ಬೆಂಗಳೂರು,ಸೆ.24:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ನಲ್ಲಿ ದೊಡ್ಡ ಹಿನ್ನಡೆ ಉಂಟಾಗಿದೆ
ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣದ ತನಿಖೆಗೆ ರಾಜ್ಯಪಾಲರು ನೀಡಿದ್ದ ಅನುಮತಿ ಪ್ರಶ್ನಿಸಿ ಸಿದ್ದರಾಮಯ್ಯ ಅವರು ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾ ಗೊಳಿಸಿದ ನ್ಯಾಯಮೂರ್ತಿ ನಾಗ ಪ್ರಸನ್ನ ಅವರು ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದಿದ್ದಾರೆ.
ನಿವೇಶನ ಹಂಚಿಕೆ ಅಕ್ರಮ ಆರೋಪದ ಬಗ್ಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಕೋರಿ ರಾಜ್ಯಪಾಲರಿಗೆ ಸಲ್ಲಿಸಿದ ಮನವಿಯ ಬಗ್ಗೆ ಪ್ರತಿಕ್ರಿಯಿಸಿದ ರಾಜ್ಯಪಾಲರು ಪ್ರಕರಣದ ಕುರಿತು ತನಿಖೆಯ ಅಗತ್ಯವಿದೆ ಎಂದು ಹೇಳಿದ್ದರು.
ರಾಜ್ಯಪಾಲರು ನೀಡಿದ ಈ ಅನುಮತಿಯನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರೇಟ್ ಅರ್ಜಿಯ ಬಗ್ಗೆ ಸುಧೀರ್ಘ ವಾದ ಪ್ರತಿವಾದ ಪಾಲಿಸಿದ ನ್ಯಾಯಮೂರ್ತಿ ನಾಗ ಪ್ರಸನ್ನ ಅವರು ಇಂದು ತೀರ್ಪು ಪ್ರಕಟಿಸಿದರು.
ಸುದೀರ್ಘ ವಾದ, ಪ್ರತಿವಾದದ ಬಳಿಕ ಪ್ರಕರಣದ ತನಿಖೆಯ ಅಗತ್ಯವಿದೆ ಎಂದು ಪ್ರತಿಪಾದಿಸಿರುವ ನ್ಯಾಯಮೂರ್ತಿಗಳು, ಭ್ರಷ್ಟಾಚಾರ ನಿಗ್ರಹ ಕಾಯ್ದೆ 17ಎ ಮತ್ತು ಭಾರತೀಯ ನ್ಯಾಯಸಂಹಿತೆ 218ರಡಿ ರಾಜ್ಯಪಾಲರು ನೀಡಿದ್ದ ಅಭಿಯೋಜನೆ ಮತ್ತು ತನಿಖೆಯ ಪೂರ್ವಾನುಮತಿಯನ್ನು ಎತ್ತಿ ಹಿಡಿದಿದ್ದಾರೆ.
17ಎ ಅಡಿ ಪೊಲೀಸ್ ಅಧಿಕಾರಿಯೇ ಪೂರ್ವಾನುಮತಿಗೆ ಅರ್ಜಿ ಸಲ್ಲಿಸಬೇಕು ಎಂಬ ಕಡ್ಡಾಯ ನಿಯಮಗಳಿಲ್ಲ. ಖಾಸಗಿ ದೂರಿನ ಸಂದರ್ಭಗಳಲ್ಲಿ ಇದಕ್ಕೆ ವಿನಾಯಿತಿ ಇದೆ. ರಾಜ್ಯಪಾಲರು ಸ್ವಯಂ ವಿವೇಚನಾಧಿಕಾರ ಬಳಸಿ ನಡೆಸಿರುವ ಪ್ರಕ್ರಿಯೆಗಳಲ್ಲಿ ದೋಷಗಳು ಕಂಡುಬಂದಿಲ್ಲ ಎಂದು ತಮ್ಮ ತೀರ್ಪಿನಲ್ಲಿ ತಿಳಿಸಿದ್ದಾರೆ.
ಸಂವಿಧಾನದ 163 ನೇ ವಿಧಿಯಡಿ ರಾಜ್ಯಪಾಲರು ಸಂಪುಟದ ಸಲಹೆ ಆಧಾರಿತವಾಗಿ ಕರ್ತವ್ಯ ನಿರ್ವಹಣೆ ಮಾಡಬೇಕು ಎಂದು ಹೇಳಲಾಗಿದೆ. ಆದರೆ ರಾಜ್ಯಪಾಲರು ಸ್ವಯಂ ವಿವೇಚನಾಧಿಕಾರವನ್ನು ಬಳಸಿಯೂ ನಿರ್ಧಾರ ತೆಗೆದುಕೊಳ್ಳಬಹುದು ಎಂದು ವಿವರಿಸಿರುವ ತೀರ್ಪು ರಾಜ್ಯಪಾಲರು ತಮ್ಮ ವಿವೇಚನಾಧಿಕಾರವನ್ನು ಸಮರ್ಪಕವಾಗಿ ಬಳಸಿಲ್ಲ ಎಂದು ಅರ್ಜಿದಾರರು ಮಾಡಿರುವ ಆರೋಪವನ್ನು ತಳ್ಳಿ ಹಾಕಿದೆ.
ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಗೊಳಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಯಾವ ರೀತಿಯ ತನಿಖೆಗೆ ಆದೇಶಿಸಬಹುದು ಎಂಬ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅವಕಾಶವಿದೆ ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದ ವಿಚಾರಣೆಗೆ ನೀಡಲಾಗಿದ್ದ ತಡೆಯಜ್ಞೆಯನ್ನು ತೆರವುಗೊಳಿಸಲಾಗಿದೆ ಎಂದು ಪ್ರಕಟಿಸಿತು.
ಈ ವೇಳೆ ನ್ಯಾಯಾಲಯದಲ್ಲಿ ಹಾಜರಿದ್ದ ಅರ್ಜಿದಾರರ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು, ತೀರ್ಪು ಜಾರಿಗೆ ಎರಡು ವಾರಗಳ ತಾತ್ಕಾಲಿಕ ತಡೆಯಾಜ್ಞೆ ನೀಡಬೇಕು ಎಂದು ಮನವಿ ಮಾಡಿದರು.
ಈ ಮನವಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿ ನಾಗ ಪ್ರಸನ್ನ, ನಾನೇ ನೀಡಿದ ತೀರ್ಪಿಗೆ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ. ಶೀಘ್ರದಲ್ಲೇ ತೀರ್ಪಿನ ಪ್ರತಿ ಕೈ ಸೇರಲಿದೆ. ಮುಂದಿನ ಪ್ರಕ್ರಿಯೆಗಳನ್ನು ಅರ್ಜಿದಾರರು ಪಾಲಿಸಬಹುದು ಎಂದು ಹೇಳಿದರು.
Previous Articleಸಿಎಂ ಗೆ ಹೈಕಮಾಂಡ್ ಕೊಟ್ಟ ಸೂಚನೆ ಏನು ಗೊತ್ತಾ.
Next Article ರಾಜ್ಯದಲ್ಲಿ ಭದ್ರತೆ ಹೆಚ್ಚಳ ಯಾಕೆ ಗೊತ್ತಾ.