ಬೆಂಗಳೂರು,ಫೆ.11- ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಖಜಾನೆ ಬರಿದಾಗಿಲ್ಲ,ಬದಲಿಗೆ ಬಡವರ ಸಬಲೀಕರಣವಾಗಿದೆ ಎಂದು ಪ್ರತಿಪಾದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಬಹಿರಂಗ ಚರ್ಚೆಗೆ ಬರುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸವಾಲು ಹಾಕಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಖಜಾನೆ ಖಾಲಿಯಾಗಿದೆ ಎಂದು ಆರೋಪಿಸಿರುವ ಅಮಿತ್ ಶಾ ಅವರಿಗೆ ತಿರುಗೇಟು ನೀಡಿರುವ ಅವರು, ಗ್ಯಾರಂಟಿಯಿಂ ಖಜಾನೆ ಖಾಲಿಯಾಗಿಲ್ಲ ಬದಲಾಗಿ ತೆರಿಗೆ ಹಂಚಿಕೆ ಮತ್ತು ಅನುದಾನ ವಿತರಣೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎನ್ನುವುದನ್ನು ಸಾಬೀತುಪಡಿಸುತ್ತೇನೆ’ ಅವರು ಸವಾಲು ಹಾಕಿದ್ದಾರೆ.
ಅಮಿತ್ ಶಾ ಆರೋಪಕ್ಕೆ ಸ್ಪಷ್ಟನೆಯ ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ,ಗೃಹ ಸಚಿವ ಅಮಿತ್ ಶಾ ‘ಗ್ಯಾರಂಟಿ ಯೋಜನೆಗಳಿಂದ ಬೊಕ್ಕಸ ಖಾಲಿಯಾಗಿದೆ’ ಎಂದು ಸರ್ಕಾರದ ಬಗ್ಗೆ ಈರ್ಷೆ ಹೊರಹಾಕಿದ್ದಾರೆ. ಇದು ಶಾ ಅವರ ಅಭಿಪ್ರಾಯವಾಗಿದ್ದರೆ ಈ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಬರಲಿ ಎಂದು ಹೇಳಿದ್ದಾರೆ.
ಗ್ಯಾರಂಟಿಗಳಿಂದ ಬೊಕ್ಕಸ ಖಾಲಿಯಾಗುತ್ತದೆ ಎಂದಾದರೆ, ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಜಾರಿಯಲ್ಲಿರುವ ಎಲ್ಲ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಾಗಿ ಆ ರಾಜ್ಯಗಳಲ್ಲಿ ಘೋಷಣೆ ಮಾಡಬೇಕು. ಈ ಮೂಲಕ, ತಮ್ಮ ದಮ್ಮು ತಾಕತ್ತು ತೋರಿಸಬೇಕು. ಆಗಾಗ ಗೊಣಗಾಡಿಕೊಂಡರೆ ಏನು ಫಲ’ ಎಂದು ತಿರುಗೇಟು ನೀಡಿದ್ದಾರೆ.
ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧವಿದ್ದರೆ ಬಿಜೆಪಿ ನಾಯಕರು ಅದನ್ನು ಕಂತುಗಳಲ್ಲಿ ಹೇಳುವುದನ್ನು ಬಿಟ್ಟು ಒಂದೇ ಬಾರಿ ನೇರವಾಗಿ, ಸ್ಪಷ್ಟವಾಗಿ ಹೇಳಿಬಿಡಬೇಕು ಎಂದು ಹೇಳಿರುವ ಅವರು, ನಮ್ಮ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ನಮ್ಮ ಗ್ಯಾರಂಟಿಯ ಯೋಜನೆಗಳನ್ನು ಮಾತ್ರ ಅಲ್ಲ, ಗ್ಯಾರಂಟಿ ಎಂಬ ಹೆಸರನ್ನೂ ಕದ್ದು ಈಗ ಅದೇ ಹೆಸರಲ್ಲಿ ಜಾಹೀರಾತು ನೀಡಿದ್ದಾರೆ. ಇದು ಆ ಪಕ್ಷದ ಬಡವರ ವಿರೋಧಿ ನಿಲುವು ಮತ್ತು ಬೌದ್ದಿಕ ದಿವಾಳಿತನವನ್ನು ತೋರಿಸುತ್ತದೆ’ ಎಂದೂ ಆರೋಪಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರಿಂದ ಹಿಡಿದು ಸ್ಥಳೀಯ ಬಿಜೆಪಿ ನಾಯಕರು ನಿಜವಾಗಿ ವಿರೋಧಿಸುವುದು ಗ್ಯಾರಂಟಿ ಯೋಜನೆಗಳನ್ನಲ್ಲ, ಅವರ ಕೆಂಗಣ್ಣು ಬಿದ್ದಿರುವುದು ಈ ಯೋಜನೆಗಳ ಫಲಾನುಭವಿಗಳಾದ ಬಡವರ ಮೇಲೆ. ಬಡ ಜನರಿಗಾಗಿ ಯಾವುದೇ ಕಾರ್ಯಕ್ರಮಗಳನ್ನು ಜಾರಿಗೆ ತಂದರೂ ಅವುಗಳನ್ನು ವಿರೋಧಿಸುತ್ತಲೇ ಬಂದಿರುವ ಇತಿಹಾಸ ಬಿಜೆಪಿ ಮತ್ತು ಸಂಘ ಪರಿವಾರಕ್ಕಿದೆ ಎಂದು ಟೀಕಿಸಿದ್ದಾರೆ
ದಿವಂಗತ ಪ್ರಧಾನಿ ಇಂದಿರಾಗಾಂಧಿಯವರು ಗರೀಬಿ ಹಠಾವೋ ಎಂದು ಕರೆ ನೀಡಿದಾಗಲೂ ಇದೇ ಪರಿವಾರದವರು ಅದನ್ನು ವಿರೋಧಿಸಿದ್ದರು. ಭೂ ಸುಧಾರಣೆ, ಮೀಸಲಾತಿ ಸೇರಿದಂತೆ ಸಾಮಾಜಿಕ ನ್ಯಾಯದ ಯಾವುದೇ ಕಾರ್ಯಕ್ರಮಗಳಿದ್ದರೂ ಇವರ ವಿರೋಧ ಇದ್ದೇ ಇದೆ. ಇದಕ್ಕೆ ಬಡವರೇ ತಕ್ಕ ಉತ್ತರವನ್ನು ಕೊಡಬೇಕು’ ಎಂದಿದ್ದಾರೆ.
ತಮ್ಮ ಸರ್ಕಾರದ ಮೊದಲ ಅವಧಿಯಲ್ಲಿ ನಾನು ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್ ಮೊದಲಾದ ಬಡವರ ಕಲ್ಯಾಣದ ಕಾರ್ಯಕ್ರಮಗಳ ಬಗ್ಗೆಯೂ ಬಿಜೆಪಿ ನಾಯಕರು ಇದೇ ರೀತಿ ತಮ್ಮ ಅಸಹನೆ ಮತ್ತು ಮತ್ಸರ ಕಾರಿಕೊಂಡಿದ್ದರು. ಬಡವರಿಗೆ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆಗೆ ಬೇಕಾದ ಅಕ್ಕಿಯನ್ನು ಕೊಡಲು ನಿರಾಕರಿಸಿದ್ದ ಕೇಂದ್ರ ಸರ್ಕಾರ ಈಗ ಭಾರತ್ ಬ್ರ್ಯಾಂಡಿನಲ್ಲಿ ಅದೇ ಅಕ್ಕಿಯನ್ನು ಮಾರಾಟ ಮಾಡುತ್ತಿದೆ. ನಾವು ಕಿಲೋಗೆ 33 ರೂಪಾಯಿಗೆ ಅಕ್ಕಿ ಕೇಳಿದಾಗ ನಿರಾಕರಿಸಿದ್ದ ಕೇಂದ್ರ ಸರ್ಕಾರ ಈಗ ಕಿಲೋಗೆ 29 ರೂಪಾಯಿಗೆ ಮಾರಾಟ ಮಾಡುತ್ತಿದೆ. ಒಟ್ಟಿನಲ್ಲಿ ಬಿಜೆಪಿಗೆ ಕರ್ನಾಟಕದ ಬಡವರು, ರೈತರು, ಮಹಿಳೆಯರು, ಕಾರ್ಮಿಕರೆಂದರೆ ಅಸಹನೆ’ ಎಂದು ತಿಳಿಸಿದ್ದಾರೆ.
ನಮ್ಮ ಗ್ಯಾರಂಟಿ ಯೋಜನೆಗಳ ವಿರುದ್ದ ಮಾತನಾಡುತ್ತಿರುವ ಗೃಹ ಸಚಿವ ಅಮಿತ್ ಶಾ ಅವರಿಗೆ ಕನ್ನಡಿಗರೆಂದರೆ ತಾತ್ಸಾರ. ಕನ್ನಡ ಧ್ವಜಕ್ಕೆ ವಿರೋಧ, ಹಿಂದಿ ಹೇರಿಕೆಗೆ ಪ್ರಯತ್ನ, ನಂದಿನಿ ಮೇಲೆ ಅಮುಲ್ ಹೇರುವ ಹುನ್ನಾರ ಇವೆಲ್ಲವೂ ಅಮಿತ್ ಶಾ ಸಾಧನೆಗಳು. ಕೇಂದ್ರ ಸರ್ಕಾರ ಬರ ಪರಿಹಾರ ನೀಡಬೇಕೆಂದರೆ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿ ಸಭೆ ನಡೆಸಿ ತೀರ್ಮಾನಿಸಬೇಕು. ಕನ್ನಡಿಗರ ವಿರೋಧಿಯಾಗಿರುವ ಅಮಿತ್ ಶಾ ಅವರು ಆ ಸಭೆಯನ್ನೇ ಕರೆಯುತ್ತಿಲ್ಲ. ಇಂತಹವರು ರಾಜ್ಯಕ್ಕೆ ಬಂದು ನಮಗೆ ಪಾಠ ಮಾಡುತ್ತಿದ್ದಾರೆ’ ಎಂದರು.


1 Comment
Just desire to say your article is as astonishing. The clarity in your post is just spectacular and i could assume you’re an expert on this subject. Well with your permission let me to grab your RSS feed to keep updated with forthcoming post. Thanks a million and please continue the gratifying work.
escort Rio