ನವದೆಹಲಿ- ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಬಿಜೆಪಿಯ ಕಟು ಟೀಕೆಗಳು ಹಾಗೂ ವಿರೋಧದ ನಡುವೆಯೂ ಜನರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.
ನೂರು ದಿನ ಪೂರ್ಣಗೊಳಿಸಿರುವ ಈ ಯಾತ್ರೆಗೆ ರಾಜಸ್ಥಾನದಲ್ಲಿ ಭಾರಿ ಬೆಂಬಲ ವ್ಯಕ್ತವಾಗಿದೆ. ಇದು ಬಿಜೆಪಿ ನಾಯಕರ ನಿದ್ದೆಗೆಡಿಸಿದೆ.ಇದರ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿದ್ದು ಭಾರತ್ ಜೋಡೋ ಯಾತ್ರೆ ಸ್ಥಗಿತಗೊಳಿಸುವಂತೆ ರಾಹುಲ್ ಗಾಂಧಿ ಅವರಿಗೆ ಸೂಚಿಸಿದೆ.
ಇದಕ್ಕೆ ಕಾರಣವೇನು ಗೊತ್ತಾ..ನೆರೆಯ ಚೀನಾ ಜಪಾನ್ ಸೇರಿದಂತೆ ಕೆಲವು ರಾಷ್ಟ್ರಗಳಲ್ಲಿ ಸಾಂಕ್ರಾಮಿಕ ಕೋವಿಡ್ ಹೊಸ ರೂಪದೊಂದಿಗೆ ಕಾಣಿಸಿಕೊಂಡು ಅವಾಂತರ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ವಿಶ್ವ ಆರೋಗ್ಯ ಸಂಸ್ಥೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಚೀನಾ ಸೇರಿ ಇತರೆ ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು ಭಾರತೀಯರು ಜಾಗರೂಕರಾಗಿರಬೇಕು ಎಂದು ಕೋವಿಡ್–19 ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ. ಎನ್.ಕೆ ಅರೋರಾ ಹೇಳಿದ್ದಾರೆ.
ಭಾರತದಲ್ಲಿ ಕೋವಿಡ್ ಪರಿಸ್ಥಿತಿ ನಿಯಂತ್ರಣದಲ್ಲಿದೆ, ಆದರೆ ಚೀನಾದಲ್ಲಿ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಮುಂಜಾಗ್ರತಾ ಕ್ರಮ ಅಗತ್ಯ ಎಂದು ಅವರು ಹೇಳಿದ್ದಾರೆ.
ಚೀನಾದ ಹೊಸ ಉಪ ತಳಿಯ ಬಗ್ಗೆ ನಿಗಾ ವಹಿಸಲಾಗಿದೆ. ಈ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ ಎಂದು ಅರೋರಾ ಮಾಹಿತಿ ನೀಡಿದ್ದಾರೆ ಅಲ್ಲದೆ ನಾವು ಕೊಳಚೆ ನೀರು, ಆಸ್ಪತ್ರೆಗೆ ದಾಖಲಾದ ವ್ಯಕ್ತಿಗಳ ಮಾದರಿಗಳು ಹಾಗೂ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಿಗೆ ಬರುವವರ ಮಾದರಿಗಳನ್ನು ಸ್ವೀಕರಿಸಿ ಪರೀಕ್ಷೆ ಮಾಡುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಇದರ ಬೆನ್ನಲ್ಲೇ ಭಾರತ್ ಜೋಡೊ ಯಾತ್ರೆಯಲ್ಲಿ ಕೋವಿಡ್-19 ಸಂಬಂಧಿತ ಮಾರ್ಗಸೂಚಿಗಳನ್ನು ಅನುಸರಿಸಲು ಅಥವಾ “ದೇಶದ ಹಿತದೃಷ್ಟಿಯಿಂದ” ಯಾತ್ರೆಯನ್ನು ರದ್ದುಗೊಳಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ
ಚೀನಾದಲ್ಲಿ ಪ್ರಕರಣಗಳು ಹೆಚ್ಚುತ್ತಿರುವುದರಿಂದ ದೇಶದಲ್ಲೂ ಹೆಚ್ಚಿನ ನಿಗಾ ಇಡಲಾಗಿದೆ ಎಂದು ಹೇಳಿದ್ದಾರೆ.