ಬೆಂಗಳೂರು, ಜ.13: ಕಳೆದ ವಿಧಾನಸಭಾ Election ವೇಳೆ ನಾಯಕತ್ವಕ್ಕೆ ಸೆಡ್ಡು ಹೊಡೆದು ಬಿಜೆಪಿಗೆ ಗುಡ್ ಬೈ ಹೇಳಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ಅವರನ್ನು ಮತ್ತೆ ಬಿಜೆಪಿಗೆ ಕರೆ ತರುವ ಪ್ರಯತ್ನ ತೀವ್ರಗೊಂಡಿದೆ.
ವಿಧಾನ ಪರಿಷತ್ ಸದಸ್ಯರಾಗಿರುವ ಶೆಟ್ಟರ್ ಅವರಿಗೆ ಕಾಂಗ್ರೆಸ್ ನಲ್ಲಿ ಅಂತಹ ಮಾನ್ಯತೆ ಸಿಕ್ಕಿಲ್ಲ ಎಂಬುದನ್ನು ಆಧಾರವಾಗಿಟ್ಟು ಅವರನ್ನು ಬಿಜೆಪಿಗೆ ಸೆಳೆಯಲು ಮಾತುಕತೆಗಳು ನಡೆದಿವೆ.
ಶೆಟ್ಟರ್ (Jagadish Shettar) ಅವರು ಬಿಜೆಪಿಗೆ ವಾಪಸ್ಸಾದರೆ ಪಕ್ಷದ ರಾಷ್ಟ್ರೀಯ ಮಂಡಳಿಯಲ್ಲಿ ಉನ್ನತ ಹುದ್ದೆ ನೀಡುವುದಲ್ಲದೆ,ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ಕಣಕ್ಕಿಳಿಸುವ ಕುರಿತು ಆಹ್ವಾನ ನೀಡಲಾಗಿದೆ ಎಂದು ಗೊತ್ತಾಗಿದೆ.
ಪಕ್ಷದ ರಾಷ್ಟ್ರೀಯ ನಾಯಕರೊಬ್ಬರು ಶೆಟ್ಟರ್ ಅವರ ಜೊತೆ ಮಾತನಾಡಿದ್ದಾರೆ.ಇದರ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮಾತನಾಡಿದ್ದಾರೆ.ಅಲ್ಲದೆ ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶೆಟ್ಟರ್ ಜೊತೆ ಮಾತನಾಡಿ,ಅವರನ್ನು ಕರೆತರುವ ಜವಾಬ್ದಾರಿ ನೀಡಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ಹೊರವಲಯದಲ್ಲಿ ನಡೆದ ಬಿಜೆಪಿ ಸರಣಿ ಸಭೆಗಳಲ್ಲೂ ಈ ಕುರಿತು ಚರ್ಚೆ ನಡೆಸಲಾಗಿದ್ದು, ಶೆಟ್ಟರ್ ಅವರನ್ನು ಬಿಜೆಪಿಗೆ ಕರೆತರುವ ಪ್ರಯತ್ನಕ್ಕೆ ಹಿರಿಯ ನಾಯಕರುಗಳು ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ ಶೆಟ್ಟರ್ ಅವರನ್ನು ಬಿಜೆಪಿಗೆ ಕರೆ ತರುವ ಪ್ರಯತ್ನಗಳು ಈಗ ನಡೆದಿವೆ.
ಶೆಟ್ಟರ್ ಅವರನ್ನು ಸಂಪರ್ಕಿಸಿ ಅವರ ಮನವೊಲಿಸುವ ಕೆಲಸವನ್ನು ಯಡಿಯೂರಪ್ಪ ಮಾಡಲಿದ್ದು, ಇವರಿಗೆ ಒತ್ತಾಸೆಯಾಗಿ ಮಾಜಿ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಹ ಶೆಟ್ಟರ್ ಅವರ ಜತೆ ಮುಂದಿನ ದಿನಗಳಲ್ಲಿ ಮಾತುಕತೆ ನಡೆಸುವರು ಎಂದು ಹೇಳಲಾಗಿದೆ.
ಮೂಲಗಳ ಪ್ರಕಾರ ಬಿಜೆಪಿಗೆ ಶೆಟ್ಟರ್ ಬಂದರೆ ಅವರನ್ನು ಈ ಬಾರಿ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಅಭ್ಯರ್ಥಿಯನ್ನಾಗಿಸಲು ಪಕ್ಷದೊಳಗೆ ಗಂಭೀರ ಚಿಂತನೆ ನಡೆದಿದೆ. ಹಾಲಿ ಅಭ್ಯರ್ಥಿ ಮಂಗಳ ಅಂಗಡಿ ಪುನಃ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದು, ಪ್ರಬಲ ಅಭ್ಯರ್ಥಿ ಹುಡುಕಾಟದಲ್ಲಿರುವ ಬಿಜೆಪಿಗೆ ಶೆಟ್ಟರ್ ಆಗಮಿಸಿದರೆ ಹೆಚ್ಚಿನ ಬಲ ಸಿಗಲಿದೆ ಎಂಬ ಲೆಕ್ಕಾಚಾರ ಪಕ್ಷದಲ್ಲಿದೆ.