ಬೆಂಗಳೂರು, ಡಿ.6 – ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿ ಎಂಬ ಕಾರಣಕ್ಕೆ ತಮಗೆ ಮಹಾರಾಷ್ಟ್ರದ ನಾಗಪುರದಲ್ಲಿನ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಕಚೇರಿಯ ವಸ್ತು ಸಂಗ್ರಹಾಲಯ ಪ್ರವೇಶ ನಿರಾಕರಿಸಲಾಯಿತು ಎಂಬ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಗೂಳಿಹಟ್ಟಿ ಶೇಖರ್ ಅವರ ಹೇಳಿಕೆ ಕೋಲಾಹಲ ಸೃಷ್ಟಿಸಿದೆ.
ಈ ಹಿಂದೆ ತಾವು ಬಿಜೆಪಿ ಶಾಸಕರ ಎಂಬ ಸಂಗತಿ ಗೊತ್ತಿದ್ದರೂ ಕ್ರೈಸ್ತ ಮಿಷನರಿಯ ಕೆಲವರು ತಮ್ಮ ತಾಯಿಯನ್ನು ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಿದ್ದರು ಎಂದು ಆರೋಪಿಸುವ ಮೂಲಕ ಸಂಚಲನ ಮೂಡಿಸಿದ್ದರು.
ಇದೀಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದನ್ನು ಹರಿಯಬಿಟ್ಟಿರುವ ಅವರು,ತಾವು ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿ ಎಂಬುದು ಖಚಿತವಾಗಿದ್ದರಿಂದ ಮಹಾರಾಷ್ಟ್ರದಲ್ಲಿನ ನಾಗ್ಪುರದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಹೆಡಗೇವಾರ್ ವಸ್ತುಸಂಗ್ರಹಾಲಯದ ಪ್ರವೇಶ ನಿರಾಕರಿಸಲಾಗಿದೆ. ಇದಕ್ಕೆ ಕಾರಣ ಏನು ಎಂಬುದನ್ನು ಸ್ಪಷ್ಟಪಡಿಸಬಲ್ಲಿರಾ? ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಪ್ರಶ್ನಿಸಿದ್ದಾರೆ.
Election ಘೋಷಣೆಯಾಗುವುದಕ್ಕೂ ಮೂರು ತಿಂಗಳ ಹಿಂದೆ ಮಹಾರಾಷ್ಟ್ರದ ನಾಗಪುರದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಚೇರಿಗೆ ಭೇಟಿ ನೀಡಿದ್ದೆ. ಪರಿಶಿಷ್ಟ ಜಾತಿಗೆ ಸೇರಿದವನಾದರೂ ಹಿಂದುತ್ವದ ಬಗ್ಗೆ ನನಗೆ ಹೆಮ್ಮೆ ಇದೆ. ನಾನು ಖುಷಿಯಿಂದ ಅಲ್ಲಿಗೆ ತೆರಳಿದ್ದೆ. ಆದರೆ, ಹೆಡಗೇವಾರ್ ವಸ್ತುಸಂಗ್ರಹಾಲಯ ಪ್ರವೇಶದ ಸಂದರ್ಭದಲ್ಲಿ ಕಹಿ ಅನುಭವ ಉಂಟಾಯಿತು’ ಎಂದು ಹೇಳಿದ್ದಾರೆ.
ಈ ಹೇಳಿಕೆ ಇದೀಗ ವ್ಯಾಪಕ ಚರ್ಚೆಗೆ ಗ್ರಾಮವಾಗಿದೆ. ಇವರ ಆರೋಪದ ಬಗ್ಗೆ ಪ್ರತಿಕ್ರಿಯಿಸಲು ಪ್ರತಿಪಕ್ಷ ನಾಯಕ ಅಶೋಕ್ ಸೇರಿದಂತೆ ಹಲವರು ನಿರಾಕರಿಸಿದರೇ.ಇದು ಸಂತೋಷ್ ಅವರಿಗೆ ಕೇಳಿದ ಪ್ರಶ್ನೆ ಅವರ ಪರವಾಗಿ ಉತ್ತರಿಸುವಷ್ಟು ದೊಡ್ಡ ವ್ಯಕ್ತಿ ನಾನಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿಳಿಸಿದರು
ಜೀ..ಹುಜೂರ್.
ಇದರ ಬಗ್ಗೆ ಕಟು ಟೀಕೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ,ಶೂದ್ರರು ಮತ್ತು ದಲಿತರಿಗೆ ಆರ್.ಎಸ್.ಎಸ್ ಗರ್ಭಗುಡಿಗೆ ಪ್ರವೇಶ ಇಲ್ಲ, ಅವರೇನಿದ್ದರೂ ಹೊರಬಾಗಿಲಲ್ಲಿ ನಿಂತು ‘ಜೀ..ಜೀ..ಹುಜೂರ್’ ಎಂದಷ್ಟೇ ಹೇಳಬೇಕು. ಇದಕ್ಕೆ ಗೂಳಿಹಟ್ಟಿ ಶೇಖರ್ ಅವರು ಬಿ.ಎಲ್ ಸಂತೋಷ್ ಅವರಿಗೆ ಕಳುಹಿಸಿರುವ ವಾಟ್ಸಾಪ್ ವಾಯ್ಸ್ ರೆಕಾರ್ಡ್ ಸಾಕ್ಷಿ ಎಂದಿದ್ದಾರೆ.
ಜಾಲತಾಣ ಎಕ್ಸ್ ನಲ್ಲಿ ಹೇಳಿಕೆ ನೀಡಿರುವ ಅವರು,
ಬಿಜೆಪಿ ಮತ್ತು ಆರ್.ಎಸ್.ಎಸ್ ಪರಿವಾರ ಬಹಿರಂಗವಾಗಿ ಮುಸ್ಲಿಂಮರ ವಿರುದ್ಧ ಮಾತ್ರ ಹರಿಹಾಯ್ದರೂ ಅಂತರಂಗದಲ್ಲಿ ಅದು ಶೂದ್ರರು ಮತ್ತು ದಲಿತರ ವಿರುದ್ಧವಾಗಿದೆ. ಬಾಯಿಯಲ್ಲಿ ಹಿಂದೂ ನಾವೆಲ್ಲರೂ ಒಂದು ಎನ್ನುವ ಮಂತ್ರವನ್ನು ಸದಾ ಪಠಿಸುವ ಸಂಘ ಪರಿವಾರದ ನಾಯಕರು ಶೂದ್ರರು ಮತ್ತು ದಲಿತರನ್ನು ಬಡಿಯಲು ಕಂಕುಳಲ್ಲಿ ಬಡಿಗೆ ಇಟ್ಟುಕೊಂಡಿರುತ್ತಾರೆ ಎಂದು ಹೇಳಿದ್ದಾರೆ.
ಗೂಳಿಹಟ್ಟಿ ಶೇಖರ್ ಅವರಂತಹ ದಲಿತ ಸಮುದಾಯದ ನಾಯಕರಿಗೆ ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆ ಮತ್ತು ಸಂವಿಧಾನ ಮಾತ್ರ ರಕ್ಷಣೆ ನೀಡಬಹುದೇ ಹೊರತು ಸಂಘ ಪರಿವಾರದ ಸಾವರ್ಕರ್, ಗೋಲ್ವಾಲ್ಕರ್ ಚಿಂತನೆಗಳಲ್ಲ. ಶೇಖರ್ ಅವರು ತನ್ನ ಅನುಭವದಿಂದ ಪಾಠ ಕಲಿಯಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ಆರ್.ಎಸ್.ಎಸ್ ಸ್ಥಾಪನೆಯಾಗಿ ಇನ್ನೆರಡು ವರ್ಷಕ್ಕೆ ನೂರು ವರ್ಷಗಳಾಗುತ್ತದೆ. ಈ ವರೆಗೆ ಒಬ್ಬನೇ ಒಬ್ಬ ತಳ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಆರ್.ಎಸ್.ಎಸ್ ತನ್ನ ಸರಸಂಘಚಾಲಕ ಇಲ್ಲವೇ ಇತರ ಉನ್ನತ ಪದಾಧಿಕಾರಿಯಾಗಿ ಯಾಕೆ ನೇಮಿಸಿಲ್ಲ ಎಂದು ನಾನು ಪ್ರಶ್ನೆ ಮಾಡಿದ್ದಕ್ಕೆ ಬಿಜೆಪಿ ಮತ್ತು ಸಂಘ ಪರಿವಾರದವರು, ಎದೆ ಬಡಿದುಕೊಂಡು ನನ್ನ ಮೈಮೇಲೆ ಎರಗಿದರು, ಅಪಪ್ರಚಾರದ ಮೂಲಕ ನನ್ನ ನಿಂದನೆ ಮಾಡಿದರು.
ಈಗ ಗೂಳಿಹಟ್ಟಿ ಶೇಖರ್ ಅವರಿಗೆ ಆಗಿರುವ ಅವಮಾನ ಮತ್ತು ಅನ್ಯಾಯಕ್ಕೆ ಉತ್ತರಿಸುವ ಧೈರ್ಯ ತೋರುವರೇ? ಎಂದು ಪ್ರಶ್ನಿಸಿದ್ದಾರೆ.
ತನ್ನ ‘ಹೊಡಿ ಬಡಿ’ ರಾಜಕಾರಣ ಮತ್ತು ತನ್ನ ಸೈದ್ಧಾಂತಿಕ ವಿರೋಧಿಗಳನ್ನು ಹಣಿಯಲು ಶೂದ್ರ ಮತ್ತು ದಲಿತ ಸಮುದಾಯದ ಅಮಾಯಕರನ್ನು ಯಥೇಚ್ಚವಾಗಿ ಬಳಸುವ ಸಂಘ ಪರಿವಾರ, ಅವಕಾಶಗಳನ್ನು ನೀಡುವ ಸಮಯ ಬಂದಾಗ ಮನೆ ಗೇಟ್‌ನಿಂದ ಹೊರಗೆ ಇಡುತ್ತಾ ಬಂದಿದೆ. ಶೂದ್ರ ಮತ್ತು ದಲಿತ ಸಮುದಾಯ ಈಗಲಾದರೂ ಕಣ್ತೆರೆದು ಈ ನಗ್ನ ಸತ್ಯವನ್ನು ಅರಿತುಕೊಳ್ಳಲಿ ಎಂದು ಕಿವಿ ಮಾತು ಹೇಳಿದ್ದಾರೆ.
ಸಂಘದ ಸ್ಪಷ್ಟನೆ:
ಈ ವಿವಾದ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ,ಸ್ಪಷ್ಟನೆ ನೀಡಿರುವ ಆರ್‌ಎಸ್‌ಎಸ್ ದಕ್ಷಿಣ ಮಧ್ಯಕ್ಷೇತ್ರೀಯ ಕಾರ್ಯವಾಹ ನಾ. ತಿಪ್ಪೇಸ್ವಾಮಿ,ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಆರ್‌ಎಸ್‌ಎಸ್ ಕಚೇರಿ ಬಗ್ಗೆ ಆಡಿಯೊ ಹೇಳಿಕೆಯಲ್ಲಿ ಮಾಡಿರುವ ಆರೋಪದಲ್ಲಿ ಹುರುಳಿಲ್ಲ,ಆರ್‌ಎಸ್‌ಎಸ್ ಕಚೇರಿ ಹಾಗೂ ಸ್ಮಾರಕದ ಕಟ್ಟಡಗಳಲ್ಲಿ ಎಲ್ಲರಿಗೂ ಮುಕ್ತ ಪ್ರವೇಶವಿದೆ ಎಂದು ತಿಳಿಸಿದ್ದಾರೆ.
ನಾಗ್ಪುರದಲ್ಲಿ ಸಂಘದ ಕಾರ್ಯಾಲಯವನ್ನು ನೋಡಲು ಬಂದವರ ಹೆಸರನ್ನು ನೋಂದಾಯಿಸಿ, ಪ್ರವೇಶ ನೀಡುವ ವ್ಯವಸ್ಥೆಯೇ ಇಲ್ಲ. ಇದೊಂದು ನಿರಾಧಾರ ಹಾಗೂ ಹುರುಳಿಲ್ಲದ ಆರೋಪ. ಆರ್‌ಎಸ್‌ಎಸ್ ಕಚೇರಿ, ಸ್ಮಾರಕ ಕಟ್ಟಡಗಳಿಗೆ ಎಲ್ಲ ಜಾತಿ, ವರ್ಗದ ಸಾವಿರಾರು ಜನ ನಿತ್ಯ ಬಂದು ಹೋಗುತ್ತಲೇ ಇದ್ದಾರೆ. ಯಾರಿಗೂ ಪ್ರವೇಶ ನಿರಾಕರಣೆಯ ಪ್ರಶ್ನೆಯೇ ಬಂದಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆಗೆ 4 ತಿಂಗಳ ಮೊದಲು ಈ ಘಟನೆ ನಡೆದಿತ್ತು ಎನ್ನುವ ಗೂಳಿಹಟ್ಟಿ ಶೇಖರ್ ಅವರು, ಆ ನಂತರ ಸಂಘದ ಅನೇಕ ಪ್ರಮುಖರನ್ನು ಭೇಟಿಯಾದರೂ ಎಲ್ಲಿಯೂ ತಮಗಾದ ಈ ಅವಮಾನದ ಬಗ್ಗೆ ಹೇಳಿರಲಿಲ್ಲ. ಹತ್ತು ತಿಂಗಳ ನಂತರ ಈ ರೀತಿ ಹೇಳಿಕೆ ನೀಡಿರುವುದು ಆಶ್ಚರ್ಯಕರ. ಆರ್‌ಎಸ್‌ಎಸ್ ಎಲ್ಲರನ್ನೂ ಸದಾ ತೆರೆದ ಮನಸ್ಸಿನಿಂದ ಸ್ವಾಗತಿಸುತ್ತದೆ’ ಎಂದು ತಿಳಿಸಿದ್ದಾರೆ.