ಬೆಂಗಳೂರು, ಜೂ.16- ಕೇಂದ್ರ ಸರ್ಕಾರ ರಾಜಕೀಯ ಕಾರಣಕ್ಕಾಗಿ ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡುತ್ತಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ನಾಯಕರು ರಾಜ ಭವನಕ್ಕೆ ಲಗ್ಗೆ ಹಾಕಿ ಪ್ರತಿಭಟನೆ ನಡೆಸಿದರು.
ಕ್ವಿನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯ ಬಳಿ ಇಂದು ಬೆಳಗ್ಗೆಯಿಂದ ಸೇರಿದ ಸಾವಿರಾರು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಅಲ್ಲಿಂದ ರಾಜಭವನ ಚಲೋ ಹೊರಟಿದ್ದು ಮಾರ್ಗ ಮಧ್ಯದಲ್ಲಿ ಪೊಲೀಸರು ತಡೆದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಹೊರಟ ರಾಜಭವನ ಚಲೋ ಪ್ರತಿಭಟನೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಸಲೀಂ ಅಹ್ಮದ್, ಧ್ರುವನಾರಾಯಣ, ಈಶ್ವರ ಖಂಡ್ರೆ, ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ಇನ್ನಿತರ ಹಿರಿಯ ನಾಯಕರು ಪಾಲ್ಗೊಂಡಿದ್ದರು.
ನಗರದ ಸೇರಿದಂತೆ ರಾಜ್ಯದ ವಿವಿಧೆಡೆ ಯಿಂದ ಬಂದಿದ್ದ ಸಾವಿರಾರು ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರಾಜಭವನ ಚಲೋ ಹೊರಡುವ ಮುನ್ನ ಕಾಂಗ್ರೆಸ್ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನ್ಯಾಯಯುತವಾಗಿ ಪ್ರತಿಭಟನೆ ನಡೆಸುತ್ತಿರುವುದನ್ನು ಹತ್ತಿಕ್ಕಲಾಗುತ್ತಿದೆ ಎಂದು ದೂರಿದರು.
ಪ್ರತಿಭಟನಾ ನಿರತರ ಮೇಲೆ ಸುಳ್ಳು ಕೇಸು ಹಾಕಿ ಹೆದರಿಸುತ್ತಿದ್ದಾರೆ. ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಆಸ್ತಿ ಅವರಿಗೆ ತೊಂದರೆಯಾದರೆ ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಕಾಂಗ್ರೆಸ್ ಪ್ರತಿಭಟನೆ ಹತ್ತಿಕ್ಕಲು ಪೊಲೀಸರು ಕಾರ್ಯಕರ್ತರನ್ನು ಅಲ್ಲಲ್ಲಿಯೇ ತಡೆದಿದ್ದಾರೆ. ಹಾಗಾಗಿ ಕೆಪಿಸಿಸಿ ಕಚೇರಿವರೆಗೂ ಹೆಚ್ಚಿನ ಜನ ಆಗಮಿಸಲು ಸಾಧ್ಯವಾಗಲಿಲ್ಲ. ಕೆಲ ನಾಯಕರನ್ನು ಅವರ ಮನೆ ಬಳಿಯಲ್ಲೇ ನಿರ್ಬಂಸಲಾಗಿತ್ತು. ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ ಕಾರ್ಯಕರ್ತರ ಮೆರವಣಿಗೆಯನ್ನು ತಡೆಯಲಾಯಿತು.
ಕಾಂಗ್ರೆಸ್ ಪ್ರತಿಭಟನೆ ಹಿನ್ನೆಲೆಯಲ್ಲಿ ಕ್ವೀನ್ಸ್ ರೋಡ್- ಇಂಡಿಯನ್ ಎಕ್ಸ್ ಪ್ರೆಸ್, ಜಿಪಿಓ ಸಿಗ್ನಲ್, ಕ್ವೀನ್ಸ್ ರೋಡ್, ಇಂಡಿಯನ್ ಎಕ್ಸ್ ಪ್ರೆಸ್, ವಸಂತನಗರ, ಶಿವಾಜಿನಗರ, ಕೋಲ್ಸ್‌ಪಾರ್ಕ್, ನಂದಿದುರ್ಗ ರಸ್ತೆ, ವಿಧಾನಸೌಧ, ಕೆ ಆರ್ ಸರ್ಕಲ್ ಸೇರಿದಂತೆ ನಗರದ ಹೃದಯ ಭಾಗದಲ್ಲಿ ಸಂಚಾರ ದಟ್ಟಣೆ ಉಂಟಾಯಿತು.