ಬೆಂಗಳೂರು, ಆ.21 – ಮುಂಬರುವ ಲೋಕಸಭಾ Electionಯಲ್ಲಿ ಅತ್ಯಧಿಕ ಸ್ಥಾನ ಗೆಲ್ಲಲು ರಣ ತಂತ್ರ ರೂಪಿಸುತ್ತಿರುವ ಕಾಂಗ್ರೆಸ್ ಅನ್ಯ ಪಕ್ಷಗಳ ಪ್ರಭಾವಿ ಮುಖಂಡರನ್ನು ತನ್ನತ್ತ ಸೆಳೆಯಲು ಪ್ರಯತ್ನ ನಡೆಸಿದೆ. ಇದರ ಬೆನ್ನಲ್ಲೇ
ಮಾಜಿ ಸಚಿವ ಬಿಜೆಪಿಯ ಹಿರಿಯ ನಾಯಕ ಕಟ್ಟಾ ಸುಬ್ರಹ್ಮಣ್ಯನಾಯ್ಡು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಆಪರೇಷನ್ ಹಸ್ತದ ಚಟುವಟಿಕೆಗಳು ಬಿರುಸಿನಿಂದ ನಡೆಯುತ್ತಿರುವ ಹಂತದಲ್ಲಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ಈ ಭೇಟಿ ಕುತೂಹಲ ಕೆರಳಿಸಿದೆ. ಇದೊಂದು ಸೌಜನ್ಯಯುತವಾದ ಭೇಟಿ ಎಂದು ವ್ಯಾಖ್ಯಾನಿಸಲಾಗುತ್ತಿದೆಯಾದರೂ ತೆರೆಮರೆಯಲ್ಲಿ ನಡೆಯುತ್ತಿರುವ ಚಟುವಟಿಕೆಗಳು ಕುತೂಹಲ ಮೂಡಿಸಿವೆ.
ಕಟ್ಟಾ ಸುಬ್ರಹ್ಮಣ್ಯನಾಯ್ಡು ಬಿಜೆಪಿಯಲ್ಲಿ ಪ್ರಬಲ ನಾಯಕರಾಗಿದ್ದರು. ಹಿಂದೆ ಯಡಿಯೂರಪ್ಪ ಅವರ ಸರ್ಕಾರದಲ್ಲಿ ಸಚಿವರಾಗಿ ಕೆಲಸ ಮಾಡಿದ್ದರು.
ಶಿವಾಜಿನಗರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಅವರು, ನಂತರ ಹೆಬ್ಬಾಳ ಕ್ಷೇತ್ರಕ್ಕೆ ಸ್ಥಳಾಂತರಗೊಂಡಿದ್ದರು. ಇತ್ತೀಚಿಗೆ ಅವರನ್ನು ಪಕ್ಷದಲ್ಲಿ ಮೂಲೆ ಗುಂಪು ಮಾಡಲಾಗುತ್ತಿದೆ ಎಂದು ಅವರು ಅಸಮಾಧಾನಗೊಂಡಿದ್ದಾರೆ ಎನ್ನಲಾಗುತ್ತಿದೆ. ಯಡಿಯೂರಪ್ಪ ಅವರ ಸರ್ಕಾರದ ಅವಧಿಯಲ್ಲಿ ನಡೆದ ಡಿ ನೋಟಿಫಿಕೇಷನ್ ಹಗರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ಯಡಿಯೂರಪ್ಪ, ಕೃಷ್ಣಯ್ಯಶೆಟ್ಟಿ ಅವರ ಜೊತೆ ಕಟ್ಟಾ ಸುಬ್ರಹ್ಮಣ್ಯನಾಯ್ಡು ಅವರೂ ಕೂಡ ಸೆರೆವಾಸ ಅನುಭವಿಸಿದ್ದರು.ಇದಾದ ಬಳಿಕ ರಾಜಕೀಯವಾಗಿ ಅಜ್ಞಾತವಾಸದಲ್ಲಿದ್ದ ಅವರಿಗೆ ಬಿಜೆಪಿಯಲ್ಲಿ ಯಾವುದೇ ಪ್ರಾತಿನಿಧ್ಯ ನೀಡಲಿಲ್ಲ ಎನ್ನಲಾಗಿದೆ.
ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಟ್ಟಾ ಸುಬ್ರಹ್ಮಣ್ಯನಾಯ್ಡು ಅವರ ಪುತ್ರ ಕಟ್ಟಾ ಜಗದೀಶ್ ಬಿಜೆಪಿ ಅಭ್ಯರ್ಥಿಯಾಗಿ ಸ್ರ್ಪಧಿಸಿ ಸೋಲು ಕಂಡಿದ್ದರು.ಇದಕ್ಕೆ ಪಕ್ಷದ ಹಲವು ನಾಯಕರು ನಡೆಸಿದ ಒಳತಂತ್ರ ಕಾರಣ ಎಂದು ಕಟ್ಟಾ ಆಪಾದಿಸಿದ್ದರು. ಇದರಿಂದ ಬೇಸರಗೊಂಡಿರುವ ಅವರು ಇದೀಗ ಕಾಂಗ್ರೆಸ್ ಸೇರಲು ಚಿಂತನೆ ನಡೆಸಿದ್ದು,ಶಿವಕುಮಾರ್ ಜೊತೆ ಪ್ರಾಥಮಿಕ ಹಂತದ ಮಾತುಕತೆ ನಡೆಸಿದ್ದಾರೆ. ಅಷ್ಟೇ ಅಲ್ಲ ಕಾಂಗ್ರೆಸ್ ಅವಕಾಶ ನೀಡಿದರೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಇಚ್ಚೆ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.