ಬೆಂಗಳೂರು, ಡಿ.27- ಮುಸ್ಲಿಂ ಸಮುದಾಯದ ಹೆಣ್ಣುಮಕ್ಕಳ ಗೌರವಕ್ಕೆ ಧಕ್ಕೆಯಾಗುವಂತಹ ಹೇಳಿಕೆ ನೀಡಿರುವ ಆರೋಪದಲ್ಲಿ ಸಿಲುಕಿರುವಬಸಂಘ ಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ್ ಅವರನ್ನು ಕೂಡಲೇ ಬಂಧಿಸಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಒತ್ತಾಯಿಸಿದ್ದಾರೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಸಂಘ ಪರಿವಾರದ ನಾಯಕರು ಸಂಸ್ಕೃತಿ ಮತ್ತು ಮಹಿಳೆಯರ ರಕ್ಷಣೆ ಬಗ್ಗೆ ದೊಡ್ಡ ದೊಡ್ಡ ಮಾತುಗಳಲ್ಲಿ ಭಾಷಣ ಬಿಗಿಯುತ್ತಾರೆ. ಆದರೆ ಇದಕ್ಕೆ ವ್ಯತಿರಿಕ್ತವಾಗಿ ಕಲ್ಲಡ್ಕ ಪ್ರಭಾಕರ್ ಮೈಸೂರು ಮತ್ತು ಶ್ರೀರಂಗಪಟ್ಟಣದಲ್ಲಿ ನೀಡಿರುವ ಹೇಳಿಕೆ ಪರಿವಾರದ ನಿಜ ಬಣ್ಣ ಬಯಲು ಮಾಡಿದೆ ಎಂದು ಆಪಾದಿಸಿದರು.
ಪ್ರಭಾಕರ ಭಟ್ ನೀಡಿರುವ ಹೇಳಿಕೆ ಅತ್ಯಂತ ಕೀಳು ಅಭಿವ್ಯಕ್ತಿಯಿಂದ ಕೂಡಿದ್ದಾಗಿದೆ. ಸರ್ಕಾರ ತಕ್ಷಣವೇ ಅವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕಿತ್ತು ಎಂದು ಅಭಿಪ್ರಾಯಪಟ್ಟರು.
ಮಹಿಳಾ ಹೋರಾಟಗಾರರು, ಮುಸ್ಲಿಂ
ಸಮುದಾಯದವರು ಒಟ್ಟಾಗಿ ದೂರು ನೀಡುವ ಮೂಲಕ ಎಫ್‍ಐಆರ್ ದಾಖಲಿಸಲಾಗಿದೆ. ಇದರ ಆಧಾರದ ಮೇಲೆ ಕೂಡಲೇ ಕಲ್ಲಡ್ಕ ಪ್ರಭಾಕರ್ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು. ಕಾಂಗ್ರೆಸ್ ಪಕ್ಷ ಸರ್ವಜನಾಂಗದ ಶಾಂತಿಯ ತೋಟ ಎಂಬ ಶೀರ್ಷಿಕೆಯ ಪ್ರಣಾಳಿಕೆಯನ್ನು ಜನರ ಮುಂದಿಟ್ಟು, ಮತ ಪಡೆದು ಅಧಿಕಾರಕ್ಕೆ ಬಂದಿದೆ. ಅದರಂತೆ ಕೋಮು ದ್ವೇಷ ಹರಡುವ, ಶಾಂತಿ ಕದಡುವ ವಿಚ್ಛಿದ್ರಾಕಾರಿ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ ಎಂದು ಪ್ರತಿಪಾದಿಸಿದರು.