ಬೆಂಗಳೂರು.ಜ.9: ಲೋಕಸಭಾ Electionಗೆ ರಾಜಕೀಯ ಪಕ್ಷಗಳ ಕಾರ್ಯತಂತ್ರ ಪಡೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ರಾಜ್ಯದ ಆಡಳಿತ ರೂಡ ಕಾಂಗ್ರೆಸ್ ನಲ್ಲಿ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಾಗಿ ಬೇಡಿಕೆ ತೀವ್ರಗೊಂಡಿದೆ.
ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಅನುಕೂಲವಾಗಬೇಕಾದರೆ,ದಲಿತ,ಪರಿಶಿಷ್ಟ ವರ್ಗ ಮತ್ತು ಲಿಂಗಾಯತ ಸಮುದಾಯದ ತಲಾ ಒಬ್ಬರಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡಬೇಕು. ಅದರಲ್ಲೂ ಡಾ.ಪರಮೇಶ್ವರ್, ಸತೀಶ್ ಜಾರಕಿಹೊಳಿ ಮತ್ತು ಎಂ.ಬಿ.ಪಾಟೀಲ್ ಅವರಿಗೆ ನೀಡಬೇಕು ಎಂಬ ಆಗ್ರಹ ತೀವ್ರಗೊಂಡಿದೆ.
ಸದ್ಯ ಉಪ ಮುಖ್ಯಮಂತ್ರಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಕಟ್ಟಿಹಾಕಬೇಕು ಎಂಬ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ ಈ ವ್ಯೂಹ ಎಣೆದಿದೆ ಎಂಬ ವರದಿಗಳ ಬೆನ್ನಲ್ಲೇ ಇದೀಗ ಮತ್ತೊಂದು ತಂತ್ರ ಸಿದ್ದಗೊಂಡಿದ್ದು,ಹಿರಿಯ ನಾಯಕ ಕೆ.ಎಚ್.ಮುನಿಯಪ್ಪ (Muniappa) ಮತ್ತು ಶರಣ ಪ್ರಕಾಶ್ ಪಾಟೀಲ್ ಈ ರೇಸ್ ಗೆ ಸೇರ್ಪಡೆಯಾಗಿದ್ದಾರೆ.
ಚುನಾವಣೆಯ ಕಾರ್ಯತಂತ್ರ ಕುರಿತಂತೆ ಮಂತ್ರಿಗಳು ಮತ್ತು ಪ್ರಮುಖರೊಂದಿಗೆ ಚರ್ಚಿಸಲು ಬೆಂಗಳೂರಿಗೆ ಆಗಮಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಎಐಸಿಸಿ ನಾಯಕ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ಭೇಟಿ ಮಾಡಿರುವ ಉಪಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳು ಲೋಕಸಭೆ ಚುನಾವಣೆ ಮುನ್ನವೇ ನೇಮಕಾತಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಗೃಹ ಸಚಿವ ಡಾ. ಪರಮೇಶ್ವರ್ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಕಳೆದರಾತ್ರಿ ಸುರ್ಜೆವಾಲ ಅವರನ್ನು ಭೇಟಿ ಮಾಡಿ ಹೆಚ್ಚುವರಿ ಯಾಗಿ ಲಿಂಗಾಯತ ದಲಿತ ಮತ್ತು ಪರಿಶಿಷ್ಟ ವರ್ಗಕ್ಕೆ ಸೇರಿದವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಬೇಕು ಇದರಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಅನುಕೂಲಕರವಾಗಲಿದೆ ಎಂಬ ಬೇಡಿಕೆ ಸಲ್ಲಿಸಿದ್ದಾರೆ.
ಇದಾದ ಬೆನ್ನಲ್ಲೇ ಆಹಾರ ಮತ್ತು ಸಚಿವ ಕೆಎಚ್ ಮುನಿಯಪ್ಪ ಅವರು ಕೂಡ ಸ್ವಚ್ಛವಾದ ಅವರನ್ನು ಭೇಟಿ ಮಾಡಿ ಪರಿಶಿಷ್ಟ ಜಾತಿ ಎಡಗೈ ಸಮುದಾಯಕ್ಕೆ ಸೇರಿದ ತಮಗೆ ಉಪಮುಖ್ಯಮಂತ್ರಿಯ ಹುದ್ದೆ ನೀಡಬೇಕು ತಮ್ಮ ಸಮುದಾಯ ಹೆಚ್ಚಿನ ಜನಸಂಖ್ಯೆ ಇದ್ದು ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ ಈ ಸಮುದಾಯದ ಮತಗಳನ್ನು ಸೆಳೆಯಲು ಬಿಜೆಪಿ ಪ್ರಯತ್ನ ನಡೆಸುತ್ತಿದ್ದು ಅದನ್ನು ತಪ್ಪಿಸಬೇಕಾದರೆ ತಮಗೆ ಉಪಮುಖ್ಯಮಂತ್ರಿ ಹುದ್ದೆ ನೀಡಬೇಕು ಇದರಿಂದ ಪಕ್ಷಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂಬ ವಾದ ಮಂಡಿಸಿರುವುದು ಕುತೂಹಲ ಮೂಡಿಸಿದೆ.
ಮತ್ತೊಂದೆಡೆ ಲಿಂಗಾಯತ ಸಮುದಾಯ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸೇರಿದ ಶರಣ ಪ್ರಕಾಶ್ ಪಾಟೀಲ್ ಅವರನ್ನು ಈ ಹುದ್ದೆಗೆ ತರಬೇಕು ಎಂಬ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿವೆ.
ಪಕ್ಷದ ಶಿಸ್ತಿನ ಸಿಪಾಯಿ, ನಿಷ್ಕಳಂಕ ರಾಜಕಾರಣಿ ಎಂದು ಕರೆಯಲ್ಪಡುವ ಡಾ.ಶರಣ್ ಪ್ರಕಾಶ್ ಪಾಟೀಲ್, ಕಲ್ಯಾಣ ಕರ್ನಾಟಕ ಭಾಗದ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿದ್ದಾರೆ. ಎಐಸಿಸಿ ಅಧ್ಯಕ್ಷರಾದ ಎಂ.ಮಲ್ಲಿಕಾರ್ಜುನ ಖರ್ಗೆ ಅವರ ನಿಕಟವರ್ತಿಗಳಲ್ಲಿ ಒಬ್ಬರಾಗಿರುವ ಶರಣ ಪ್ರಕಾಶ್ ಪಾಟೀಲ್, ಸಚಿವರಾಗಿ ಹಲವು ಖಾತೆಗಳನ್ನು ನಿಭಾಯಿಸಿದ್ದಾರೆ.
ಅವರಿಗೆ ಈ ಸ್ಥಾನವನ್ನು ನೀಡಿದರೆ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂಬ ಚರ್ಚೆಯೂ ಆರಂಭವಾಗಿದೆ. ಈ ಭಾಗದಲ್ಲಿ ವೀರಶೈವ ಲಿಂಗಾಯತ ಮತಗಳು ಅಭ್ಯರ್ಥಿಗಳ ಸೋಲು – ಗೆಲುವಿನಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುವುದರಿಂದ ಇದೇ ಸಮುದಾಯಕ್ಕೆ ಸೇರಿದ ಪ್ರಭಾವಿ ಸಚಿವರನ್ನು ಉಪಮುಖ್ಯಮಂತ್ರಿ ಮಾಡಬೇಕು ಎಂಬ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ವಿಜಯನಗರ ಜಿಲ್ಲೆಗಳು ಕಲ್ಯಾಣ ಕರ್ನಾಟಕ ವ್ಯಾಪ್ತಿಗೆ ಒಳಪಡಲಿವೆ. ಒಟ್ಟು 5 ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಈ ಭಾಗದಲ್ಲಿ 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಬೀಗಿತ್ತು. ಇತ್ತೀಚೆಗೆ ಕಳೆದ ಮೇ ತಿಂಗಳಿನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಎಲ್ಲಾ ಲೆಕ್ಕಾಚಾರಗಳನ್ನು ಬುಡಮೇಲು ಮಾಡಿ ಅಭೂತಪೂರ್ವ ಯಶಸ್ಸು ಕಂಡಿತ್ತು. 2024 ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಕನಿಷ್ಠ ಪಕ್ಷ 25 ಕ್ಷೇತ್ರಗಳನ್ನು ಗೆದ್ದು ಎಐಸಿಸಿಗೆ ಭರ್ಜರಿ ಉಡುಗೊರೆ ನೀಡುವ ಲೆಕ್ಕಾಚಾರದಲ್ಲಿ ಕೆಪಿಸಿಸಿಗೆ ಇದೆ. ಇದು ಸಾಧ್ಯವಾಗಬೇಕಾದರೆ ರಾಜ್ಯದಲ್ಲಿ ಅತ್ಯಂತ ಪ್ರಭಾವಿ ಸಮುದಾಯ ಎನಿಸಿದ ವೀರಶೈವ ಲಿಂಗಾಯತ ಸಮುದಾಯಕ್ಕೆ ಡಿಸಿಎಂ ಹುದ್ದೆ ನೀಡಬೇಕು ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲೂ ಕೇಳಿ ಬರುತ್ತಿದೆ.
ಪಕ್ಷಕ್ಕೆ ಅನುಕೂಲ:
ಇನ್ನೂ ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಗೃಹ ಮಂತ್ರಿ ಡಾ. ಪರಮೇಶ್ವರ್, ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಯಾದರೆ ಲೋಕಸಭಾ ಚುನಾವಣೆಗೆ ಅನುಕೂಲವಾಗಲಿದೆ ಎಂಬುದನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ಹಲವು ಸಚಿವರು ಹೇಳಿದ್ದಾರೆ ಎಂದು ತಿಳಿಸಿದರು.
ಸುರ್ಜೇವಾಲ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಅಭಿಪ್ರಾಯ ಕೇಳಿದರು ಆಗ ಲೋಕಸಭಾ ಚುನಾವಣೆ ಬರುತ್ತಿದ್ದು ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಯಾದರೆ ಅನುಕೂಲವಾಗುತ್ತದೆ ಎಂದು ಕೆಲ ಸಚಿವರು ಹೇಳಿದ್ದಾರೆ. ಡಿಸಿಎಂ ಮಾಡೋದು, ಬಿಡೋದು ಹೈಕಮಾಂಡ್‌ಗೆ ಬಿಟ್ಟ ವಿಚಾರ. ನಾವುಗಳು ನಮ್ಮ ಅಭಿಪ್ರಾಯ ಹೇಳಿದ್ದೇವೆ. ಸಾಧಕ ಬಾಧಕ ನೋಡಿಕೊಂಡು ಡಿಸಿಎಂ ಹುದ್ದೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಅವರು ಹೇಳಿದರು.
ನಾವು ಲೋಕಸಭೆ ಬಗ್ಗೆ ಚರ್ಚೆ ಮಾಡಿದ್ದೇವೆ. ಅಭ್ಯರ್ಥಿಗಳು, ಚುನಾವಣಾ ತಂತ್ರಗಾರಿಕೆ ಹೇಗಿರಬೇಕು ಎಂಬ ಬಗ್ಗೆಯೂ ವಿಚಾರ ವಿನಿಮಯ ಮಾಡಿದ್ದೇವೆ. ನಾನು ಎರಡು ಬಾರಿ ಕೆಪಿಸಿಸಿ ಅಧ್ಯಕ್ಷನಾಗಿ ಎರಡು ಚುನಾವಣೆ ಎದುರಿಸಿದ್ದೆ. ಅ ವಿಚಾರಗಳನ್ನು ತಿಳಿಸಿದ್ದೇನೆ. ಅದು ಬಿಟ್ಟು ದೊಡ್ಡ ಪ್ರಮಾಣದ ಚರ್ಚೆ ಆಗಿಲ್ಲ’ ಎಂದರು.