪಾದಿಸಿದರು.
ಜಾರಕಿಹೊಳಿ ಕಿಡಿ
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ ಪ್ರತಿಪಕ್ಷಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಲು ಸಾಧ್ಯವಾಗದೆ ಸುಳ್ಳು ಆರೋಪ ಮಾಡಿಕೊಂಡು ತಿರುಗಾಡುತ್ತಿವೆ ಎಂದು ದೂರಿದರು.
ಜನರಿಂದ ಬಾರಿ ಬಹುಮತದೊಂದಿಗೆ ಆಯ್ಕೆಯಾಗಿರುವ ಸರ್ಕಾರವನ್ನು ಪಿತೂರಿ ಮಾಡಿ ಪದಚ್ಯುತಿಗೊಳಿಸಲು ಪ್ರಯತ್ನ ಮಾಡಲಾಗುತ್ತದೆ. ಇಂತಹ ಪ್ರಯತ್ನ ಯಾವುದೇ ಕಾರಣಕ್ಕೂ ಯಶಸ್ವಿಯಾಗುವುದಿಲ್ಲ ನಾವೆಲ್ಲರೂ ಒಟ್ಟಾಗಿದ್ದೇವೆ ಇದಕ್ಕೆ ಸಾಕ್ಷಿ ಇಲ್ಲಿ ಸೇರಿರುವ ಜನಸಮೂಹ ಎಂದು ಬಣ್ಣಿಸಿದರು.
Previous Articleಮೈಸೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ.
Next Article ಮಕ್ಕಳ ಮೊಟ್ಟೆ ಕದ್ದ ಅಂಗನವಾಡಿ ಕಾರ್ಯಕರ್ತೆ